* ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆ* ಇಶಾಂತ್ ಶರ್ಮಾಗೆ ವಿಶ್ರಾಂತಿ ನೀಡಿ ಅಶ್ವಿನ್‌ಗೆ ತಂಡದಲ್ಲಿ ಮಣೆ ಹಾಕುವ ಸಾಧ್ಯತೆ* ಸೆಪ್ಟೆಂಬರ್ 02ರಿಂದ ನಾಲ್ಕನೇ ಟೆಸ್ಟ್ ಪಂದ್ಯ ಆರಂಭ

ನವದೆಹಲಿ(ಆ.30): ಸೆಪ್ಟೆಂಬರ್ 2ರಿಂದ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ 4ನೇ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆ ಇದೆ. ಸ್ಪಿನ್ನರ್‌ ಆರ್‌.ಅಶ್ವಿನ್‌ಗೆ ಆಡುವ ಹನ್ನೊಂದರಲ್ಲಿ ಸ್ಥಾನ ಸಿಗಲಿದೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 

ಇಶಾಂತ್ ಶರ್ಮಾ ಬದಲಿಗೆ ಅಶ್ವಿನ್‌ ಕಣಕ್ಕಿಳಿಯುವ ನಿರೀಕ್ಷೆ ಇದೆಎಂದು ವರದಿಯಲ್ಲಿ ತಿಳಿಸಲಾಗಿದೆ. ಲೀಡ್ಸ್‌ ಟೆಸ್ಟ್‌ ಪಂದ್ಯದಲ್ಲಿ ಇಶಾಂತ್ ಶರ್ಮಾ 22 ಓವರ್‌ ಬೌಲಿಂಗ್ ಮಾಡಿ 92 ರನ್‌ ನೀಡಿದ್ದರು. ಆದರೆ ಇಶಾಂತ್ ಯಾವುದೇ ವಿಕೆಟ್ ಕಬಳಿಸಲು ಯಶಸ್ವಿಯಾಗಿರಲಿಲ್ಲ. ಹೀಗಾಗಿ ಇಂಗ್ಲೆಂಡ್ ವಿರುದ್ದದ ನಾಲ್ಕನೇ ಟೆಸ್ಟ್‌ಗೆ ಇಶಾಂತ್‌ಗೆ ವಿಶ್ರಾಂತಿ ನೀಡಿ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ಗೆ ಮಣೆಹಾಕುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಭಾರತ ಎದುರಿನ 4ನೇ ಟೆಸ್ಟ್‌ಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; 3 ಮಹತ್ವದ ಬದಲಾವಣೆ..!

ಇನ್ನುಳಿದಂತೆ ಟೀಂ ಇಂಡಿಯಾದ ಇಬ್ಬರು ಪ್ರಮುಖ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ, ಈ ಇಬ್ಬರ ಪೈಕಿ ಒಬ್ಬರಿಗೆ ವಿಶ್ರಾಂತಿ ನೀಡಿ ಶಾರ್ದೂಲ್ ಠಾಕೂರ್ ಇಲ್ಲವೇ ಉಮೇಶ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಲಾರ್ಡ್ಸ್‌ ಟೆಸ್ಟ್‌ನಲ್ಲಿ ಅಮೋಘ ಗೆಲುವು ದಾಖಲಿಸಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಲೀಡ್ಸ್‌ ಟೆಸ್ಟ್‌ನಲ್ಲಿ ಆಘಾತಕಾರಿ ಸೋಲು ಕಂಡಿತ್ತು. ಹೀಗಾಗಿ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1ರ ಸಮಬಲ ಸಾಧಿಸಿವೆ. ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿತ್ತು.