ಕ್ರೈಸ್ಟ್ಚರ್ಚ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. 181 ರನ್ಗಳ ಗುರಿ ಬೆನ್ನತ್ತಿದ ಭಾರತ 70 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿದ್ದರೂ, ತಿಲಕ್ ವರ್ಮಾ ಅವರ ಅಜೇಯ ಅರ್ಧಶತಕದ ನೆರವಿನಿಂದ ಗೆಲುವು ಒಲಿಸಿಕೊಂಡಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ.
ಕ್ರೈಸ್ಟ್ಚರ್ಚ್: ತಿಲಕ್ ವರ್ಮಾ ಸ್ಪೋಟಕ ಅರ್ಧಶತಕ, ನಮನ್ ಧೀರ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಮಿಂಚಿನ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಗೆಲ್ಲಲು 181 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು ಇನ್ನೂ ಒಂದು ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ಭಾರತ ತಂಡವು ಟಿ20 ಕ್ರಿಕೆಟ್ನಲ್ಲಿ 200ನೇ ಗೆಲುವು ದಾಖಲಿಸಿದ ಸಾಧನೆ ಮಾಡಿತು.
ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಸವಾಲಿನ ಗುರಿ ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಕಳೆದ ಪಂದ್ಯದ ಹೀರೋ ಸಂಜು ಸ್ಯಾಮ್ಸನ್ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಬ್ಯಾಟಿಂಗ್ 27 ರನ್ಗಳಿಗೆ ಸೀಮಿತವಾಯಿತು. ಇನ್ನು ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ವೈಭವ್ ಸೂರ್ಯವಂಶಿ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ನಾಯಕ ಶ್ರೇಯಸ್ ಅಯ್ಯರ್ ಕೂಡಾ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಅಕ್ಷರ್ ಪಟೇಲ್ ಕೂಡಾ 11 ರನ್ ಗಳಿಸಿ ಮಿಚೆಲ್ ಸ್ಯಾಂಟ್ನರ್ಗೆ ವಿಕೆಟ್ ಒಪ್ಪಿಸಿದರು.
ಗೆಲುವಿನ ದಡ ಸೇರಿಸಿದ ತಿಲಕ್ ವರ್ಮಾ!
ಒಂದು ಹಂತದಲ್ಲಿ ಕೇವಲ 70 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ತಿಲಕ್ ವರ್ಮಾ ಹಾಗೂ ನಮನ್ ಧೀರ್ 42 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ನಮನ್ ಧೀರ್ 17 ಎಸೆತಗಳಲ್ಲಿ 31 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಏಳನೇ ವಿಕೆಟ್ಗೆ ತಿಲಕ್ ವರ್ಮಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಕೇವಲ 30 ಎಸೆತಗಳಲ್ಲಿ ಮುರಿಯದ 69 ರನ್ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ತಿಲಕ್ ವರ್ಮಾ 26 ಎಸೆತಗಳನ್ನು ಎದುರಿಸಿ ಅಜೇಯ 51 ರನ್ ಬಾರಿಸಿದರೆ, ನಿತೀಶ್ ಕುಮಾರ್ ರೆಡ್ಡಿ 13 ಎಸೆತಗಳಲ್ಲಿ 26 ರನ್ ಬಾರಿಸಿದರು.
ಮತ್ತೆ ಮಿಂಚಿದ ಗ್ಲೆನ್ ಫಿಲಿಫ್ಸ್
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಲಿಳಿದ ಕಿವೀಸ್ ತಂಡ ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. 41 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಲ್ಕನೇ ವಿಕೆಟ್ಗೆ ಗ್ಲೆನ್ ಫಿಲಿಫ್ಸ್ ಹಾಗೂ ಬೆವೊನ್ ಜೇಕೊಬ್ಸ್ 116 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಭಾರತೀಯ ಬೌಲರ್ಗಳನ್ನು ಮತ್ತೊಮ್ಮೆ ದಂಡಿಸಿದ ಗ್ಲೆನ್ ಫಿಲಿಫ್ಸ್ 43 ಎಸೆತಗಳಲ್ಲಿ 70 ರನ್ ಬಾರಿಸಿದರೆ, ಜೇಕೊಬ್ಸ್ 46 ಎಸೆತಗಳನ್ನು ಎದುರಿಸಿ 58 ರನ್ ಗಳಿಸಿ ನಿತೀಶ್ ಕುಮಾರ್ ರೆಡ್ಡಿಗೆ ವಿಕೆಟ್ ಒಪ್ಪಿಸಿದರು.







