ಭಾರತ-ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ ಕಿವೀಸ್‌ಗೆ ಸಾಧಾರಣ ಗುರಿಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ ಏಕದಿನ ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ಆಸರೆಯಾದ ವಾಷಿಂಗ್ಟನ್ ಸುಂದರ್

ಕ್ರೈಸ್ಟ್‌ಚರ್ಚ್‌(ನ.30): ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬಾರಿಸಿದ ಚೊಚ್ಚಲ ಏಕದಿನ ಅರ್ಧಶತಕ ಹಾಗೂ ಶ್ರೇಯಸ್ ಬಾರಿಸಿದ ಸಮಯೋಚಿತ 49 ರನ್‌ಗಳ ನೆರವಿನಿಂದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 219 ರನ್ ಕಲೆಹಾಕಿದೆ. ಈ ಮೂಲಕ ಆತಿಥೇಯ ನ್ಯೂಜಿಲೆಂಡ್ ತಂಡಕ್ಕೆ ಸಾಧಾರಣ ಗುರಿ ನೀಡಿದೆ. 

ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್‌ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಶಿಖರ್ ಧವನ್ ಬ್ಯಾಟಿಂಗ್ 28 ರನ್‌ಗಳಿಗೆ ಸೀಮಿತವಾಯಿತು. ಇನ್ನು ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. 16 ಎಸೆತಗಳನ್ನು ಎದುರಿಸಿದ ಪಂತ್ 10 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್(6) ಕೇವಲ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ದೀಪಕ್ ಹೂಡಾ(12) ಕೂಡಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲರಾದರು.

ಶ್ರೇಯಸ್‌-ಸುಂದರ್ ಆಸರೆ: ಹೌದು, ಒಂದು ಕಡೆ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರೇ ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಹಾಗೂ ವಾಷಿಂಗ್ಟನ್ ಸುಂದರ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಚಚ್ಚಿದ್ದ ಶ್ರೇಯಸ್ ಅಯ್ಯರ್ 59 ಎಸೆತಗಳನ್ನು ಎದುರಿಸಿ 8 ಬೌಂಡರಿ ಸಹಿತ ಆಕರ್ಷಕ 49 ರನ್ ಬಾರಿಸಿ ಲಾಕಿ ಫರ್ಗ್ಯೂಸನ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. 

ಇನ್ನು ಶ್ರೇಯಸ್ ಅಯ್ಯರ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಾಷಿಂಗ್ಟನ್ ಸುಂದರ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ಟೀಂ ಇಂಡಿಯಾ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ವಾಷಿಂಗ್ಟನ್ ಸುಂದರ್ 64 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಆಕರ್ಷಕ 51 ರನ್‌ಗಳ ಇನಿಂಗ್ಸ್‌ ಆಡಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.

Scroll to load tweet…

ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಪರ ಅತ್ಯಂತ ಶಿಸ್ತುಬದ್ದ ದಾಳಿ ನಡೆಸಿದ ಡೇರಲ್ ಮಿಚೆಲ್ 25 ರನ್ ನೀಡಿ 3 ವಿಕೆಟ್ ಪಡೆದರೆ, ಆಡಂ ಮಿಲ್ನೆ 57 ರನ್ ನೀಡಿ 3 ವಿಕೆಟ್ ತನ್ನ ಖಾತೆಗೆ ಸೇರಿಸಿಕೊಂಡರು. ಇನ್ನು ಅನುಭವಿ ವೇಗಿ ಟಿಮ್ ಸೌಥಿ ಎರಡು ಮತ್ತು ಲಾಕಿ ಫರ್ಗ್ಯೂಸನ್ & ಮಿಚೆಲ್ ಸ್ಯಾಂಟ್ನರ್ ತಲಾ ಒಂದೊಂದು ವಿಕೆಟ್ ಪಡೆದರು.