Ind vs NZ 3rd ODI: ಭಾರತ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ, ಒಂದು ಬದಲಾವಣೆ
ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯಕ್ಕೆ ವೆಲ್ಲಿಂಗ್ಟನ್ ಆತಿಥ್ಯ
ಟಾಸ್ ಗೆದ್ದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ
ನ್ಯೂಜಿಲೆಂಡ್ ತಂಡದಲ್ಲಿ ಒಂದು ಮಹತ್ವದ ಬದಲಾವಣೆ

ಕ್ರೈಸ್ಟ್‌ಚರ್ಚ್(ನ.30): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಸದ್ಯ ನ್ಯೂಜಿಲೆಂಡ್ ತಂಡವು 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಮೈಕಲ್ ಬ್ರಾಸ್‌ವೆಲ್ ಬದಲಿಗೆ ಆಡಂ ಮಿಲ್ನೆ ಕಿವೀಸ್ ತಂಡ ಕೂಡಿಕೊಂಡಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಪಂದ್ಯಕ್ಕೆ ಇಲ್ಲಿನ ಹೇಗ್ಲೆ ಓವಲ್ ಮೈದಾನ ಆತಿಥ್ಯ ವಹಿಸಿದೆ. ಭಾರತ ಎದುರಿನ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ನ್ಯೂಜಿಲೆಂಡ್ ತಂಡವು, ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ.
Ind vs NZ ಭಾರತ-ನ್ಯೂಜಿಲೆಂಡ್ 3ನೇ ಏಕದಿನ ಇಂದು; ಟೀಂ ಇಂಡಿಯಾಗೆ ಮಾಡು ಇಲ್ಲವೇ ಮಡಿ ಪಂದ್ಯ
ಸಂಜು ಸ್ಯಾಮ್ಸನ್‌ಗೆ ನಿರಾಸೆ: ವಿಕೆಟ್ ಕೀಪರ್ ರಿಷಭ್ ಪಂತ್ ಪದೇ ಪದೇ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಬೆನ್ನಲ್ಲೇ ಮೂರನೇ ಪಂದ್ಯದಲ್ಲಿ ಮತ್ತೆ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಆರನೇ ಬೌಲರ್ ರೂಪದಲ್ಲಿ ದೀಪಕ್ ಹೂಡಾಗೆ ಅವಕಾಶ ಒದಗಿಸಿದ್ದರಿಂದಾಗಿ ಸಂಜು ಸ್ಯಾಮ್ಸನ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಗಿದೆ. ಸಂಜು ಸ್ಯಾಮ್ಸನ್ ಏಕದಿನ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದ್ದರೂ ಸಹಾ ಮತ್ತೊಮ್ಮೆ ನಿರಾಸೆ ಎದುರಾಗಿದೆ.
ಭಾರತ ತಂಡದ ಪರ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ ಒಳ್ಳೆಯ ಲಯದಲ್ಲಿದ್ದು, ಮತ್ತೊಂದು ದೊಡ್ಡ ಇನಿಂಗ್ಸ್ ತಂಡವು ಈ ಮೂವರು ಬ್ಯಾಟರ್‌ಗಳಿಂದ ನಿರೀಕ್ಷಿಸುತ್ತಿದೆ. ಇನ್ನು ಬೌಲಿಂಗ್ ಆಲ್ರೌಂಡರ್‌ಗಳಾದ ವಾಷಿಂಗ್ಟನ್ ಸುಂದರ್ ಹಾಗೂ ದೀಪಕ್ ಚಹರ್ ಜತೆಗೆ ವೇಗಿಗಳಾದ ಉಮ್ರಾನ್ ಮಲಿಕ್, ಆರ್ಶದೀಪ್ ಸಿಂಗ್ ಮೇಲೆ ದೊಡ್ಡ ಜವಾಬ್ದಾರಿಯಿದೆ.
ಇನ್ನು ಮೊದಲ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತ ಬೆನ್ನತ್ತಿ ಗೆದ್ದು ಬೀಗುತ್ತಿರುವ ಕೇನ್ ವಿಲಿಯಮ್ಸನ್ ಪಡೆ, ಇದೀಗ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಆರಂಭಿಕರಾದ ಡೆವೊನ್ ಕಾನ್‌ವೇ, ಫಿನ್ ಅಲೆನ್ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ನಾಯಕ ಕೇನ್ ವಿಲಿಯಮ್ಸನ್, ಡೇರಲ್ ಮಿಚೆಲ್, ಗ್ಲೆನ್ ಫಿಲಿಫ್ಸ್ ಹಾಗೂ ಟಾಮ್ ಲೇಥಮ್ ಕಿವೀಸ್ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿದ್ದಾರೆ. ಇನ್ನು ಅನುಭವಿ ವೇಗಿ ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ ಜತೆಗೆ ಅನುಭವಿ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್, ಟೀಂ ಇಂಡಿಯಾ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
ತಂಡಗಳು ಹೀಗಿವೆ ನೋಡಿ:
ಭಾರತ: ಶಿಖರ್ ಧವನ್(ನಾಯಕ), ಶುಭ್‌ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಉಮ್ರಾನ್ ಮಲಿಕ್, ಆರ್ಶದೀಪ್ ಸಿಂಗ್, ಯುಜುವೇಂದ್ರ ಚಹಲ್.
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್‌ವೇ, ಕೇನ್ ವಿಲಿಯಮ್ಸನ್(ನಾಯಕ), ಡೇರಲ್ ಮಿಚೆಲ್, ಟಾಮ್ ಲೇಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಫ್ಸ್, ಮಿಚೆಲ್ ಸ್ಯಾಂಟ್ನರ್, ಆಡಂ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್.
ಪಂದ್ಯ: ಬೆಳಗ್ಗೆ 7.10ಕ್ಕೆ
ನೇರ ಪ್ರಸಾರ: ಡಿಡಿ ಸ್ಪೋರ್ಟ್ಸ್/ಅಮೆಜಾನ್ ಪ್ರೈಮ್