Ind vs NZ 3rd T20I: ಕಿವೀಸ್ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
* ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ-ನ್ಯೂಜಿಲೆಂಡ್ ಮೂರನೇ ಟಿ20 ಕದನ
* ಈಗಾಗಲೇ ಮೊದಲೆರಡು ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಭಾರತ
* ಸರಣಿ ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದೆ ಟೀಂ ಇಂಡಿಯಾ
ಕೋಲ್ಕತಾ(ನ.21): ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಪಂದ್ಯಕ್ಕೆ ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯವನ್ನು ವಹಿಸಿದೆ. 3 ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿರುವ ಆತಿಥೇಯ ಟೀಂ ಇಂಡಿಯಾ ನಿರೀಕ್ಷೆಯಂತೆಯೇ ಕೆಲವು ಬದಲಾವಣೆಗಳನ್ನು ಮಾಡಿದೆ. ಭಾರತ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು. ಕೆ.ಎಲ್. ರಾಹುಲ್ (KL Rahul) ಹಾಗೂ ರವಿಚಂದ್ರನ್ ಅಶ್ವಿನ್‌ಗೆ (Ravichandran Ashwin) ವಿಶ್ರಾಂತಿ ನೀಡಲಾಗಿದೆ. ರಾಹುಲ್ ಬದಲಿಗೆ ಇಶಾನ್ ಕಿಶನ್ (Ishan Kishan) ಹಾಗೂ ಅಶ್ವಿನ್ ಬದಲಿಗೆ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ (Yuzvendra Chahal) ತಂಡ ಕೂಡಿಕೊಂಡಿದ್ದಾರೆ.
ಇನ್ನೊಂದೆಡೆ ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಟಿಮ್ ಸೌಥಿಗೆ (Tim Southee) ವಿಶ್ರಾಂತಿ ನೀಡಲಾಗಿದ್ದು, ಮಿಚೆಲ್ ಸ್ಯಾಂಟ್ನರ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸೌಥಿ ಬದಲಿಗೆ ಲಾಕಿ ಫರ್ಗ್ಯೂಸನ್(Lockie Ferguson) ಕಿವೀಸ್ ತಂಡ ಕೂಡಿಕೊಂಡಿದ್ದಾರೆ.
Ind vs NZ Series: ಈಡನ್‌ಗಾರ್ಡನ್ಸ್‌ನಲ್ಲಿಂದು ರೋಹಿತ್ ಶರ್ಮಾ ಮತ್ತೊಂದು ಸ್ಪೆಷಲ್ ಇನಿಂಗ್ಸ್..?
ಮೂರು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ನಾಯಕ ರೋಹಿತ್ ಶರ್ಮಾ (Rohit Sharma) ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದರು. ಜೈಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತ್ತು. ಇನ್ನು ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 7 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿ ಜಯಿಸಿತ್ತು. ಇದೀಗ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದೆ ಭಾರತ ತಂಡ.
ಈಡನ್ ಗಾರ್ಡನ್ಸ್ ಮೈದಾನದಲ್ಲಿ ಅಸಾಧಾರಣ ದಾಖಲೆ ಹೊಂದಿರುವ ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಲಿಗೆ ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನ (Eden Gardens stadium) ಅದೃಷ್ಟದ ಮೈದಾನ ಎನಿಸಿಕೊಂಡಿದೆ. ರೋಹಿತ್ ಶರ್ಮಾ ಈಡನ್ ಗಾರ್ಡನ್ಸ್‌ನಲ್ಲಿ 7 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 2 ಶತಕ, 1 ಅರ್ಧಶತಕದೊಂದಿಗೆ 569 ರನ್ ಕಲೆಹಾಕಿದ್ದಾರೆ. ಶ್ರೀಲಂಕಾ ವಿರುದ್ಧ 2014ರಲ್ಲಿ ನಡೆದ ಏಕದಿನ ಪಂದ್ಯದಲ್ಲಿ 264 ರನ್ ಸಿಡಿಸಿ ವಿಶ್ವದಾಖಲೆ ಬರೆದಿದ್ದು ಇದೇ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ. ಒಟ್ಟು 173 ಎಸೆತಗಳಲ್ಲಿ ರೋಹಿತ್ ಶರ್ಮಾ 33 ಬೌಂಡರಿ, 9 ಸಿಕ್ಸರ್‌ಗಳನ್ನು ಚಚ್ಚಿದ್ದರು. ಇಂದಿಗೂ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ರೋಹಿತ್ ಹೆಸರಿನಲ್ಲಿಯೇ ಇದೆ.
Ind vs NZ Series: ಟೀಂ ಇಂಡಿಯಾಗೆ ಟಿ20 ಸರಣಿ ಕ್ಲೀನ್ ಸ್ವೀಪ್ ಗುರಿ..!
ತಂಡಗಳು ಹೀಗಿವೆ ನೋಡಿ
ಭಾರತ ಕ್ರಿಕೆಟ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್.
ನ್ಯೂಜಿಲೆಂಡ್ ಕ್ರಿಕೆಟ್ ತಂಡ: ಮಾರ್ಟಿನ್ ಗಪ್ಟಿಲ್, ಡೇರಲ್ ಮಿಚೆಲ್, ಚ್ಯಾಪ್ಮನ್, ಗ್ಲೆನ್ ಫಿಲಿಫ್ಸ್, ಟಿಮ್ ಸೀಫರ್ಟ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್(ನಾಯಕ), ಲಾಕಿ ಫರ್ಗ್ಯೂಸನ್, ಟಾಡ್ ಆ್ಯಸ್ಟಲ್, ಆಡಂ ಮಿಲ್ನೆ, ಟ್ರೆಂಟ್ ಬೌಲ್ಟ್.