ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು, ಸರಣಿ 1-1 ಸಮಬಲಗೊಂಡಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ನಿರೀಕ್ಷೆಯಿದೆ.
ಧರ್ಮಶಾಲಾ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಧರ್ಮಶಾಲಾ ಆತಿಥ್ಯ ವಹಿಸಿದೆ. 5 ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಇದೀಗ ಸರಣಿಯಲ್ಲಿ ಮುನ್ನಡೆ ಸಾಧಿಸಲು ಎರಡು ತಂಡಗಳು ತುದಿಗಾಲಿನಲ್ಲಿ ನಿಂತಿವೆ. ಮೊದಲ ಪಂದ್ಯದಲ್ಲಿ ಭಾರತ ಜಯಿಸಿದ್ದರೇ, ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡವು ಜಯಿಸಿತ್ತು. ಇದೀಗ ಮೂರನೇ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಮೂರನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.
ಭಾರತ ತಂಡದಲ್ಲಿ ಮೇಜರ್ ಚೇಂಜ್?
ಮೂರನೇ ಹಾಗೂ ಮಹತ್ವದ ಟಿ20 ಪಂದ್ಯದಲ್ಲಿ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಒಂದು ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ದೇಶಿ ಕ್ರಿಕೆಟ್‌ನಲ್ಲೂ ಒಳ್ಳೆಯ ರನ್ ರಾಶಿಯನ್ನೇ ಕಲೆಹಾಕಿದ್ದಾರೆ. ಇದೇ ಕಾರಣಕ್ಕಾಗಿ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಿದ್ದರು. ಹೀಗಾಗಿ ಇಂದು ಶುಭ್‌ಮನ್ ಗಿಲ್ ಇಲ್ಲವೇ ಜಿತೇಶ್ ಶರ್ಮಾ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಕಳೆದೆರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿರುವ ಗಿಲ್:
ಭಾರತ ಟಿ20 ತಂಡದ ಉಪನಾಯಕ ಶುಭ್‌ಮನ್ ಗಿಲ್ ಆರಂಭಿಕರಾಗಿ ಮೊದಲೆರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಎರಡು ಎಸೆತಗಳಲ್ಲಿ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಎರಡನೇ ಟಿ20 ಪಂದ್ಯದಲ್ಲಿ ಗಿಲ್ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಪೆರೇಡ್ ನಡೆಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಎಲ್ಲರ ಕಣ್ಣು ಶುಭ್‌ಮನ್ ಗಿಲ್ ಅವರ ಮೇಲಿದೆ. ಫಾರ್ಮ್‌ನಲ್ಲಿರುವ ಸಂಜು ಸ್ಯಾಮ್ಸನ್ ಅವರನ್ನು ಹೊರಗಿಟ್ಟು ಗಿಲ್‌ಗೆ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಗಿಲ್ ಮೇಲೆ ಸಾಕಷ್ಟು ಒತ್ತಡವಿದೆ.
ಭಾರತ: ಅಭಿಷೇಕ್ ಶರ್ಮಾ, ಶುಭ್‌ಮನ್ ಗಿಲ್/ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ತಂಡದಲ್ಲೂ ಒಂದು ಬದಲಾವಣೆ?
ದಕ್ಷಿಣ ಆಫ್ರಿಕಾ ತಂಡವು ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾಗೆ ತಿರುಗೇಟು ನೀಡಿತ್ತು. ಬ್ಯಾಟಿಂಗ್‌ನಲ್ಲಿ ಎಲ್ಲಾ ಬ್ಯಾಟರ್‌ಗಳು ಮಿಂಚಿದ್ದರು. ಆದರೆ ರೀಜಾ ಹೆಂಡ್ರಿಕ್ಸ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದರು. ಹೀಗಾಗಿ ಹೆಂಡ್ರಿಕ್ಸ್ ಬದಲಿಗೆ ರಿಯಾನ್ ರಿಕೆಲ್ಟನ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಿಯಾನ್ ರಿಕಲ್ಟನ್, ಏಯ್ಡನ್ ಮಾರ್ಕ್‌ರಮ್(ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೇವಿಸ್, ಡೇವಿಡ್ ಮಿಲ್ಲರ್, ಡೆನೊವನ್ ಫೆರೇರಾ, ಜಾರ್ಜ್ ಲಿಂಡೆ, ಮಾರ್ಕೊ ಯಾನ್ಸನ್, ಓಟ್ಟಿನೆಲ್ ಬಾರ್ಟ್‌ಮನ್, ಲುಂಗಿ ಎಂಗಿಡಿ
ಪಂದ್ಯ ಆರಂಭ: ಸಂಜೆ 7ಕ್ಕೆ,
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್/ಜಿಯೋ ಹಾಟ್‌ಸ್ಟಾರ್


