ಕ್ರೈಸ್ಟ್ಚರ್ಚ್ನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಗಾಯಾಳು ಇಶಾನ್ ಕಿಶನ್ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿ ಹಾಗೂ ಮಯಾಂಕ್ ಯಾದವ್ ಬದಲಿಗೆ ಪ್ರಿನ್ಸ್ ಯಾದವ್ ತಂಡ ಸೇರಿದ್ದಾರೆ. ವೈಭವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.
ಕ್ರೈಸ್ಟ್ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಭಾರತ, ಇದೀಗ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.
ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಇಶಾನ್ ಕಿಶನ್ ಗಾಯದ ಸಮಸ್ಯೆಯಿಂದ ಎರಡನೇ ಪಂದ್ಯಕ್ಕೆ ಅಲಭ್ಯರಾಗಿರುವುದರಿಂದ ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿ ತಂಡ ಕೂಡಿಕೊಂಡಿದ್ದಾರೆ. ಇನ್ನು ವೇಗಿ ಮಯಾಂಕ್ ಯಾದವ್ ಬದಲಿಗೆ ಪ್ರಿನ್ಸ್ ಯಾದವ್ಗೆ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕಲಾಗಿದೆ. ಮಯಾಂಕ್ ಬದಲಿಗೆ ಪ್ರಿನ್ಸ್ಗೆ ಮಣೆಹಾಕಿದ್ದು ತಾಂತ್ರಿಕ ಕಾರಣದಿಂದ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಕಿವೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆಡಂ ಮಿಲ್ನೆ ಬದಲಿಗೆ ಜೇಕಬ್ ಡಫಿ ತಂಡ ಕೂಡಿಕೊಂಡಿದ್ದಾರೆ.
ವೈಭವ್ ಸೂರ್ಯವಂಶಿ ಬಗ್ಗೆ ಮಹತ್ವದ ಅಪ್ಡೇಟ್:
15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಆರಂಭಿಕನಾಗಿ ಹೆಚ್ಚು ಯಶಸ್ಸು ಗಳಿಸಿದ್ದಾರೆ. ಆದರೆ ಇದೀಗ ಇಶಾನ್ ಕಿಶನ್ ಬದಲಿಗೆ ತಂಡ ಕೂಡಿಕೊಂಡಿರುವ ವೈಭವ್ ಯಾವ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದಾರೆ ಎನ್ನುವ ಕುತೂಹಲ ಜೋರಾಗಿತ್ತು. ಯಾಕೆಂದರೆ ಏಷ್ಯನ್ ಗೇಮ್ಸ್ನಲ್ಲೂ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಿದ್ದರು. ಸಂಜು ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ ಇದೀಗ ಟಾಸ್ ವೇಳೆ ಈ ಕುರಿತಂತೆ ಶ್ರೇಯಸ್ ಅಯ್ಯರ್ ಸ್ಪಷ್ಟನೆ ನೀಡಿದ್ದು, ವೈಭವ್ ಸೂರ್ಯವಂಶಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಭಾರತ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
ಎರಡನೇ ಟಿ20 ಪಂದ್ಯಕ್ಕೆ ಉಭಯ ತಂಡಗಳ ಆಟಗಾರರ ಪಟ್ಟಿ:
ಭಾರತ: ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್.
ನ್ಯೂಜಿಲೆಂಡ್: ಫಿನ್ ಅಲೆನ್, ಟಿಮ್ ಸೈಫರ್ಟ್(ವಿಕೆಟ್ ಕೀಪರ್), ಡೇರಲ್ ಮಿಚೆಲ್, ಗ್ಲೆನ್ ಫಿಲಿಫ್ಸ್, ಬೆವೊನ್ ಜೇಕೊಬ್ಸ್, ಮಿಚೆಲ್ ಬ್ರೇಸ್ವೆಲ್, ಮಿಚೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ನೇಥನ್ ಸ್ಮಿತ್, ಮ್ಯಾಟ್ ಹೆನ್ರಿ, ಜೇಕೊಬ್ ಡಫಿ, ಲಾಕಿ ಫರ್ಗ್ಯೂಸನ್.







