ಭಾರತ ಮತ್ತು ಆಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಗಾಯದ ಸಮಸ್ಯೆಯಿಂದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಮತ್ತು ಭಾರತದ ಸಂಭಾವ್ಯ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದನ್ನು ಈ ಲೇಖನದಲ್ಲಿ ಚರ್ಚಿಸಲಾಗಿದೆ.

India’s Predicted Playing 11: ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಶನಿವಾರ ಅಂದರೆ ಜೂನ್ 13ರಂದು ಧರ್ಮಶಾಲಾದ ಎಚ್‌ಪಿಸಿಎ ಮೈದಾನದಲ್ಲಿ ನಡೆಯಲಿದೆ. ಆಫ್ಘಾನಿಸ್ತಾನ ಎದುರಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 300 ರನ್‌ಗಳ ಭರ್ಜರಿ ಗೆಲುವು ದಾಖಲಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಶುಭ್‌ಮನ್ ಗಿಲ್ ಪಡೆ ಇದೀಗ ಏಕದಿನ ಸರಣಿಗೆ ಸಜ್ಜಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಫಿಟ್ನೆಸ್ ಸಮಸ್ಯೆಯಿಂದ ರನ್ ಮಷೀನ್ ವಿರಾಟ್ ಕೊಹ್ಲಿ ಹಾಗೂ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೊರಬಿದ್ದಿರುವುದು ಟೀಂ ಇಂಡಿಯಾ ಪಾಲಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಹೀಗಾಗಿ ಈ ಇಬ್ಬರ ಸ್ಥಾನದಲ್ಲಿ ಆಫ್ಘಾನಿಸ್ತಾನ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಆಡೋರು ಯಾರು ಎನ್ನುವ ಬಗ್ಗೆ ಕುತೂಹಲ ಜೋರಾಗಿದೆ. ಇದೀಗ ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್ ಭಾರತ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದೆ.

ಆಫ್ಘಾನ್ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ಆಡುವ ಹನ್ನೊಂದರ ಬಳಗ:

ಅಂದಹಾಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನದಲ್ಲಿರುವ ಟೀಂ ಇಂಡಿಯಾ, ಇದೀಗ ಆಫ್ಘಾನಿಸ್ತಾನದ ಸವಾಲಿಗೆ ಸಜ್ಜಾಗಿದೆ. ಶುಭ್‌ಮನ್ ಗಿಲ್ ಜತೆಗೆ ಆರಂಭಿಕರಾಗಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗಷ್ಟೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿದ್ದು, ಭಾರತ ತಂಡ ಕೂಡಿಕೊಂಡಿದ್ದಾರೆ. ತಂಡದಲ್ಲಿ ಯಶಸ್ವಿ ಜೈಸ್ವಾಲ್ ಕೂಡಾ ಸ್ಥಾನ ಪಡೆದಿದ್ದಾರೆಯಾದರೂ, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಅನುಮಾನ.

ಇನ್ನು ಆಫ್ಘಾನ್ ಎದುರಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಬಿದ್ದಿರುವುದರಿಂದ ಅವರ ಸ್ಥಾನದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇಶಾನ್ ಕಿಶನ್ 2023ರ ಅಕ್ಟೋಬರ್ 11ರಂದು ದೆಹಲಿಯಲ್ಲಿ ಆಫ್ಘಾನಿಸ್ತಾನ ವಿರುದ್ದವೇ ಕಡೆಯ ಪಂದ್ಯವನ್ನಾಡಿದ್ದರು. 19ನೇ ಸೀಸನ್ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಅದ್ಭುತ ಪ್ರದರ್ಶನ ತೋರಿದ್ದರಿಂದ ಏಕದಿನ ಸರಣಿಯಲ್ಲೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಇನ್ನುಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಹಾಗೂ ಆರನೇ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿಕೊಂಡಿದೆ.

ಪ್ರಿನ್ಸ್ ಯಾದವ್ ಟೀಂ ಇಂಡಿಯಾಗೆ ಪಾದಾರ್ಪಣೆ?

ಇನ್ನು ಸ್ಪಿನ್ನರ್‌ಗಳಾಗಿ ವಾಷಿಂಗ್ಟನ್ ಸುಂದರ್ ಹಾಗೂ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದು, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅನುಪಸ್ಥಿತಿಯಲ್ಲಿ ಅರ್ಶದೀಪ್ ಸಿಂಗ್ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಇವರಿಗೆ ಕನ್ನಡಿಗ ವೇಗಿ ಪ್ರಸಿದ್ದ್ ಕೃಷ್ಣ ಸಾಥ್ ನೀಡಲಿದ್ದಾರೆ. ಇನ್ನು ಮೂರನೇ ವೇಗಿಯ ರೂಪದಲ್ಲಿ ಪ್ರಿನ್ಸ್ ಯಾದವ್ ಹಾಗೂ ಗುರ್ನೂರ್ ಬ್ರಾರ್ ನಡುವೆ ಸಾಕಷ್ಟು ಪೈಪೋಟಿ ಏರ್ಪಟ್ಟಿದೆ. ಸದ್ಯದ ಮಾಧ್ಯಮಗಳ ವರದಿಗಳ ಪ್ರಕಾರ, ಪ್ರಿನ್ಸ್ ಯಾದವ್ ಭಾರತ ಪರ ಪಾದಾರ್ಪಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ಆಫ್ಘಾನಿಸ್ತಾನ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ:

ರೋಹಿತ್ ಶರ್ಮಾ, ಶುಭ್‌ಮನ್ ಗಿಲ್(ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್(ಉಪನಾಯಕ), ಕೆ ಎಲ್ ರಾಹುಲ್(ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ದ್ ಕೃಷ್ಣ.