* ಇಂಗ್ಲೆಂಡ್ ಎದುರು ಮಾರಕ ದಾಳಿಯ ಮೂಲಕ ಗಮನ ಸೆಳೆಯುತ್ತಿರುವ ಜಸ್ಪ್ರೀತ್ ಬುಮ್ರಾ* ನಾಯಕನ ಜವಾಬ್ದಾರಿಯ ಜತೆಗೆ ಬೌಲಿಂಗ್‌ನಲ್ಲೂ ಬುಮ್ರಾ ಶೈನಿಂಗ್* ಇಂಗ್ಲೆಂಡ್ ಪ್ರವಾಸದಲ್ಲಿ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದ ಬುಮ್ರಾ
ಬರ್ಮಿಂಗ್‌ಹ್ಯಾಮ್(ಜು.04): ಟೀಂ ಇಂಡಿಯಾ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ, ಸದ್ಯ ಬರ್ಮಿಂಗ್‌ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದೀಗ ಇಂಗ್ಲೆಂಡ್ ಎದುರಿನ ಮೊದಲ ಇನಿಂಗ್ಸ್‌ನಲ್ಲಿ ಬುಮ್ರಾ 68 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದು, ಇನ್ನೂ ಆ ದಾಖಲೆಯನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಹೌದು, ಕೋವಿಡ್‌ನಿಂದ ಮುಂದೂಡಲ್ಪಟ್ಟಿದ್ದ ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳ ನಡುವಿನ 5ನೇ ಟೆಸ್ಟ್ ಪಂದ್ಯಕ್ಕೆ ಎಜ್‌ಬಾಸ್ಟನ್ ಮೈದಾನ ಸಾಕ್ಷಿಯಾಗಿದೆ. ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 4 ಪಂದ್ಯಗಳಿಂದ ಜಸ್ಪ್ರೀತ್ ಬುಮ್ರಾ (Jasprit Bumrah) 18 ವಿಕೆಟ್ ಕಬಳಿಸಿದ್ದರು. ಆದರೆ ಇದೀಗ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮತ್ತೆ 3 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ಸರಣಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎನ್ನುವ ಹಿರಿಮೆಗೆ ಭಾಜನರಾಗಿದ್ದಾರೆ.
ಈ ಮೊದಲು 2014ರಲ್ಲಿ ಟೀಂ ಇಂಡಿಯಾ (Team India) ವೇಗಿ ಭುವನೇಶ್ವರ್ ಕುಮಾರ್ (Bhuvneshwar Kumar), ಇಂಗ್ಲೆಂಡ್ ಎದುರಿನ 5 ಪಂದ್ಯ ಟೆಸ್ಟ್ ಸರಣಿಯಲ್ಲಿ 19 ವಿಕೆಟ್ ಕಬಳಿಸಿದ್ದರು. ಇದೀಗ ಜಸ್ಪ್ರೀತ್ ಬುಮ್ರಾ ಖಾತೆಯಲ್ಲಿ 21 ವಿಕೆಟ್‌ಗಳು ಸೇರ್ಪಡೆಯಾಗಿದ್ದು, ಇನ್ನೂ ಒಂದು ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವ ಅವಕಾಶವಿದೆ. ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಆರಂಭಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ತಂಡದಿಂದ ಹೊರಗುಳಿದಿದ್ದರು. ಹೀಗಾಗಿ ಜಸ್ಪ್ರೀತ್ ಬುಮ್ರಾಗೆ ಟೀಂ ಇಂಡಿಯಾ ನಾಯಕ ಪಟ್ಟ ಕಟ್ಟಲಾಗಿದೆ.
ನಾಯಕನಾದ ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿರುವ ಬುಮ್ರಾ:
ಭಾರತ ಕ್ರಿಕೆಟ್ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಓವರ್‌ವೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎಸೆದ ಓವರಲ್ಲಿ 29 ಸಿಡಿಸಿದ ಬೂಮ್ರಾ, ಬ್ರಿಯಾನ್ ಲಾರಾ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು. 2003-04ರಲ್ಲಿ ದ.ಆಫ್ರಿಕಾದ ಸ್ಪಿನ್ನರ್ ರಾಬಿನ್ ಪೀಟರ್‌ಸನ್‌ರ ಓವರಲ್ಲಿ ಲಾರಾ 28 ರನ್ ಗಳಿಸಿದ್ದರು. 2013ರಲ್ಲಿ ಜೇಮ್ಸ್ ಆ್ಯಂಡರ್‌ಸನ್ ಓವರ್‌ನಲ್ಲಿ ಆಸ್ಪ್ರೇಲಿಯಾದ ಜಾರ್ಜ್ ಬೈಲಿ ಸಹ 28 ರನ್ ಸಿಡಿಸಿದ್ದರು. ಆದರೆ ಲಾರಾ ಹೆಚ್ಚು ಬೌಂಡರಿ ಬಾರಿಸಿದ್ದ ಕಾರಣ ವಿಶ್ವದಾಖಲೆ ಅವರ ಹೆಸರಿನಲ್ಲಿತ್ತು.
ಜಸ್ಪ್ರೀತ್ ಬುಮ್ರಾ ಯಾರೆಂದ Barmy Army, ಮುಟ್ಟಿ ನೋಡಿಕೊಳ್ಳುವಂತ ಉತ್ತರ ನೀಡಿದ Bharat Army.!
ಬರ್ಮಿಂಗ್‌ಹ್ಯಾಮ್ ಟೆಸ್ಟ್ (Birmingham Test) ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಕ್ರಿಕೆಟ್ ತಂಡವು ಒಂದು ಹಂತದಲ್ಲಿ 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ 6ನೇ ವಿಕೆಟ್‌ಗೆ ಜತೆಯಾಟದ ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಜೋಡಿ ದಾಖಲೆಯ 222 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಿಷಭ್ ಪಂತ್ (Rishabh Pant) 146 ರನ್ ಬಾರಿಸಿದರೇ, ರವೀಂದ್ರ ಜಡೇಜಾ 104 ರನ್ ಬಾರಿಸಿ ಮಿಂಚಿದರು. ಇನ್ನು ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ತಂಡದ ಮೊತ್ತವನ್ನು ನಾನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 416 ರನ್ ಬಾರಿಸಿ ಸರ್ವಪತನ ಕಂಡಿತು.
ಇನ್ನು ಇದಾದ ಬಳಿಕ ಜಾನಿ ಬೇರ್‌ಸ್ಟೋವ್ ಶತಕದ ಹೊರತಾಗಿಯೂ ಇಂಗ್ಲೆಂಡ್ ತಂಡವನ್ನು 284 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 132 ರನ್‌ಗಳ ಮುನ್ನಡೆ ಸಾಧಿಸಿದ ಭಾರತ ಕ್ರಿಕೆಟ್ ತಂಡವು ಮೂರನೇ ದಿನದಾಟದಂತ್ಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 125 ರನ್ ಬಾರಿಸಿದ್ದು, ಒಟ್ಟಾರೆ 257 ರನ್‌ಗಳ ಮುನ್ನಡೆ ಸಾಧಿಸಿದೆ.
