ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯದಿಂದ ಹೀನಾಯ ಸೋಲು ಕಂಡಿದೆ. ಡೆಕ್ವರ್ತ್ ಲೂಯಿಸ್ ನಿಯಮದನ್ವಯ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್‌ಗಳ ಜಯ ಸಾಧಿಸಿ, 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಪರ್ತ್: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ದಯನೀಯ ವೈಫಲ್ಯ ಅನುಭವಿಸಿದ ಟೀಂ ಇಂಡಿಯಾ, ಆಸ್ಟ್ರೇಲಿಯಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಡೆಕ್ವರ್ತ್ ಲೂಯಿಸ್ ನಿಯಮದನ್ವಯ 7 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಈ ಗೆಲುವಿನೊಂದಿಗೆ ಮಿಚೆಲ್ ಮಾರ್ಷ್ ನೇತೃತ್ವದ ಆಸ್ಟ್ರೇಲಿಯಾ ತಂಡವು 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಆಸೀಸ್‌ಗೆ ಸಾಧಾರಣ ಗುರಿ ನೀಡಿದ ಭಾರತ
ಇಲ್ಲಿನ ಪರ್ತ್ ಸ್ಟೇಡಿಯಂನಲ್ಲಿ ಡೆಕ್ವರ್ತ್ ಲೂಯಿಸ್ ನಿಯಮದನ್ವಯ ಗೆಲ್ಲಲು 26 ಓವರ್‌ಗಳಲ್ಲಿ ಕೇವಲ 131 ರನ್ ಗುರಿ ಪಡೆದ ಆಸ್ಟ್ರೇಲಿಯಾ ತಂಡವು ಆರಂಭದಲ್ಲೇ ಟ್ರ್ಯಾವಿಸ್ ಹೆಡ್(8) ವಿಕೆಟ್ ಕಳೆದುಕೊಂಡಿತು. ಇನ್ನು ಮ್ಯಾಥ್ಯೂ ಶಾರ್ಟ್ ಕೂಡಾ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ವಿಕೆಟ್‌ಗೆ ನಾಯಕ ಮಿಚೆಲ್ ಮಾರ್ಷ್ ಹಾಗೂ ಜೋಶ್ ಫಿಲಿಫ್ಪೆ ಆಕರ್ಷಕ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 3ನೇ ವಿಕೆಟ್‌ಗೆ ಈ ಜೋಡಿ ಕೇವಲ 45 ಎಸೆತಗಳನ್ನು ಎದುರಿಸಿ 55 ರನ್‌ಗಳ ಜತೆಯಾಟವಾಡಿತು.
ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಫಿಲಿಫ್ಪೆ 29 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 37 ರನ್ ಗಳಿಸಿ ವಾಷಿಂಗ್ಟನ್ ಸುಂದರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕನ ಆಟವಾಡಿದ ಮಿಚೆಲ್ ಮಾರ್ಷ್ ಅಜೇಯ 46 ರನ್ ಸಿಡಿಸಿದರೆ, ಚೊಚ್ಚಲ ಏಕದಿನ ಪಂದ್ಯವನ್ನಾಡಿದ ಮ್ಯಾಟ್ ರೆನ್‌ಶೋ ಅಜೇಯ 21 ರನ್ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಭಾರತ
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಭಾರತ ಪವರ್ ಪ್ಲೇನಲ್ಲಿ 27 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೊಳಗಾಯಿತು. ರೋಹಿತ್ 8 ರನ್ ಗಳಿಸಿದರೆ, ಕೊಹ್ಲಿ ಶೂನ್ಯ ಸುತ್ತಿದರು. ನಾಯಕ ಗಿಲ್ ಬ್ಯಾಟಿಂಗ್ 10 ರನ್‌ಗೆ ಕೊನೆಗೊಂಡಿತು.
ಇನ್ನು ಉಪನಾಯಕ ಶ್ರೇಯಸ್ ಅಯ್ಯರ್ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕನ್ನಡಿಗ ಕೆ ಎಲ್ ರಾಹುಲ್ 38 ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ ಸಮಯೋಚಿತ 31 ರನ್ ಬಾರಿಸುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಕೊನೆಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಅಜೇಯ 19 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು. ಮಳೆಯಿಂದಾಗಿ ಪಂದ್ಯವನ್ನು 26 ಓವರ್‌ಗಳಿಗೆ ನಿಗದಿಪಡಿಸಲಾಗಿತ್ತು.
