2026ರ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ, ಸಚಿನ್ ದಾಖಲೆ ಮುರಿದು ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದು, ಆದರೆ ಅನುಭವಿ ಆಟಗಾರರಿಗೆ ಮಣೆ ಹಾಕುವ ಸಾಧ್ಯತೆಯಿಂದಾಗಿ ಅವರ ಕಾಯುವಿಕೆ ಮುಂದುವರೆಯಬಹುದು.
ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸಿದ ಬಳಿಕ ಟೀಂ ಇಂಡಿಯಾ, ಇದೀಗ ಮೊದಲ ಸಲ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಜೂನ್ 26ರಂದು ಬೆಲ್‌ಪಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ರಿಕೆಟ್ ಕ್ಲಬ್‌ನಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು, ಐರ್ಲೆಂಡ್ ಎದುರು ಮೊದಲ ಟಿ20 ಪಂದ್ಯವನ್ನಾಡಲಿದೆ. ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಶ್ರೇಯಸ್ ಅಯ್ಯರ್ ಇದೀಗ ಭಾರತ ಟಿ20 ತಂಡದ ಪೂರ್ಣ ಪ್ರಮಾಣದ ನಾಯಕರಾಗಿ ನೇಮಕವಾಗಿದ್ದು, ಅಯ್ಯರ್ ನೇತೃತ್ವದಲ್ಲಿ ಭಾರತ ತಂಡವು ಮೊದಲ ಟಿ20 ಮ್ಯಾಚ್‌ಗೆ ಸಜ್ಜಾಗಿದೆ.
ಎಲ್ಲರ ಕಣ್ಣು ವೈಭವ್ ಸೂರ್ಯವಂಶಿ ಮೇಲೆ
ಇನ್ನು ಐರ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯಕ್ಕೂ ಮುನ್ನ ಇದೀಗ ಎಲ್ಲರ ಚಿತ್ತ 15 ವರ್ಷದ ವೈಭವ್ ಸೂರ್ಯವಂಶಿ ಮೇಲಿದೆ. ಈಗಾಗಲೇ ಭಾರತ ಸೀನಿಯರ್ಸ್ ತಂಡಕ್ಕೆ ಆಯ್ಕೆಯಾಗಿರುವ ವೈಭವ್ ಸೂರ್ಯವಂಶಿ, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು, ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಅತಿಕಿರಿಯ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಆದರೆ ಈ ಸಾಧನೆ ಮಾಡಲು ವೈಭವ್ ಸೂರ್ಯವಂಶಿ ಮತ್ತಷ್ಟು ಸಮಯ ಕಾಯಬೇಕಾಗಿ ಬರಬಹುದು. ಯಾಕೆಂದರೆ ಐರ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ತನ್ನ ಮೊದಲ ಆಯ್ಕೆಯ ತಂಡದೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. 2026ರ ಐಸಿಸಿ ಟಿ20 ವಿಶ್ವಕಪ್ ವಿಜೇತ ತಂಡದ ಆರಂಭಿಕರಾಗಿದ್ದ ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಇನ್ನು ಇಶಾನ್ ಕಿಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿಳಿಯಲಿದ್ದಾರೆ. ಹೀಗಾಗಿ ವೈಭವ್ ಸೂರ್ಯವಂಶಿ ಮೊದಲ ಪಂದ್ಯದಲ್ಲಿ ಐರ್ಲೆಂಡ್ ಎದುರು ಕಣಕ್ಕಿಳಿಯುವುದು ಅನುಮಾನ ಎನಿಸಿದೆ.
ಇನ್ನುಳಿದಂತೆ ನಾಯಕ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದರೆ, ಉಪನಾಯಕ ತಿಲಕ್ ವರ್ಮಾ ಐದನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಆಲ್ರೌಂಡರ್‌ಗಳಾದ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ ಹಾಗೂ ಹರ್ಷಿತ್ ರಾಣಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಹೀಗಾದಲ್ಲಿ ವೈಭವ್ ಸೂರ್ಯವಂಶಿ ಹಾಗೂ ಪ್ರಿನ್ಸ್ ಯಾದವ್ ಭಾರತ ಟಿ20 ತಂಡಕ್ಕೆ ಪಾದಾರ್ಪಣೆ ಮಾಡಲು ಇನ್ನಷ್ಟು ಸಮಯ ಕಾಯಬೇಕಾಗಬಹುದು.
ಏಷ್ಯಾನೆಟ್ ಸುವರ್ಣ ನ್ಯೂಸ್ ಆಯ್ಕೆ ಮಾಡಿದ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ:
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಸಿದ್ದ್ ಕೃಷ್ಣ.


