2025ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಲಿವೆ. ಈ ಬಾರಿ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿರುವ ಸಾಧ್ಯತೆ ಇದೆ. ಭಾರತ ಆತಿಥ್ಯ ವಹಿಸಿದ್ದರೂ, ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಬಹುದು. ಸೆಪ್ಟೆಂಬರ್‌ನಲ್ಲಿ ಟೂರ್ನಿ ನಡೆಯಲಿದ್ದು, ತಲಾ 4 ತಂಡಗಳ 2 ಗುಂಪುಗಳಿರಲಿವೆ.

ದುಬೈ: 2025ರ ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳಲಿದ್ದು, ಈ ಸಲ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು ಸಹಜವಾಗಿಯೇ ಒಂದೇ ಗುಂಪಿನಲ್ಲಿ ಸ್ಥಾನ ಪಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಕಳೆದ ಆವೃತ್ತಿಯ ಏಷ್ಯಾಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ಆಯೋಜನೆಗೊಂಡಿತ್ತು.

ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಒಮಾನ್‌, ಯುಎಇ ಹಾಗೂ ಹಾಂಗ್‌ಕಾಂಗ್ ತಂಡಗಳು ಆಡಲಿವೆ. ತಲಾ 4 ತಂಡಗಳ 2 ಗುಂಪು ರಚನೆಗೊಳ್ಳಲಿದ್ದು, ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಸೂಪರ್‌-4 ಹಂತಕ್ಕೆ ಪ್ರವೇಶಿಸಲಿವೆ. ನಿರೀಕ್ಷೆಯಂತೆ ಭಾರತ ಹಾಗೂ ಪಾಕಿಸ್ತಾನ ಎರಡೂ ತಂಡಗಳು ಸೂಪರ್‌-4 ಪ್ರವೇಶಿಸಿದರೆ, ಅಲ್ಲೂ ಪರಸ್ಪರ ಎದುರಾಗಬಹುದು. ಉಭಯ ತಂಡಗಳ ನಡುವೆ ಫೈನಲ್‌ ಪಂದ್ಯವೂ ಏರ್ಪಟ್ಟರೆ ಅಚ್ಚರಿಯಿಲ್ಲ.

ಇದನ್ನೂ ಓದಿ: ಮುಗ್ಗರಿಸಿ ಬಿದ್ರೂ ಸೊಕ್ಕು ಅಡಗಿಲ್ಲ; ಚಾಂಪಿಯನ್ಸ್ ಟ್ರೋಫಿ ಸೋತ್ರೂ ಭಾರತದ ಮೇಲೆ ಗೂಬೆ ಕೂರಿಸಿದ ಪಾಕ್!

ಟೂರ್ನಿಯ ಆತಿಥ್ಯ ಭಾರತದ ಬಳಿ ಇದೆಯಾದರೂ, ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಹೀಗಾಗಿ ಟೂರ್ನಿ ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಬಹುದು. ಸದ್ಯ ಐಸಿಸಿ ಚಾಂಪಿಯನಸ್‌ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದ್ದರೂ, ಭಾರತ ಪಾಕಿಸ್ತಾನಕ್ಕೆ ಪ್ರವಾಸ ಮಾಡಿಲ್ಲ. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿದ್ದು, ಭಾರತ ತನ್ನ ಪಾಲಿನ ಪಂದ್ಯಗಳನ್ನು ದುಬೈನಲ್ಲಿ ಆಡುತ್ತಿದೆ. ಇನ್ನು ಮುಂದಿನ ವರ್ಷ ಅಂದರೆ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯ ವಹಿಸಲಿವೆ. ಆಗ ಪಾಕಿಸ್ತಾನ ತನ್ನ ಪಾಲಿನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುವ ಸಾಧ್ಯತೆ ದಟ್ಟವಾಗಿದೆ.

'ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ಆಯೋಜನೆಗೊಳ್ಳಲಿದೆ. ಭಾರತವು ಏಷ್ಯಾಕಪ್ ಟೂರ್ನಿಯ ಆತಿಥ್ಯದ ಹಕ್ಕು ಪಡೆದುಕೊಂಡಿದೆ. ಆದರೆ ಈ ಟೂರ್ನಿಯು ಶ್ರೀಲಂಕಾ ಇಲ್ಲವೇ ಯುಎಇನಲ್ಲಿ ನಡೆಯುವ ಸಾಧ್ಯತೆಯಿದೆ' ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ: ಆಫ್ಘಾನ್ ಗೆಲ್ಲುತ್ತಿದ್ದಂತೆ ತಲೆಕೆಳಗಾದ ಸೆಮೀಸ್ ಲೆಕ್ಕಾಚಾರ! ಗ್ರೂಪ್ ಹಂತದಲ್ಲೇ ಹೊರಬೀಳುತ್ತಾ ಆಸೀಸ್?

ಸದ್ಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಆತಿಥ್ಯ ವಹಿಸಿರುವ ಪಾಕಿಸ್ತಾನ ತಂಡವು ಸತತ ಎರಡು ಪಂದ್ಯಗಳನ್ನು ಸೋಲುವ ಮೂಲಕ ಗ್ರೂಪ್ ಹಂತದಲ್ಲೇ ಹೊರಬಿದ್ದಿದ್ದೆ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಮೊಹಮ್ಮದ್ ರಿಜ್ವಾನ್ ಪಡೆ ಟೂರ್ನಿಯಲ್ಲಿ ಒಂದೂ ಗೆಲುವು ಕಾಣದೇ ತನ್ನ ಅಭಿಯಾನವನ್ನು ಮುಗಿಸಿದೆ. ಇನ್ನೊಂದೆಡೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸೆಮೀಸ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.