ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಗೊಂಡಿದೆ. ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ರಿಷಭ್ ಪಂತ್ ಉಪನಾಯಕನಾಗಿ ತಂಡಕ್ಕೆ ಮರಳಿದ್ದಾರೆ. ಆದರೆ, ಉತ್ತಮ ಪ್ರದರ್ಶನ ನೀಡಿದರೂ ಶಮಿ ಮತ್ತು ಕರುಣ್ ನಾಯರ್ ಅವರನ್ನು ಕಡೆಗಣಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮುಂಬೈ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡ ಕೂಡಿಕೊಂಡಿದ್ದಾರೆ. ಶುಭ್‌ಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಪಂತ್ ಉಪನಾಯಕನಾಗಿ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಇಬ್ಬರು ಅನುಭವಿ ಕ್ರಿಕೆಟ್ ವೃತ್ತಿಬದುಕು ಕೊನೆಯಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ರಿಷಭ್ ಪಂತ್, ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ಕನೇ ಟೆಸ್ಟ್ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಇಂಗ್ಲೆಂಡ್ ಎದುರಿನ ಐದನೇ ಟೆಸ್ಟ್ ಹಾಗೂ ತವರಿನಲ್ಲಿ ವೆಸ್ಟ್ ಇಂಡೀಸ್ ಎದುರಿನ ಎರಡು ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು, ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದೆ. ಇನ್ನು ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಪ್ರಸಿದ್ದ್ ಕೃಷ್ಣ ಹಾಗೂ ಎನ್ ಜಗದೀಶನ್ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ರಿಷಭ್ ಪಂತ್ ಹಾಗೂ ಆಕಾಶ್‌ದೀಪ್ ತಂಡ ಕೂಡಿಕೊಂಡಿದ್ದಾರೆ.
ಮುಗಿಯಿತಾ ಈ ಇಬ್ಬರು ಕ್ರಿಕೆಟಿಗರ ವೃತ್ತಿಬದುಕು?
ಇನ್ನು ಇತ್ತೀಚೆಗೆ ರಣಜಿ ಟ್ರೋಫಿ ಟೂರ್ನಿಯಲ್ಲಿ ಅನುಭವಿ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ನಡೆಸುವ ಮೂಲಕ ತಾವು ಸಂಪೂರ್ಣ ಫಿಟ್ ಆಗಿದ್ದು, ಆಯ್ಕೆಗೂ ಲಭ್ಯವಿದ್ದೇವೆ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಿದ್ದೂ ಶಮಿ ಕಡೆಗಣಿಸಲಾಗಿದೆ. ಇನ್ನು ಕರ್ನಾಟಕ ಪರ ರಣಜಿ ಟ್ರೋಫಿ ಟೂರ್ನಿಯಲ್ಲಿ ಶತಕ ಹಾಗೂ ದ್ವಿಶತಕ ಸಿಡಿಸಿ ಮಿಂಚಿರುವ ಕರುಣ್ ನಾಯರ್ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಕಡೆಗಣಿಸಿದೆ. ಇದನ್ನೆಲ್ಲಾ ಗಮನಿಸಿದರೇ, ಈ ಇಬ್ಬರು ಕ್ರಿಕೆಟಿಗರ ವೃತ್ತಿ ಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯವು ನವೆಂಬರ್ 14ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.
ದಕ್ಷಿಣ ಆಫ್ರಿಕಾ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ:
ಶುಭ್‌ಮನ್ ಗಿಲ್(ನಾಯಕ), ರಿಷಭ್ ಪಂತ್(ಉಪನಾಯಕ&ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್‌ದೀಪ್.
