ಚೆನ್ನೈ(ಏ.14): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ 6ನೇ ಪಂದ್ಯದಲ್ಲಿಂದು(ಏ.14) ಮಾಜಿ ಚಾಂಪಿಯನ್‌ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ 3 ಬಾರಿಯ ರನ್ನರ್ ಅಪ್ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್‌ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಈಗಾಗಲೇ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮಣಿಸಿ ಶುಭಾರಂಭ ಮಾಡಿದ್ದರೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡವು ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ದ ರೋಚಕ ಸೋಲು ಕಂಡಿದೆ. ಹೀಗಾಗಿ ಸನ್‌ರೈಸರ್ಸ್‌ ಹೈದರಾಬಾದ್‌ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

IPL 2021 ಸನ್‌ರೈಸರ್ಸ್‌ ಮೇಲೆ ಸವಾರಿ ಮಾಡುತ್ತಾ ಆರ್‌ಸಿಬಿ..?

ಐಪಿಎಲ್‌ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 17 ಬಾರಿ ಮುಖಾಮುಖಿಯಾಗಿದ್ದು, ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 2016ರಲ್ಲಿ ಆರ್‌ಸಿಬಿಯನ್ನು ಮಣಿಸಿ ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿರುವ ಸನ್‌ರೈಸರ್ಸ್‌ 17 ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದರೆ, ಇತ್ತ ಆರ್‌ಸಿಬಿ 7 ಪಂದ್ಯಗಳಲ್ಲಿ ಗೆಲುವಿನ ರುಚಿ ಸವಿದಿದೆ.

ಇನ್ನು ಕಳೆದ 5 ಮುಖಾಮುಖಿಯಲ್ಲಿ ಹೈದರಾಬಾದ್‌ 3 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ 2 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ. ಇನ್ನು 13ನೇ ಆವೃತ್ತಿಯ ಎಲಿಮಿನೇಟರ್‌ ಪಂದ್ಯದಲ್ಲಿ ಉಭಯ ತಂಡಗಳು ಕಡೆಯ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ 6 ವಿಕೆಟ್‌ಗಳ ಜಯ ದಾಖಲಿಸಿ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆಗಿಟ್ಟಿಸಿಕೊಂಡಿತ್ತು.