* ಚೆನ್ನೈ ಸೂಪರ್ ಕಿಂಗ್ಸ್ 154 ರನ್ ಬಾರಿಸಿದ್ದು, ಆರೆಂಜ್ ಆರ್ಮಿಗೆ ಸವಾಲಿನ ಗುರಿ ನೀಡಿದೆ* ಚೊಚ್ಚಲ ಗೆಲುವಿನ ಕನವರಿಕೆಯಲ್ಲಿವೆ ಉಭಯ ತಂಡಗಳು* ತಲಾ 2 ವಿಕೆಟ್ ಕಬಳಿಸಿ ಮಿಂಚಿದ ನಟರಾಜನ್, ವಾಷಿಂಗ್ಟನ್ ಸುಂದರ್
ಮುಂಬೈ(ಏ.09): ಮೋಯಿನ್ ಅಲಿ (Moeen Ali), ಅಂಬಟಿ ರಾಯುಡು (Ambati Rayudu) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವು 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿದ್ದು, ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದೆ. ವಾಷಿಂಗ್ಟನ್ ಸುಂದರ್ ಹಾಗೂ ಟಿ ನಟರಾಜನ್ ಶಿಸ್ತುಬದ್ದ ದಾಳಿ ನಡೆಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ದೊಡ್ಡ ಮೊತ್ತ ಕಲೆಹಾಕದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ.
ಇಲ್ಲಿ ಡಿವೈ ಪಾಟೀಲ್ ಮೈದಾನದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಕನ್ನಡಿಗ ರಾಬಿನ್ ಉತ್ತಪ್ಪ (Robin Uthappa) 15 ರನ್ ಬಾರಿಸಿ ವಿಕೆಟ್ ಒಪ್ಪಸಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ 16 ರನ್ ಬಾರಿಸಿ ಟಿ ನಟರಾಜನ್ ಬೌಲಿಂಗ್‌ನಲ್ಲಿ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5.1 ಓವರ್ ಅಂತ್ಯದ ವೇಳೆಗೆ 36 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಮೋಯಿನ್ ಅಲಿ ಆಸರೆ: ಇಂಗ್ಲೆಂಡ್ ಮೂಲದ ಆಲ್ರೌಂಡರ್ ಮೋಯಿನ್ ಅಲಿ ಹಾಗೂ ಅಂಬಟಿ ರಾಯುಡು ಮೂರನೇ ವಿಕೆಟ್‌ಗೆ 64 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಅಂಬಟಿ ರಾಯುಡು 27 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 27 ರನ್ ಬಾರಿಸಿ ವಾಷಿಂಗ್ಟನ್ ಸುಂದರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಆಲ್ರೌಂಡರ್ ಮೋಯಿನ್ ಅಲಿ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿ ಕೇವಲ 2 ರನ್ ಅಂತರದಲ್ಲಿ ಅರ್ಧಶತಕ ವಂಚಿತರಾದರು.
ಮೋಯಿನ್ ಅಲಿ ಹಾಗೂ ಅಂಬಟಿ ರಾಯುಡು ವಿಕೆಟ್ ಪತನದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ರನ್ ವೇಗಕ್ಕೆ ಕಡಿವಾಣ ಬಿದ್ದಿತು. ಕಳೆದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ಶಿವಂ ದುಬೆ 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 3 ರನ್ ಬಾರಿಸಿ ಮಾರ್ಕೊ ಯಾನ್ಸೆನ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ರವೀಂದ್ರ ಜಡೇಜಾ 23 ರನ್ ಬಾರಿಸಿ ಕೊನೆಯ ಓವರ್‌ನಲ್ಲಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಡ್ವೇನ್ ಬ್ರಾವೋ(8) ಹಾಗೂ ಕ್ರಿಸ್ ಜೋರ್ಡನ್(6) ಉಪಯುಕ್ತ ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಶಿಸ್ತುಬದ್ದ ದಾಳಿ ನಡೆಸಿದ ವಾಷಿಂಗ್ಟನ್ ಸುಂದರ್ 4 ಓವರ್ ಬೌಲಿಂಗ್ ಮಾಡಿ 21 ರನ್ ನೀಡಿ 2 ವಿಕೆಟ್ ಪಡೆದರೆ, ಟಿ ನಟರಾಜನ್ 30 ರನ್ ನೀಡಿ 2 ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸೆನ್ ಹಾಗೂ ಏಯ್ಡನ್ ಮಾರ್ಕ್‌ರಮ್ ತಲಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಚೆನ್ನೈ ಸೂಪರ್ ಕಿಂಗ್ಸ್: 154/7
ಮೋಯಿನ್ ಅಲಿ: 48
ಅಂಬಟಿ ರಾಯುಡು: 27
ವಾಷಿಂಗ್ಟನ್ ಸುಂದರ್: 21/2
ಟಿ ನಟರಾಜನ್: 30/2
(* ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಮುಕ್ತಾಯದ ವೇಳೆಗೆ)
