ದೀಪಕ್ ಚಹಾರ್ 4 ತಿಂಗಳು ಕ್ರಿಕೆಟ್‌ನಿಂದ ಔಟ್..! ಟಿ20 ವಿಶ್ವಕಪ್‌ಗೂ ಅನುಮಾನ..!
* ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬಿಗ್ ಶಾಕ್
* ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದೀಪಕ್ ಚಹರ್
* ಈಗಾಗಲೇ ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿರುವ ವೇಗಿ
ಬೆಂಗಳೂರು(ಏ.14): ಬಹುನಿರೀಕ್ಷಿತ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಗೆಲುವು ಸಾಧಿಸಿ ನಿಟ್ಟುಸಿರು ಬಿಟ್ಟಿದೆ. ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಪಡೆಗೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ವೇಗಿ ದೀಪಕ್ ಚಹಾರ್ ಬಹುತೇಕ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದೀಪಕ್ ಚಹರ್‌ಗೆ ಇತ್ತೀಚೆಗಷ್ಟೇ ಬೆನ್ನು ನೋವು ಕಾಣಿಸಿಕೊಂಡಿದ್ದು, ನಾಲ್ಕು ತಿಂಗಳುಗಳ ಕ್ರಿಕೆಟ್‌ನಿಂದ ದೂರವೇ ಉಳಿಯಲಿದ್ದಾರೆ.
ಇನ್ನು ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ದೀಪಕ್ ಚಹರ್ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ. ಸದ್ಯ ದೀಪಕ್ ಚಹರ್, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ನೆಟ್ಸ್‌ನಲ್ಲಿ ಬೌಲಿಂಗ್ ಮಾಡುವ ವೇಳೆ ದೀಪಕ್ ಚಹರ್‌ಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ 14 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ ದೀಪಕ್ ಚಹರ್ ಸಿಎಸ್‌ಕೆ ತಂಡದಿಂದ ಹೊರಬಿದ್ದಿರುವುದು ಜಡೇಜಾ ಪಡೆಗೆ ದೊಡ್ಡ ಹಿನ್ನೆಡೆಯಾಗಿ ಪರಿಣಮಿಸಿದೆ.
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ದೀಪಕ್ ಚಹರ್ ತಮ್ಮ ಕರಾರುವಕ್ಕಾದ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ತಬ್ಬಿಬ್ಬುಗೊಳಿಸಿದ್ದರು. ದೀಪಕ್ ಚಹರ್ ಅನುಪಸ್ಥಿತಿ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸತತ 4 ಪಂದ್ಯಗಳನ್ನು ಸೋತು ಕಂಗಾಲಾಗಿತ್ತು. ಇದಾದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಗೆಲುವು ಸಾಧಿಸುವ ಚೆನ್ನೈ ಗೆಲುವಿನ ಖಾತೆ ತೆರೆದಿದೆ.