* ವಾಂಖೆಡೆ ಮೈದಾನದಲ್ಲಿಂದು ಲಖನೌ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು* 5ನೇ ಗೆಲುವಿಗೆ ಹಾತೊರೆಯುತ್ತಿದೆ ಡೆಲ್ಲಿ ಕ್ಯಾಪಿಟಲ್ಸ್* ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ
ಮುಂಬೈ(ಮೇ.01): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯ 45ನೇ ಪಂದ್ಯದಲ್ಲಿಂದು ಬಲಿಷ್ಠ ಲಖನೌ ಸೂಪರ್ ಜೈಂಟ್ಸ್ (Lucknow Super Giants) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ (KL Rahul) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ವಾಂಖೆಡೆ ಮೈದಾನ ಆತಿಥ್ಯವನ್ನು ವಹಿಸಿದೆ.
ಸೂಪರ್ ಸಂಡೇಯ ಮೊದಲ ಪಂದ್ಯವು ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು, ಭಾರತದ ಭವಿಷ್ಯದ ನಾಯಕರೆಂದು ಬಿಂಬಿಸಲ್ಪಟ್ಟಿರುವ ಕೆ.ಎಲ್ ರಾಹುಲ್ ಹಾಗೂ ರಿಷಭ್ ಪಂತ್ (Rishabh Pant) ನಡುವಿನ ಹೋರಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಇನ್ನು ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆವೇಶ್ ಖಾನ್ ಬದಲಿಗೆ ಕೃಷ್ಣಪ್ಪ ಗೌತಮ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ
ಲಖನೌ ಸೂಪರ್ ಜೈಂಟ್ಸ್ ತಂಡದ ಆರಂಭಿಕರಾದ ನಾಯಕ ಕೆ.ಎಲ್ ರಾಹುಲ್ ಹಾಗೂ ಕ್ವಿಂಟನ್ ಡಿ ಕಾಕ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಆಯುಷ್ ಬದೋನಿ, ಮಾರ್ಕಸ್ ಸ್ಟೋನಿಸ್ ಅವರಂತಹ ಪ್ರತಿಭಾನ್ವಿತ ಆಟಗಾರರಿದ್ದು ಯಾವುದೇ ಸವಾಲನ್ನು ಮೆಟ್ಟಿನಿಲ್ಲುವ ಕ್ಷಮತೆ ಹೊಂದಿದ್ದಾರೆ.
IPL 2022: ಡೆಲ್ಲಿ ಕ್ಯಾಪಿಟಲ್ಸ್ vs ಲಖನೌ ಸೂಪರ್ ಜೈಂಟ್ಸ್ ಫೈಟ್
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗೆಲುವು ದಾಖಲಿಸಬೇಕಿದ್ದರೆ ಅಗ್ರಕ್ರಮಾಂಕದಲ್ಲಿ ಡೇವಿಡ್ ವಾರ್ನರ್ ಹಾಗೂ ಪೃಥ್ವಿ ಶಾ ಉತ್ತಮ ಆರಂಭ ಒದಗಿಸಿಕೊಡಬೇಕಿದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್, ರೋಮನ್ ಪೊವೆಲ್ ಸ್ಪೋಟಕ ಬ್ಯಾಟಿಂಗ್ ನಡೆಸಬೇಕಿದೆ. ಇನ್ನು ಬೌಲಿಂಗ್‌ನಲ್ಲಿ ಹೆಚ್ಚಾಗಿ ಕುಲ್ದೀಪ್ ಯಾದವ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ನೆಚ್ಚಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದುವರೆಗೂ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ನಾಲ್ಕೂ ಪಂದ್ಯದಲ್ಲೂ ಕುಲ್ದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕುಲ್ದೀಪ್ ಯಾದವ್ ಮಿಂಚಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು ಎನ್ನುವಂತಾಗಿದೆ. ಕುಲ್ದೀಪ್ ಯಾದವ್ ಇದುವರೆಗೂ 8 ಪಂದ್ಯಗಳಿಂದ 17 ವಿಕೆಟ್ ಕಬಳಿಸಿ ಮಿಂಚಿದ್ದು, ಇದೀಗ ಲಖನೌ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
ತಂಡಗಳು ಹೀಗಿವೆ ನೋಡಿ
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಶ್, ರಿಷಭ್ ಪಂತ್(ನಾಯಕ&ವಿಕೆಟ್ ಕೀಪರ್), ಲಲಿತ್ ಯಾದವ್, ರೋಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮುಷ್ತಾಫಿಜುರ್ ರೆಹಮಾನ್, ಚೇತನ್ ಸಕಾರಿಯಾ.
ಲಖನೌ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆ ಎಲ್. ರಾಹುಲ್ (ನಾಯಕ), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ಆಯುಷ್ ಬದೋನಿ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ಮೋಯ್ಸಿನ್ ಖಾನ್, ರವಿ ಬಿಷ್ಣೋಯಿ.
ಸ್ಥಳ: ಮುಂಬೈ, ವಾಂಖೇಡೆ ಕ್ರೀಡಾಂಗಣ
ಮಧ್ಯಾಹ್ನ 3.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
