* ಪಂಜಾಬ್ ಕಿಂಗ್ಸ್‌ ಎದುರು ರಾಜಸ್ಥಾನ ರಾಯಲ್ಸ್‌ಗೆ ರೋಚಕ ಜಯ* ಆಕರ್ಷಕ ಅರ್ಧಶತಕ ಸಿಡಿಸಿ ಸಂಭ್ರಮಿಸಿದ ಯಶಸ್ವಿ ಜೈಸ್ವಾಲ್* ಸ್ಪೋಟಕ ಬ್ಯಾಟಿಂಗ್ ನಡೆಸಿದ ಶಿಮ್ರೊನ್ ಹೆಟ್ಮೇಯರ್

ಮುಂಬೈ(ಮೇ.07): ಯಶಸ್ವಿ ಜೈಸ್ವಾಲ್ ಸ್ಪೋಟಕ ಅರ್ಧಶತಕ ಹಾಗೂ ಯುಜುವೇಂದ್ರ ಚಹಲ್ ಶಿಸ್ತುಬದ್ದ ಬೌಲಿಂಗ್ ದಾಳಿಯ ನೆರವಿನಿಂದ ಪಂಜಾಬ್ ಕಿಂಗ್ಸ್ ಎದುರು ರಾಜಸ್ಥಾನ ರಾಯಲ್ಸ್‌ ತಂಡವು 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್‌ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ನೀಡಿದ್ದ 190 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್‌ ತಂಡವು ಸ್ಪೋಟಕ ಆರಂಭವನ್ನೇ ಪಡೆಯಿತು. ಕಳೆದ ಕೆಲ ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ ಯಶಸ್ವಿ ಜೈಸ್ವಾಲ್ ಹಾಗೂ ಇನ್‌ ಫಾರ್ಮ್‌ ಬ್ಯಾಟರ್‌ ಜೋಸ್ ಬಟ್ಲರ್ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಸ್ಪೋಟಕ ಆರಂಭವನ್ನೇ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ ಕೇವಲ 3.6 ಓವರ್‌ಗಳಲ್ಲಿ 46 ರನ್‌ಗಳ ಆರಂಭಿಕ ಜತೆಯಾಟ ನೀಡಿತು. ಜೋಸ್ ಬಟ್ಲರ್‌ ಕೇವಲ 16 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 30 ರನ್ ಸಿಡಿಸಿ ಕಗಿಸೋ ರಬಾಡಗೆ ವಿಕೆಟ್‌ ಒಪ್ಪಿಸಿದರು. ಇದರ ಬೆನ್ನಲ್ಲೇ ಕ್ರೀಸ್‌ಗಿಳಿದ ನಾಯಕ ಸಂಜು ಸ್ಯಾಮ್ಸನ್ ಕೇವಲ 12 ಎಸೆತಗಳಲ್ಲಿ 23 ರನ್ ಚಚ್ಚುವ ಮೂಲಕ ನೆಟ್‌ ರನ್‌ರೇಟ್‌ ಕುಸಿದಂತೆ ನೋಡಿಕೊಂಡರು. 

ಯಶಸ್ವಿ ಸ್ಪೋಟಕ ಬ್ಯಾಟಿಂಗ್: ಸಾಕಷ್ಟು ಬಿಡುವಿನ ಬಳಿಕ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಯಶಸ್ವಿ ಜೈಸ್ವಾಲ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಳ್ಳುವಲ್ಲಿ ಯಶಸ್ವಿಯಾದರು. ಪಂಜಾಬ್ ಕಿಂಗ್ಸ್‌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಅಂತಿಮವಾಗಿ ಜೈಸ್ವಾಲ್ 41 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 68 ರನ್ ಬಾರಿಸಿ ಆರ್ಶದೀಪ್ ಸಿಂಗ್‌ಗೆ ಕ್ಯಾಚಿತ್ತರು.

ಜೈಸ್ವಾಲ್ ವಿಕೆಟ್ ಒಪ್ಪಿಸಿದಾಗ ರಾಜಸ್ಥಾನ ರಾಯಲ್ಸ್ ತಂಡವು ಗೆಲ್ಲಲು ಇನ್ನೂ 49 ರನ್‌ಗಳ ಅಗತ್ಯವಿತ್ತು. ಈ ವೇಳೆ ನಾಲ್ಕನೇ ವಿಕೆಟ್‌ಗೆ ದೇವದತ್ ಪಡಿಕ್ಕಲ್ ಹಾಗೂ ಶಿಮ್ರೊನ್ ಹೆಟ್ಮೇಯರ್ ಭರ್ಜರಿ ಜತೆಯಾಟದ ಮೂಲಕ ಆಸರೆಯಾದರು. ದೇವದತ್ ಪಡಿಕ್ಕಲ್ 32 ಎಸೆತಗಳಲ್ಲಿ 31 ರನ್ ಬಾರಿಸಿದರೆ, ಶಿಮ್ರೊನ್ ಹೆಟ್ಮೇಯರ್ 16 ಎಸೆತಗಳಲ್ಲಿ 31 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಶಿಖರ್ ಧವನ್ ಹಾಗೂ ಜಾನಿ ಬೇರ್‌ಸ್ಟೋವ್ 47 ರನ್‌ಗಳ ಜತೆಯಾಟ ನಿಭಾಯಿಸಿದರು. ಧವನ್ 12 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರೆ, ಭನುಕಾ ರಾಜಪಕ್ಸಾ ಚುರುಕಿನ 27 ರನ್ ಸಿಡಿಸಿದರು. ಇನ್ನು ನಾಯಕ ಮಯಾಂಕ್ ಅಗರ್‌ವಾಲ್ 15 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಪ್ರಸಕ್ತ ಅವೃತ್ತಿಯಲ್ಲಿ ರನ್ ಬರ ಅನುಭವಿಸುತ್ತಿದ್ದ ಜಾನಿ ಬೇರ್‌ಸ್ಟೋವ್ ಪಂಜಾಬ್ ಕಿಂಗ್ಸ್‌ ತಂಡದ ಪರ ಮೊದಲ ಅರ್ಧಶತಕ ಸಿಡಿಸಿ ಮಿಂಚಿದರು. ಕೇವಲ 40 ಎಸೆತಗಳನ್ನು ಎದುರಿಸಿದ ಜಾನಿ ಬೇರ್‌ಸ್ಟೋವ್ 8 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 56 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಲಿಯಾಮ್ ಲಿವಿಂಗ್‌ಸ್ಟೋನ್ 22 ರನ್ ಸಿಡಿಸಿದರೆ, ಕೊನೆಯಲ್ಲಿ ವಿಕೆಟ್ ಕೀಪರ್‌ ಬ್ಯಾಟರ್‌ ಜಿತೇಶ್ ಶರ್ಮಾ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 38 ರನ್ ಬಾರಿಸಿ ಅಜೇಯರಾಗುಳಿದರು.

ಇನ್ನು ರಾಜಸ್ಥಾನ ರಾಯಲ್ಸ್ ಪರ ಯುಜುವೇಂದ್ರ ಚಹಲ್ ಕೇವಲ 28 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ರವಿಚಂದ್ರನ್ ಅಶ್ವಿನ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು.