* ಲಖನೌ ಎದುರು ಭರ್ಜರಿ ಗೆಲುವು ಸಾಧಿಸಿದ ಆರ್‌ಸಿಬಿ* ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ತಂಡವನ್ನು ಬಗ್ಗುಬಡಿದ ಬೆಂಗಳೂರು* ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ರೋಚಕ ಪಂದ್ಯ
ಬೆಂಗಳೂರು(ಮೇ.26): 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯವು ಕ್ರಿಕೆಟ್ ಅಭಿಮಾನಿಗಳನ್ನು ಮತ್ತೊಮ್ಮೆ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು. ಕಳೆದೆರಡು ಐಪಿಎಲ್ ಆವೃತ್ತಿಗಳಲ್ಲಿ ಎಲಿಮಿನೇಟರ್ ಹಂತದಲ್ಲೇ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು, ಇದೀಗ ಲಖನೌ ಸೂಪರ್ ಜೈಂಟ್ಸ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಪಂದ್ಯಕ್ಕೆ ಮತ್ತಷ್ಟು ಹತ್ತಿರ ಸಾಗಿದ್ದು, ಎರಡನೇ ಕ್ವಾಲಿಫಯರ್‌ಗೆ ಲಗ್ಗೆಯಿಟ್ಟಿದೆ.
ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡದ ಪಾಲಿಗೆ ಐಪಿಎಲ್ ಫೈನಲ್ ಪ್ರವೇಶಿಸುವ ದೃಷ್ಟಿಯಿಂದ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿತ್ತು. ಆಲ್ರೌಂಡ್ ಪ್ರದರ್ಶನ ತೋರಿದ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು 14 ರನ್‌ಗಳ ರೋಚಕ ಗೆಲುವು ಸಾಧಿಸುವ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಟೂರ್ನಿಯಿಂದ ಹೊರಬಿದ್ದಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇನ್ನು ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡಾ ಹೆಚ್ಚುಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ಲಖನೌ ಬೌಲರ್‌ಗಳು ಅವಕಾಶ ನೀಡಲಿಲ್ಲ.
ಆರ್‌ಸಿಬಿ ಪಾಲಿಗೆ ಆಪತ್ಬಾಂದವನೆನಿಸಿದ ರಜತ್ ಪಾಟೀದಾರ್: ಒಂದು ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 13.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡ ಕೇವಲ 115 ರನ್ ಗಳಿಸಿತ್ತು. ಒಂದು ಕಡೆ ಸ್ಪೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟೀದಾರ್ ಆಕರ್ಷಕ ಶತಕ ಸಿಡಿಸುವ ಮೂಲಕ ಆರ್‌ಸಿಬಿ ತಂಡವು ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಪಾಟೀದಾರ್ ಕೇವಲ 54 ಎಸೆತಗಳಲ್ಲಿ ಅಜೇಯ 112 ರನ್ ಚಚ್ಚಿದರು. ಇನ್ನು 5ನೇ ವಿಕೆಟ್‌ಗೆ ದಿನೇಶ್ ಕಾರ್ತಿಕ್ ಹಾಗೂ ರಜತ್ ಪಾಟೀದಾರ್ ಮುರಿಯದ 92 ರನ್‌ಗಳ ಜತೆಯಾಟವಾಡುವ ಮೂಲಕ ಆರ್‌ಸಿಬಿ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ಅಂತಿಮವಾಗಿ ಆರ್‌ಸಿಬಿ 4 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತ್ತು.
ಇನ್ನು ಆರ್‌ಸಿಬಿ ನೀಡಿದ್ದ ಕಠಿಣ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ (Lucknow Super Giants) ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಡಿ ಕಾಕ್ 6 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮನನ್ ವೊಹ್ರಾ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದಾದ ಬಳಿಕ ದೀಪಕ್ ಹೂಡಾ ಹಾಗೂ ಕೆ ಎಲ್ ರಾಹುಲ್ ತಂಡಕ್ಕೆ ಆಸರೆಯಾಗುವ ಯತ್ನ ನಡೆಸಿದರು. ಮೊದಲ 10 ಓವರ್ ಅಂತ್ಯದ ವೇಳೆಗೆ ಲಖನೌ ಸೂಪರ್ ಜೈಂಟ್ಸ್ ತಂಡವು 96 ರನ್ ಕಲೆಹಾಕಿತ್ತು.
IPL 2022 ಲಖನೌ ಮಣಿಸಿ 2ನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಆರ್‌ಸಿಬಿ!
ದೀಪಕ್ ಹೂಡಾ ಕೇವಲ 26 ಎಸೆತಗಳಲ್ಲಿ 45 ರನ್ ಬಾರಿಸಿ ಹಸರಂಗಗೆ ವಿಕೆಟ್ ಒಪ್ಪಿಸಿದರೆ, ನಾಯಕ ಕೆ ಎಲ್ ರಾಹುಲ್ 79 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಜೋಡಿ ಬೇರ್ಪಡುತ್ತಿದ್ದಂತೆಯೇ ಪಂದ್ಯದ ವೇಳೆ ಹಿಡಿತ ಸಾಧಿಸಿದ ಆರ್‌ಸಿಬಿ ತಂಡವು ರೋಚಕ ಗೆಲುವು ಸಾಧಿಸುವ ಮೂಲಕ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆಗಿಟ್ಟಿಸಿಕೊಂಡಿದೆ. ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳು ವೈರಲ್ ಆಗಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
