* ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಿಂದು ಸನ್‌ರೈಸರ್ಸ್ ಹೈದರಾಬಾದ್ ಸವಾಲು* ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ ಸನ್‌ರೈಸರ್ಸ್ ಹೈದರಾಬಾದ್* ಆರೆಂಜ್ ಆರ್ಮಿಗೆ ಶಾಕ್ ನೀಡಲು ಸಜ್ಜಾದ ಕೆಕೆಆರ್
ಮುಂಬೈ(ಏ.15): ಸತತ 2 ಸೋಲಿನೊಂದಿಗೆ 15ನೇ ಆವೃತ್ತಿಯ ಐಪಿಎಲ್ (IPL 2022) ಅಭಿಯಾನ ಆರಂಭಿಸಿದ್ದರೂ ಬಳಿಕ 2 ಗೆಲುವು ಸಾಧಿಸಿ ಆತ್ಮವಿಶ್ವಾಸದ ಅಲೆಯಲ್ಲಿ ತೇಲುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದು, ಶುಕ್ರವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ. ಈ ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟಕ್ಕೆ ಇಲ್ಲಿನ ಬ್ರೆಬೋರ್ನ್ ಮೈದಾನ ಆತಿಥ್ಯವನ್ನು ವಹಿಸಿದೆ.
ಕೇನ್ ವಿಲಿಯಮ್ಸನ್ ನಾಯಕತ್ವದ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಿದ್ದ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತಿತ್ತು. ಆದರೆ ಬಳಿಕ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದ್ದು, ಮತ್ತೊಂದು ಗೆಲುವಿಗೆ ಎದುರು ನೋಡುತ್ತಿದೆ. ಗಾಯಾಳು ವಾಷಿಂಗ್ಟನ್ ಸುಂದರ್ ಈ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಅವರ ಬದಲು ಕರ್ನಾಟಕದ ಶ್ರೇಯಸ್ ಗೋಪಾಲ್ ಅಥವಾ ಜಗದೀಶ ಸುಚಿತ್ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.
ಅತ್ತ ಕೋಲ್ಕತಾ ನೈಟ್ ರೈಡರ್ಸ್ ಆಡಿರುವ 5 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕಳೆದ ಪಂದ್ಯದ ಸೋಲಿನ ಆಘಾತದಿಂದ ಹೊರಬರಲು ಕಾಯುತ್ತಿದೆ. ನಾಯಕ ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ನಿತೀಶ್ ರಾಣಾ ಬ್ಯಾಟಿಂಗ್ ಲಯ ಕಂಡುಕೊಳ್ಳಲು ಹೆಣಗಾಡುತ್ತಿದ್ದು, ತಂಡ ವಿದೇಶಿ ಆಟಗಾರರನ್ನೇ ಹೆಚ್ಚಾಗಿ ನೆಚ್ಚಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಸುಧಾರಿತ ಪ್ರದರ್ಶನ ನೀಡಿದರೆ ಮಾತ್ರ ಗೆಲುವು ದಕ್ಕಲಿದೆ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ ಒಟ್ಟು 21 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. 21 ಪಂದ್ಯಗಳ ಪೈಕಿ ಕೆಕೆಆರ್ 14 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು 07 ಪಂದ್ಯಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ.
ಸಂಭವನೀಯ ಆಟಗಾರರ ಪಟ್ಟಿ
ಹೈದ್ರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ಏಯ್ಡನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶ್ರೇಯಸ್ ಗೋಪಾಲ್/ ಜಗದೀಶ ಸುಚಿತ್, ಶಶಾಂಕ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್, ಟಿ ನಟರಾಜನ್.
ಕೆಕೆಆರ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ಆ್ಯಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಶೇಕ್, ವರುಣ್ ಚಕ್ರವರ್ತಿ
ಸ್ಥಳ: ಮುಂಬೈ, ಬ್ರೆಬೋರ್ನ್ ಕ್ರೀಡಾಂಗಣ,
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
