IPL 2022: ಆರ್‌ಸಿಬಿ Vs ಸಿಎಸ್‌ಕೆ ಪಂದ್ಯದ ವೇಳೆ ಹರಿದಾಡಿದ ಟಾಪ್ 10 ಮೀಮ್ಸ್‌ಗಳಿವು..!
* ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
* ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಚೆನ್ನೈ ಸೂಪರ್ ಕಿಂಗ್ಸ್
* ಆರ್‌ಸಿಬಿಗೆ ಮುಳುವಾದ ಮಾಜಿ ಆರ್‌ಸಿಬಿ ಆಟಗಾರರು
ಬೆಂಗಳೂರು(ಏ.13): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಸತತ 4 ಸೋಲುಗಳ ಬಳಿಕ ಕೊನೆಗೂ ಗೆಲುವಿನ ನಿಟ್ಟುಸಿರು ಬಿಟ್ಟಿದೆ. ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ವಿರುದ್ದ 23 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಸಿಎಸ್‌ಕೆ ತಂಡವು 36 ರನ್ ಗಳಿಸುವಷ್ಟರಲ್ಲಿ ಋತುರಾಜ್ ಗಾಯಕ್ವಾಡ್ (Ruturaj Gaikwad) ಹಾಗೂ ಮೋಯಿನ್ ಅಲಿ (Moeen Ali) ಪೆವಿಲಿಯನ್ ಸೇರಿದರು. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ 10 ಓವರ್ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋಯಿತು. ಮೊದಲ 10 ಓವರ್ ಅಂತ್ಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ವಿಕೆಟ್ ಕಳೆದುಕೊಂಡು ಕೇವಲ 60 ರನ್ ಗಳಿಸಲಷ್ಟೇ ಶಕ್ತವಾಯಿತು. ಆದರೆ ಇದಾದ ಬಳಿಕ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಸ್ಪೋಟಕ ಜತೆಯಾಟವಾಡುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿದರು. ಮೂರನೇ ವಿಕೆಟ್‌ಗೆ ಈ ಜೋಡಿ ದಾಖಲೆಯ 165 ರನ್‌ಗಳ ಜತೆಯಾಟ ನಿಭಾಯಿಸಿತು. ಕನ್ನಡಿಗ ರಾಬಿನ್ ಉತ್ತಪ್ಪ (Robin Uthappa) 50 ಎಸೆತಗಳಲ್ಲಿ 88 ರನ್ ಬಾರಿಸಿದರೆ, ಶಿವಂ ದುಬೆ (Shivam Dube) ಕೇವಲ 46 ಎಸೆತಗಳಲ್ಲಿ ಅಜೇಯ 95 ರನ್ ಬಾರಿಸಿದರು. ಪರಿಣಾಮ ಕೊನೆಯ 10 ಓವರ್‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬರೋಬ್ಬರಿ 156 ರನ್ ಕಲೆಹಾಕಿತು. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ರಾಬಿನ್ ಉತ್ತಪ್ಪ ಹಾಗೂ ಶಿವಂ ದುಬೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ದೊಡ್ಡ ವಿಲನ್ ಎನಿಸಿಕೊಂಡರು.
ಇನ್ನು ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಪವರ್ ಪ್ಲೇ ಮುಗಿಯುವುದರೊಳಗಾಗಿ ಆರಂಭಿಕ ಬ್ಯಾಟರ್‌ಗಳಾದ ಫಾಫ್ ಡು ಪ್ಲೆಸಿಸ್, ಅನೂಜ್ ರಾವತ್ ಹಾಗೂ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದರು. ಇನ್ನು ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಸ್ಪೋಟಕ ಬ್ಯಾಟಿಂಗ್ ನಡೆಸುವ ಮುನ್ಸೂಚನೆ ನೀಡಿದರಾದರೂ, ರವೀಂದ್ರ ಜಡೇಜಾ (Ravindra Jadeja) ಅವರನ್ನು ಹೆಚ್ಚುಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ಅವಕಾಶ ನೀಡಲಿಲ್ಲ.
IPL 2022 ವ್ಯರ್ಥವಾದ ಆರ್ ಸಿಬಿ ಹೋರಾಟ, ಮೊದಲ ಗೆಲುವು ಕಂಡ ಚೆನ್ನೈ
ಇನ್ನು ಮಧ್ಯಮ ಕ್ರಮಾಂಕದಲ್ಲಿ ಸುಯಾಶ್ ಪ್ರಭುದೇಸಾಯಿ, ಶಾಬಾಜ್ ಅಹಮ್ಮದ್ ಹಾಗೂ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಆರ್‌ಸಿಬಿ ಪಾಳಯದಲ್ಲಿ ಗೆಲುವಿನ ಭರವಸೆ ಮೂಡಿಸಿದರು. ಆದರೆ ಲಂಕಾ ಮೂಲದ ಮಿಸ್ಟ್ರಿ ಸ್ಪಿನ್ನರ್ ಮಹೀಶ್ ತೀಕ್ಷಣ ಮೊನಚಾದ ದಾಳಿ ನಡೆಸಿ, ಆರ್‌ಸಿಬಿಯ 4 ವಿಕೆಟ್ ಕಬಳಿಸುವ ಮೂಲಕ ಚೆನ್ನೈಗೆ ಚೊಚ್ಚಲ ಗೆಲುವು ತಂದುಕೊಡುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಸಾಕಷ್ಟು ಮೀಮ್ಸ್‌ಗಳು ಹರಿದಾಡುತ್ತಿವೆ. ಅಂತಹ ಟಾಪ್ 10 ಮೀಮ್ಸ್‌ಗಳು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ