* ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂದು ಪಂಜಾಬ್ ಕಿಂಗ್ಸ್ ಸವಾಲು* ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್* ಪಂಜಾಬ್ ಕಿಂಗ್ಸ್ ಎದುರು ಗೆಲುವಿನ ಹಳಿಗೆ ಮರಳುತ್ತಾ ಜಡೇಜಾ ಪಡೆ?
ಮುಂಬೈ(ಏ.03): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿಂದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವು ಮಯಾಂಕ್ ಅಗರ್‌ವಾಲ್ (Mayank Agarwal) ನೇತೃತ್ವದ ಪಂಜಾಬ್ ಕಿಂಗ್ಸ್ (Punjab Kings) ತಂಡವನ್ನು ಎದುರಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಬ್ರೆಬೋನ್ ಮೈದಾನ ಆತಿಥ್ಯವನ್ನು ವಹಿಸಲಿದೆ. ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇದೇ ಮೊದಲ ಬಾರಿಗೆ ಐಪಿಎಲ್‌ನ ಮೊದಲೆರಡು ಪಂದ್ಯಗಳನ್ನು ಸೋತಿದ್ದು, ಇದೀಗ ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿದೆ.
ಎಂ.ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕು ಬಾರಿ ಐಪಿಎಲ್ ಟ್ರೋಫಿ ಜಯಿಸುವ ಮೂಲಕ ಟೂರ್ನಿಯ ಯಶಸ್ವಿ ತಂಡಗಳಲ್ಲಿ ಒಂದು ಎನಿಸಿದೆ. ಆದರೆ 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಕೇವಲ ಎರಡು ದಿನಗಳು ಬಾಕಿ ಇದ್ದಾಗ ಧೋನಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. ಬಳಿಕ ರವೀಂದ್ರ ಜಡೇಜಾಗೆ ನಾಯಕ ಪಟ್ಟ ಕಟ್ಟಲಾಗಿತ್ತು. ಆದರೆ ಜಡೇಜಾ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲೆರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಶತಾಯಗತಾಯ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನೊಂದೆಡೆ ಮಯಾಂಕ್ ಅಗರ್‌ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಆದರೆ ಎರಡನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಎದುರು ಆಘಾತಕಾರಿ ಸೋಲು ಕಾಣುವ ಮೂಲಕ ಕೊಂಚ ಹಿನ್ನೆಡೆ ಅನುಭವಿಸಿದೆ. ಹೀಗಾಗಿ ಮತ್ತೆ ಗೆಲುವಿನ ಹಳಿಗೆ ಮರಳಲು ಪಂಜಾಬ್ ತಂಡವು ಎದುರು ನೋಡುತ್ತಿದೆ.
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ ಒಟ್ಟು 25 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 25 ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, 10 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ನಗೆ ಬೀರಿದೆ. ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಉಭಯ ತಂಡಗಳು ಲೀಗ್ ಹಂತದಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವಿನ ನಗೆ ಬೀರಿದ್ದವು.
IPL 2022 ಡೆಲ್ಲಿಗೆ ಲಾಕಿ ಡಿಚ್ಚಿ, ಗುಜರಾತ್ ಟೈಟಾನ್ಸ್ ಗೆ ಸೂಪರ್ ಗೆಲುವು!
ಇಲ್ಲಿನ ಬ್ರೆಬೋರ್ನ್ ಪಿಚ್ ಬ್ಯಾಟರ್‌ಗಳ ಪಾಲಿಗೆ ಸ್ವರ್ಗ ಎನಿಸಿದ್ದು, ಪ್ರಸಕ್ತ ಆವೃತ್ತಿಯ ಐಪಿಎಲ್ ಪಂದ್ಯಗಳಲ್ಲಿ ರನ್ ಮಳೆಯೇ ಹರಿದಿದೆ. ಈ ಪಿಚ್‌ನಲ್ಲಿ ಬ್ಯಾಟರ್‌ಗಳು 9.98ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.
ಇನ್ನು ಶಿಖರ್ ಧವನ್, ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಎಡಗೈ ಬ್ಯಾಟರ್ ಶಿಖರ್ ಧವನ್ ಒಂದು ಶತಕ ಹಾಗೂ 7 ಅರ್ಧಶತಕಗಳನ್ನು ಬಾರಿಸಿದ್ದು, ಇಂದೂ ಕೂಡಾ ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆಯಿದೆ.
ಇನ್ನೊಂದೆಡೆ ಕಳೆದ ಪಂದ್ಯದಲ್ಲಿ ಡ್ವೇನ್ ಬ್ರಾವೋ, ಐಪಿಎಲ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು. ಇದೀಗ ಬ್ರಾವೋ ಪಂಜಾಬ್ ಬ್ಯಾಟರ್‌ಗಳೆದುರು ಸವಾರಿ ಮಾಡಲು ಎದುರು ನೋಡುತ್ತಿದ್ದಾರೆ. ಯಾಕೆಂದರೆ ಪಂಜಾಬ್ ಎದುರು ಬ್ರಾವೋ 19 ಪಂದ್ಯಗಳನ್ನಾಡಿ 23 ವಿಕೆಟ್ ಕಬಳಿಸಿದ್ದಾರೆ.
ಸಂಭಾವ್ಯ ತಂಡ ಹೀಗಿದೆ ನೋಡಿ
ಚೆನ್ನೈ ಸೂಪರ್ ಕಿಂಗ್ಸ್
ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೋಯಿನ್ ಅಲಿ, ಅಂಬಟಿ ರಾಯುಡು, ಎಂ ಎಸ್ ಧೋನಿ(ವಿಕೆಟ್ ಕೀಪರ್), ರವೀಂದ್ರ ಜಡೇಜಾ(ನಾಯಕ), ಶಿವಂ ದುಬೆ, ಡ್ವೇನ್ ಬ್ರಾವೋ, ಡ್ವೇನ್ ಪ್ರಿಟೋರಿಯಸ್, ಕ್ರಿಸ್ ಜೋರ್ಡನ್, ರಾಜವರ್ಧನ್ ಹಂಗಾರ್ಗೆಕರ್.
ಪಂಜಾಬ್ ಕಿಂಗ್ಸ್
ಮಯಾಂಕ್ ಅಗರ್‌ವಾಲ್(ನಾಯಕ), ಶಿಖರ್ ಧವನ್, ಜಾನಿ ಬೇರ್‌ಸ್ಟೋವ್, ಭಾನುಕಾ ರಾಜಪಕ್ಸ(ವಿಕೆಟ್ ಕೀಪರ್), ಓಡೆನ್ ಸ್ಮಿತ್, ಶಾರುಖ್ ಖಾನ್, ಹಪ್ರೀತ್ ಬ್ರಾರ್, ರಿಶಿ ಧವನ್, ಕಗಿಸೋ ರಬಾಡ, ಆರ್ಶದೀಪ್ ಸಿಂಗ್, ರಾಹುಲ್ ಚಹರ್.
ಪಂದ್ಯ ಆರಂಭ: ಸಂಜೆ 7.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್
