* ಆರ್‌ಸಿಬಿ ತಂಡಕ್ಕಿಂದು ಕೋಲ್ಕತಾ ನೈಟ್‌ ರೈಡರ್ಸ್‌ ಸವಾಲು* ಗೆಲುವಿನ ಖಾತೆ ತೆರೆಯಲು ರೆಡಿಯಾದ ಫಾಫ್ ಡು ಪ್ಲೆಸಿಸ್‌ ಪಡೆ* ಹಾಲಿ ಚಾಂಪಿಯನ್‌ ಚೆನ್ನೈ ಎದುರು ಗೆದ್ದು ಬೀಗಿರುವ ಕೆಕೆಆರ್‌

ನವಿ ಮುಂಬೈ(ಮಾ.30): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (Indian Premier League) ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಇದೀಗ ಕೋಲ್ಕತಾ ನೈಟ್ ರೈಡರ್ಸ್‌(Kolkata Knight Riders) ಸವಾಲು ಸ್ವೀಕರಿಸಲು ಸಜ್ಜಾಗಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಡಿವೈ ಪಾಟೀಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವನ್ನು ಬಗ್ಗುಬಡಿಯುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಕೆಕೆಆರ್ ತಂಡವು ಇದೀಗ ಮತ್ತೊಂದು ಗೆಲುವಿನ ಕನವರಿಕೆಯಲ್ಲಿದೆ

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇನ್ನೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಯಾಂಕ್ ಅಗರ್‌ವಾಲ್ (Mayank Agarwal) ನೇತೃತ್ವದ ಪಂಜಾಬ್ ಕಿಂಗ್ಸ್ ಎದುರು 5 ವಿಕೆಟ್‌ಗಳ ಆಘಾತಕಾರಿ ಸೋಲು ಕಾಣುವ ಮೂಲಕ ಮುಖಭಂಗ ಅನುಭವಿಸಿದೆ. ಹೀಗಾಗಿ ಎರಡನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. 

ಐಪಿಎಲ್‌ ಇತಿಹಾಸದಲ್ಲಿ ಇದುವರೆಗೂ ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 29 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಕೆಕೆಆರ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 29 ಪಂದ್ಯಗಳ ಪೈಕಿ ಕೆಕೆಆರ್ ತಂಡವು 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್‌ ಬೆಂಗಳೂರು 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 

RCB vs KKR: ಕೋಲ್ಕತಾ ಸವಾಲಿಗೆ ರೆಡಿಯಾದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು..!

ಪಿಚ್ ರಿಪೋರ್ಟ್: ಡಿವೈ ಪಾಟೀಲ್ ಮೈದಾನದ ಪಿಚ್‌ ಈ ಹಿಂದಿನ ಪಂದ್ಯಗಳಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವನ್ನು ನೀಡಿತ್ತು. ಆರ್‌ಸಿಬಿ-ಪಂಜಾಬ್ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು 200+ ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದವು. ಎರಡನೇ ಇನಿಂಗ್ಸ್‌ ಸಂದರ್ಭದಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದಾಗಿ ಟಾಸ್ ಗೆದ್ದ ತಂಡವು ಮೊದಲು ಬೌಲಿಂಗ್ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚಿದೆ. 

ಇಂದಿನ ಪಂದ್ಯ ಗೆಲ್ಲೋರು ಯಾರು..?:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಮೊದಲ ಪಂದ್ಯವನ್ನು ಸೋತಿರುವುದರಿಂದ ಶತಾಯಗತಾಯ ಗೆಲುವಿನ ಹಳಿಗೆ ಮರಳಲು ಹಾತೊರೆಯುತ್ತಿದೆ. ಮೊದಲ ಪಂದ್ಯದಂತೆ ಎರಡನೇ ಪಂದ್ಯದಲ್ಲೂ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ನಡೆಸಿದರೆ, ಕೆಕೆಆರ್ ಎದುರು ಗೆಲುವು ಸಾಧಿಸುವುದು ಕಷ್ಟದ ಮಾತೇನು ಅಲ್ಲ. ಇದರ ಜತೆಗೆ ಕಳೆದ ನಾಲ್ಕು ವರ್ಷಗಳಿಂದ ಕೆಕೆಆರ್ ತಂಡದಲ್ಲಿದ್ದ ದಿನೇಶ್ ಕಾರ್ತಿಕ್ ಮೊದಲ ಪಂದ್ಯದಲ್ಲೇ ಆರ್‌ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿರುವುದು ಬೆಂಗಳೂರು ಪಾಳಯದಲ್ಲಿ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕೆಕೆಆರ್ ಎದುರು ಆರ್‌ಸಿಬಿ ಗೆಲ್ಲುವ ಕುದುರೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಸಂಭವನೀಯ ಆಟಗಾರರ ಪಟ್ಟಿ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್‌ ರಾವತ್‌, ವಿರಾಟ್‌ ಕೊಹ್ಲಿ, ದಿನೇಶ್ ಕಾರ್ತಿಕ್‌, ಶೆರ್ಫಾನೆ ರುಥರ್‌ಫೋರ್ಡ್‌, ಶಾಬಾಜ್‌ ಅಹಮ್ಮದ್, ವನಿಂದು ಹಸರಂಗ, ಡೇವಿಡ್‌ ವಿಲ್ಲಿ, ಹರ್ಷಲ್ ಪಟೇಲ್‌, ಆಕಾಶ್‌ ದೀಪ್‌, ಮೊಹಮ್ಮದ್ ಸಿರಾಜ್‌.

ಕೆಕೆಆರ್‌: ವೆಂಕಟೇಶ್‌ ಅಯ್ಯರ್‌, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌(ನಾಯಕ), ನಿತೀಶ್‌ ರಾಣಾ, ಸ್ಯಾಮ್‌ ಬಿಲ್ಲಿಂಗ್ಸ್‌, ಆ್ಯಂಡ್ರೆ ರಸೆಲ್‌, ಸುನಿಲ್‌ ನರೈನ್‌, ಶೆಲ್ಡಾನ್‌ ಜಾಕ್ಸನ್‌, ಶಿವಂ ಮಾವಿ, ವರುಣ್‌ ಚಕ್ರವರ್ತಿ, ಉಮೇಶ್‌ ಯಾದವ್‌

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್