ರಾಜಸ್ಥಾನ ರಾಯಲ್ಸ್ ಎದುರು ಆರ್‌ಸಿಬಿಗೆ ರೋಚಕ ಜಯ7 ರನ್ ರೋಚಕ ಜಯ ಸಾಧಿಸಿದ ವಿರಾಟ್ ಕೊಹ್ಲಿ ಪಡೆಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ ಆರ್‌ಸಿಬಿ

ಬೆಂಗಳೂರು(ಏ.23): ಗ್ಲೆನ್‌ ಮ್ಯಾಕ್ಸ್‌ವೆಲ್ ಹಾಗೂ ಫಾಫ್ ಡು ಪ್ಲೆಸಿಸ್‌ ಸ್ಪೋಟಕ ಅರ್ಧಶತಕ ಹಾಗೂ ಹರ್ಷಲ್ ಪಟೇಲ್ ಮೊನಚಾದ ದಾಳಿಯ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ಎದುರು 7 ರನ್ ರೋಚಕ ಜಯ ಸಾಧಿಸಿದೆ. ವಿರಾಟ್‌ ಕೊಹ್ಲಿ ನೇತೃತ್ವದಲ್ಲಿ ಆರ್‌ಸಿಬಿ ಸತತ ಎರಡು ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಮತ್ತೆ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 190 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಕೂಡಾ ಉತ್ತಮವಾಗಿರಲಿಲ್ಲ. ಸ್ಪೋಟಕ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್, ಖಾತೆ ತೆರೆಯುವ ಮುನ್ನವೇ ಸಿರಾಜ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಆದರೆ ಎರಡನೇ ವಿಕೆಟ್‌ಗೆ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ಯಶಸ್ವಿ ಜೈಸ್ವಾಲ್‌ ಎರಡನೇ ವಿಕೆಟ್‌ಗೆ 98 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಸಂಕಷ್ಟದಿಂದ ಪಾರು ಮಾಡಿದರು. ಆಕರ್ಷಕ ಬ್ಯಾಟಿಂಗ್ ನಡೆಸಿದ ದೇವದತ್ ಪಡಿಕ್ಕಲ್ ಕೇವಲ 34 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 52 ರನ್‌ ಬಾರಿಸಿ ಡೇವಿಡ್ ವಿಲ್ಲಿ ಬೌಲಿಂಗ್‌ನಲ್ಲಿ ವಿರಾಟ್ ಕೊಹ್ಲಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ಮತ್ತೋರ್ವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಕೂಡಾ ಪೆವಿಲಿಯನ್‌ ಹಾದಿ ಹಿಡಿದರು. ಜೈಸ್ವಾಲ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ಹರ್ಷಲ್‌ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

IPL 2023 ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಕೆಕೆಆರ್, ತಂಡದಲ್ಲಿ ಮಹತ್ವದ ಬದಲಾವಣೆ!

ಕೊನೆಯ 5 ಓವರ್‌ಗಳಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಗೆಲ್ಲಲು 69 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ ನಾಯಕ ಸಂಜು ಸ್ಯಾಮ್ಸನ್‌, ಮಹತ್ವದ ಘಟ್ಟದಲ್ಲಿ ವಿಕೆಟ್ ಒಪ್ಪಿಸಿದರು. ಸಂಜು 22 ರನ್ ಬಾರಿಸಿ ಹರ್ಷಲ್‌ ಪಟೇಲ್‌ಗೆ ಎರಡನೇ ಬಲಿಯಾದರು. ಇನ್ನು ಶಿಮ್ರೊನ್ ಹೆಟ್ಮೇಯರ್ 9 ಎಸೆತಗಳನ್ನು ಎದುರಿಸಿ ಕೇವಲ 3 ರನ್‌ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಧೃವ್ ಜುರೇಲ್ ಕೊನೆಯಲ್ಲಿ ಕೇವಲ 16 ಎಸೆತಗಳಲ್ಲಿ ಅಜೇಯ 34 ರನ್ ಗಳಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

Scroll to load tweet…

ಕೊನೆಯ ಓವರ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಗೆಲ್ಲಲು 20 ರನ್‌ಗಳ ಅಗತ್ಯವಿತ್ತು. 20ನೇ ಓವರ್‌ ಬೌಲಿಂಗ್‌ ಮಾಡುವ ಜವಾಬ್ದಾರಿ ಹೊತ್ತ ಆರ್‌ಸಿಬಿ ಡೆತ್ ಓವರ್ ಸ್ಪೆಷಲಿಸ್ಟ್‌ ಹರ್ಷಲ್ ಪಟೇಲ್ ಒಂದು ವಿಕೆಟ್ ಕಬಳಿಸಿ ಕೇವಲ 12 ರನ್‌ ನೀಡುವ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಇದಕ್ಕೂ ಮೊದಲು ಸೋತು ಬ್ಯಾಟಿಂಗ್ ಮಾಡಲಿಳಿದ ಆರ್‌ಸಿಬಿ ತಂಡವು ಖಾತೆ ತೆರೆಯುವ ಮುನ್ನವೇ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಇನ್ನು ಶಹಬಾಜ್ ಅಹಮ್ಮದ್‌(2) ಕೂಡಾ ಹೆಚ್ಚು ಹೊತ್ತು ಕ್ರೀಸ್‌ನಲ್ಲಿರಲು ಟ್ರೆಂಟ್ ಬೌಲ್ಟ್ ಅವಕಾಶ ನೀಡಲಿಲ್ಲ. ಆದರೆ ಮೂರನೇ ವಿಕೆಟ್‌ಗೆ ಫಾಫ್ ಡು ಪ್ಲೆಸಿಸ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್ ಜೋಡಿ ಕೇವಲ 66 ಎಸೆತಗಳಲ್ಲಿ 127 ರನ್‌ಗಳ ಜತೆಯಾಟವಾಡುವ ತಂಡಕ್ಕೆ ಆಸರೆಯಾದರು.

ಮತ್ತೊಮ್ಮೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಫಾಫ್ ಡು ಪ್ಲೆಸಿಸ್‌ ಕೇವಲ 39 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 62 ರನ್‌ ಬಾರಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್‌ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 77 ರನ್‌ ಬಾರಿಸಿ ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ರಿವರ್ಸ್‌ ಸ್ವೀಪ್‌ ಮಾಡುವ ಯತ್ನದಲ್ಲಿ ಹೋಲ್ಡರ್‌ಗೆ ಕ್ಯಾಚಿತ್ತು ಪೆವಿಲಿಯನ್‌ ಸೇರಿದರು.