ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ವೃದ್ದಿಮಾನ್ ಸಾಹ 5 ರನ್ ಗಳಿಸಿ ಮೊದಲ ಓವರ್‌ನಲ್ಲೇ ಸ್ವಪ್ನಿಲ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು.
ಅಹಮದಾಬಾದ್(ಏ.28): ತಮಿಳುನಾಡು ಮೂಲದ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಹಾಗೂ ಶಾರುಕ್ ಖಾನ್ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಬಾರಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಠಿಣ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ವೃದ್ದಿಮಾನ್ ಸಾಹ 5 ರನ್ ಗಳಿಸಿ ಮೊದಲ ಓವರ್‌ನಲ್ಲೇ ಸ್ವಪ್ನಿಲ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಶುಭ್‌ಮನ್ ಗಿಲ್ 19 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 16 ರನ್ ಬಾರಿಸಿ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ಗುಜರಾತ್ ಟೈಟಾನ್ಸ್ ತಂಡವು 45 ರನ್ ಗಳಿಸುವಷ್ಟರಲ್ಲಿ ಆರಂಭಿಕ ಬ್ಯಾಟರ್‌ಗಳಿಬ್ಬರು ಪೆವಿಲಿಯನ್ ಸೇರಿದರು.
ಶಾರುಕ್-ಸಾಯಿ ಜುಗಲ್ಬಂದಿ: ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಗುಜರಾತ್ ಟೈಟಾನ್ಸ್ ತಂಡಕ್ಕೆ ಮೂರನೇ ವಿಕೆಟ್‌ಗೆ ಸಾಯಿ ಸುದರ್ಶನ್ ಹಾಗೂ ಶಾರುಕ್ ಖಾನ್ ಆಸರೆಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಈ ಜೋಡಿ ಆ ಬಳಿಕ ಅನಾಯಾಸವಾಗಿ ರನ್ ಗಳಿಸಿತು. ಮೂರನೇ ವಿಕೆಟ್‌ಗೆ ಈ ಜೋಡಿ 45 ಎಸೆತಗಳಲ್ಲಿ 86 ರನ್‌ಗಳ ಜತೆಯಾಟವಾಡಿತು. ಬ್ಯಾಟಿಂಗ್ ಕ್ರಮಾಂಕದಲ್ಲಿ ಮುಂಬಡ್ತಿ ಪಡೆದು ಕ್ರೀಸ್‌ಗಿಳಿದ ಶಾರುಕ್ ಖಾನ್ ಕೇವಲ 24 ಎಸೆತಗಳನ್ನು ಎದುರಿಸಿ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊನೆಗೂ ಈ ಜೋಡಿ ಬೇರ್ಪಡಿಸುವಲ್ಲಿ ಸಿರಾಜ್ ಯಶಸ್ವಿಯಾದರು. ಶಾರುಕ್ ಖಾನ್ 30 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 58 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
IPL 2024: ಗುಜರಾತ್ ಟೈಟಾನ್ಸ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ, ತಂಡ ಕೂಡಿಕೊಂಡ ಮ್ಯಾಕ್ಸ್‌ವೆಲ್
ಇನ್ನು ಶಾರುಕ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಡೇವಿಡ್ ಮಿಲ್ಲರ್, ಸಾಯಿಸುದರ್ಶನ್‌ಗೆ ಉತ್ತಮ ಸಾಥ್ ನೀಡಿದರು. 4ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳನ್ನು ಎದುರಿಸಿ ಮುರಿಯದ 69 ರನ್‌ಗಳ ಜತೆಯಾಟವಾಡಿತು. ಆಕರ್ಷಕ ಬ್ಯಾಟಿಂಗ್ ನಡೆಸಿದ ಸಾಯಿ ಸುದರ್ಶನ್ 49 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 84 ರನ್ ಸಿಡಿಸಿದರು. ಇನ್ನು ಡೇವಿಡ್ ಮಿಲ್ಲರ್ 19 ಎಸೆತಗಳಲ್ಲಿ ಅಜೇಯ 26 ರನ್ ಬಾರಿಸಿ ತಂಡದ ಮೊತ್ತವನ್ನು ಇನ್ನೂರರ ಗಡಿ ತಲುಪಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮೊಹಮ್ಮದ್ ಸಿರಾಜ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಸ್ವಪ್ನಿಲ್ ಸಿಂಗ್ ತಲಾ ಒಂದೊಂದು ವಿಕೆಟ್ ಕಬಳಿಸುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.
