2025ರ ಐಪಿಎಲ್‌ನಲ್ಲಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸಂಜೆ 7.30ಕ್ಕೆ ಮುಖಾಮುಖಿಯಾಗಲಿವೆ. ಡೆಲ್ಲಿ ತಂಡವು ಮೂರು ಪಂದ್ಯಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದೆ. ಆದರೆ, ಆರ್‌ಸಿಬಿ ಬಲಿಷ್ಠವಾಗಿದ್ದು, ಡೆಲ್ಲಿ ತಂಡವು ಕೆಲವೇ ಆಟಗಾರರನ್ನು ನೆಚ್ಚಿಕೊಂಡಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ. ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ.

ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಇಂದು ಸಂಜೆ 7.30ಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾದಾಡಲಿವೆ. 

ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನದ ಮೂಲಕ ಗಮನ ಸೆಳೆದಿದೆ. ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತಾನಾಡಿದ ಮೂರು ಪಂದ್ಯಗಳಲ್ಲೂ ಅದ್ಭುತ ಪ್ರದರ್ಶನದ ಮೂಲಕ ಗೆಲುವಿನ ಕೇಕೆ ಹಾಕಿದ್ದು, ಇದೀಗ ಆರ್‌ಸಿಬಿ ಎದುರು ಜಯದ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. 

ಇದನ್ನೂ ಓದಿ: ಗುಜರಾತ್ ಎದುರು ಮುಗ್ಗರಿಸಿದ ರಾಜಸ್ಥಾನ ರಾಯಲ್ಸ್‌ಗೆ ಮತ್ತೊಂದು ಬಿಗ್ ಶಾಕ್!

ಮೂವರು ಆಟಗಾರರನ್ನಷ್ಟೇ ನೆಚ್ಚಿಕೊಂಡಿದೆ ಡೆಲ್ಲಿ: 

ಡೆಲ್ಲಿ ತಂಡಕ್ಕೆ ಹೋಲಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಾಕಷ್ಟು ಬಲಿಷ್ಠವಾಗಿದೆ ಎಂದು ಜಿತೇಶ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ. ನಾವು ತವರಿನಾಚೆ ಆಡಿ ಕಠಿಣ ಪಂದ್ಯಗಳನ್ನು ಜಯಿಸಿರುವುದರಿಂದ ನಮ್ಮ ತಂಡವು ಸಾಕಷ್ಟು ಬಲಿಷ್ಠವಾಗಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿತ್ತು. ಇದಾದ ಬಳಿಕ ಚೆನ್ನೈನ ಚೆಪಾಕ್‌ನಲ್ಲಿ ಸಿಎಸ್‌ಕೆ ತಂಡವನ್ನು ಬಗ್ಗುಬಡಿದಿತ್ತು. ಇನ್ನು ದಶಕದ ಬಳಿಕ ಮುಂಬೈನ ವಾಂಖೆಡೆ ಮೈದಾನದಲ್ಲಿ 5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ಗೆ ಆರ್‌ಸಿಬಿ ಸೋಲಿನ ರುಚಿ ತೋರಿಸಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಡೆಲ್ಲಿ ವಿರುದ್ದ ಪಂದ್ಯಕ್ಕೂ ಮೊದಲೇ ಆರ್‌ಸಿಬಿ ಫ್ಯಾನ್ಸ್‌ಗೆ ವಿಐ ಭರ್ಜರಿ ಕೊಡುಗೆ

ನಮ್ಮ ತಂಡದಲ್ಲಿರುವ ಎಲ್ಲಾ ಬ್ಯಾಟರ್‌ಗಳು ಒಳ್ಳೆಯ ಫಾರ್ಮ್‌ನಲ್ಲಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ ಮೂವರು ಆಟಗಾರರನ್ನಷ್ಟೇ ನೆಚ್ಚಿಕೊಂಡಿದೆ. ನಾವು ಸ್ಮಾರ್ಟ್ ಕ್ರಿಕೆಟ್ ಆಡುತ್ತಿದ್ದೇವೆ. ನಮ್ಮ ಬೌಲಿಂಗ್ ವಿಭಾಗ ಕೂಡಾ ಸಾಕಷ್ಟು ಬಲಿಷ್ಠವಾಗಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೇಲ್ನೋಟಕ್ಕೆ ಕನ್ನಡಿಗ ಕೆ ಎಲ್ ರಾಹುಲ್, ಆರಂಭಿಕ ಬ್ಯಾಟರ್ ಫಾಫ್ ಡು ಪ್ಲೆಸಿಸ್ ಹಾಗೂ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಹೆಚ್ಚಾಗಿ ನೆಚ್ಚಿಕೊಂಡಿದೆ. ಮೆಕ್‌ಗರ್ಕ್, ಟ್ರಿಸ್ಟಿನ್ ಸ್ಟಬ್ಸ್, ಮೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರು ಫಾರ್ಮ್‌ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಹೀಗಿದ್ದೂ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದೆ. ಟೂರ್ನಿಯಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ಡೆಲ್ಲಿ ಗೆಲುವಿನ ಓಟಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ರೇಕ್ ಹಾಕುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. 

ಇದನ್ನೂ ಓದಿ: ಇಂದಾದ್ರೂ ತವರಲ್ಲಿ ಆರ್‌ಸಿಬಿಗೆ ಸಿಗುತ್ತಾ ಜಯ? ಡೆಲ್ಲಿ ವಿರುದ್ಧ ಪೈಪೋಟಿ!

ಸಂಭಾವ್ಯ ಆಟಗಾರರ ಪಟ್ಟಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ/ರಸಿಕ್ ಧರ್.

ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೆಸರ್ ಮೆಕ್‌ಗರ್ಕ್, ಅಭಿಷೇಕ್ ಪೊರೆಲ್, ಕೆ ಎಲ್ ರಾಹುಲ್, ಟ್ರಿಸ್ಟಿನ್ ಸ್ಟಬ್ಸ್, ಅಕ್ಷರ್ ಪಟೇಲ್(ನಾಯಕ), ವಿಪ್ರಾಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಮೋಹಿತ್ ಶರ್ಮಾ/ಟಿ ನಟರಾಜನ್, ಅಶುತೋಷ್ ಶರ್ಮಾ

ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್