ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಐಪಿಎಲ್‌ನ 18ನೇ ಆವೃತ್ತಿಯಲ್ಲಿ ಮುಖಾಮುಖಿಯಾಗಲಿವೆ. ಆರ್‌ಸಿಬಿ ತಂಡವು ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿದೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಗಳಿಲ್ಲ, ಆದರೆ ಬೌಲಿಂಗ್ ವಿಭಾಗದಲ್ಲಿ ಸುಯಶ್ ಶರ್ಮಾ ಬದಲಿಗೆ ರಸಿಖ್ ಸಲಾಂ ಅಥವಾ ಸ್ವಪ್ನಿಲ್ ಸಿಂಗ್ ಆಡುವ ಸಾಧ್ಯತೆಯಿದೆ. ಆರ್‌ಸಿಬಿ ಗೆಲುವಿಗಾಗಿ ಸಜ್ಜಾಗಿದೆ.

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ತವರಿನಾಚೆ ಎರಡು ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಆರ್‌ಸಿಬಿ, ಇದೀಗ ತವರಿನಲ್ಲೂ ಶುಭಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದೆ.

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅನಾಯಾಸವಾಗಿ ಮಣಿಸಿದ್ದ ರಜತ್ ಪಾಟೀದಾರ್ ಪಡೆ, 17 ವರ್ಷಗಳ ಬಳಿಕ ಚೆಪಾಕ್ ಭದ್ರಕೋಟೆಯನ್ನು ಭೇದಿಸುವಲ್ಲಿ ಯಶಸ್ವಿಯಾಗಿತ್ತು. ಎರಡು ಬಲಿಷ್ಠ ತಂಡಗಳನ್ನು ಮಣಿಸಿರುವ ಆರ್‌ಸಿಬಿ ತಂಡವು ಇದೀಗ ತವರಿನ ಅಭಿಮಾನಿಗಳ ಎದುರು ಗೆಲುವಿನ ನಗೆ ಬೀರಲು ಸಜ್ಜಾಗಿದೆ. ಇನ್ನು ಇಂದಿನ ಪಂದ್ಯಕ್ಕೆ ಆರ್‌ಸಿಬಿ ತಂಡವು ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯು ದಟ್ಟವಾಗಿದೆ.

ಇದನ್ನೂ ಓದಿ: ,ತವರಲ್ಲಿ ಶುಭಾರಂಭ ನಿರೀಕ್ಷೆಯಲ್ಲಿ ಆರ್‌ಸಿಬಿ; ಬೆಂಗಳೂರಿಗೆ ಹ್ಯಾಟ್ರಿಕ್ ಜಯದ ಗುರಿ

ಆರ್‌ಸಿಬಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಯಾಕೆಂದರೆ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿಕೊಡುತ್ತಿದ್ದಾರೆ. ಇನ್ನು ಇಂಪ್ಯಾಕ್ಟ್ ಆಟಗಾರನಾಗಿ ದೇವದತ್ ಪಡಿಕ್ಕಲ್ ಕಳೆದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದರು. ಇನ್ನು ನಾಯಕ ರಜತ್ ಪಾಟೀದಾರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಕ್ಸರ್ ಸುರಿಮಳೆ ಸುರಿಸಲು ರೆಡಿಯಾಗಿದ್ದಾರೆ. ಇನ್ನುಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕೂಡಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ನಿಶ್ಚಿತ ಎನಿಸಿಕೊಂಡಿದೆ. 

ಇನ್ನೊಂದೆಡೆ ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್ ಹಾಗೂ ಯಶ್ ದಯಾಳ್ ಮತ್ತೊಮ್ಮೆ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ. ಬೌಲಿಂಗ್ ವಿಭಾಗದಲ್ಲಿ ಆರ್‌ಸಿಬಿ ಒಂದು ಬದಲಾವಣೆ ಮಾಡುವ ಸಾಧ್ಯತೆ ಇದೆ. ಲೆಗ್ ಸ್ಪಿನ್ನರ್ ಸುಯಶ್ ಶರ್ಮಾ ಬದಲು ವೇಗಿ ರಸಿಖ್ ಸಲಾಂ ಅಥವಾ ಎಡಗೈ ಸ್ಪಿನ್ನರ್ ಸ್ಟಪ್ಟಿಲ್ ಸಿಂಗ್‌ರನ್ನು ಆಡಿಸಬಹುದು. ಉಳಿದಂತೆ ಇನ್ಯಾವ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಕಂಡು ಬರುತ್ತಿಲ್ಲ.

ಇದನ್ನೂ ಓದಿ: ಧೋನಿಗೆ 10 ಓವರ್‌ ಬ್ಯಾಟ್ ಮಾಡಲು ಆಗಲ್ಲ: ಹೊಸ ಬಾಂಬ್ ಸಿಡಿಸಿದ ಸ್ಟಿಫನ್ ಪ್ಲೆಮಿಂಗ್!

ಗುಜರಾತ್ ಟೈಟಾನ್ಸ್ ಎದುರಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ:

ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್, ರಸಿಕ್ ಸಲಾಂ ಧರ್/ಸ್ವಪ್ನಿಲ್ ಸಿಂಗ್.