ಅಹಮದಾಬಾದ್ ಟೆಸ್ಟ್‌ನ ಎರಡನೇ ದಿನದಾಟದಲ್ಲಿ, ಕೆ ಎಲ್ ರಾಹುಲ್, ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ ಅವರ ಶತಕಗಳ ನೆರವಿನಿಂದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮುನ್ನಡೆ ಸಾಧಿಸಿದೆ. ದಿನದಾಟದಂತ್ಯಕ್ಕೆ ಭಾರತ 5 ವಿಕೆಟ್‌ಗೆ 448 ರನ್ ಗಳಿಸಿ, 286 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ಅಹಮದಾಬಾದ್: ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್, ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಹಾಗೂ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಅಜೇಯ ಶತಕದ ನೆರವಿನಿಂದ ಅಹಮದಾಬಾದ್ ಟೆಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ಎದುರು ಟೀಂ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ. ಎರಡನೇ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ, ಕೇವಲ 5 ವಿಕೆಟ್ ಕಳೆದುಕೊಂಡು 448 ರನ್ ಬಾರಿಸಿದ್ದು, ಒಟ್ಟಾರೆ 286 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. 104 ರನ್ ಗಳಿಸಿರುವ ರವೀಂದ್ರ ಜಡೇಜಾ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಭಾರತೀಯ ಬ್ಯಾಟರ್‌ಗಳು ಸಂಪೂರ್ಣ ಪ್ರಾಬಲ್ಯ ತೋರಿಸಿದರು. 121 ರನ್‌ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತಕ್ಕೆ ಶುಭ್‌ಮನ್ ಗಿಲ್ ಹಾಗೂ ಕೆ ಎಲ್ ರಾಹುಲ್ ಉತ್ತಮ ಆರಂಭ ಒದಗಿಸಿಕೊಟ್ಟರು. 100 ಎಸೆತಗಳನ್ನು ಎದುರಿಸಿದ ಗಿಲ್ 5 ಬೌಂಡರಿ ಸಹಿತ 50 ರನ್ ಸಿಡಿಸಿ ನಾಯಕ ರೋಸ್ಟನ್‌ ಚೇಸ್‌ಗೆ ವಿಕೆಟ್ ಒಪ್ಪಿಸಿದರು. ಮೂರನೇ ವಿಕೆಟ್‌ಗೆ ಗಿಲ್ ಹಾಗೂ ರಾಹುಲ್ ಜೋಡಿ 98 ರನ್‌ಗಳ ಜತೆಯಾಟವಾಡಿತು.

Scroll to load tweet…

8 ವರ್ಷಗಳ ಬಳಿಕ ತವರಿನಲ್ಲಿ ಮೊದಲ ಟೆಸ್ಟ್ ಶತಕ ಬಾರಿಸಿದ ರಾಹುಲ್

ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಫಾರ್ಮ್‌ಗೆ ಮರಳಿದ್ದ ರಾಹುಲ್, ಇದೀಗ ವೆಸ್ಟ್ ಇಂಡೀಸ್ ಎದುರೂ ಅದೇ ಲಯವನ್ನು ಮುಂದುವರೆಸಿದರು. ಇದರ ಜತೆಗೆ ಬರೋಬ್ಬರಿ 8 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. 2026ರಲ್ಲಿ ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ದ ರಾಹುಲ್ ಕೊನೆಯ ಬಾರಿಗೆ ಭಾರತದಲ್ಲಿ ಟೆಸ್ಟ್ ಶತಕ ಸಿಡಿಸಿದ್ದರು. ಇದಾದ ಬಳಿಕ ರಾಹುಲ್ ತವರಿನಾಚೆ ಶತಕ ಸಿಡಿಸಿದ್ದರಾದರೂ ತವರಿನಲ್ಲಿ ಟೆಸ್ಟ್ ಶತಕ ಬಾರಿಸಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ವಿಂಡೀಸ್ ಎದುರು 197 ಎಸೆತಗಳನ್ನು ಎದುರಿಸಿ 12 ಬೌಂಡರಿ ಸಹಿತ ಆಕರ್ಷಕ 100 ರನ್ ಗಳಿಸಿ ವಾರಿಕನ್‌ಗೆ ವಿಕೆಟ್ ಒಪ್ಪಿಸಿದರು.

ಜುರೆಲ್-ಜಡೇಜಾ ಜುಗಲ್ಬಂದಿ

ರಾಹುಲ್ ವಿಕೆಟ್ ಪತನದ ಬಳಿಕ ಜತೆಯಾದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಹಾಗೂ ರವೀಂದ್ರ ಜಡೇಜಾ 5ನೇ ವಿಕೆಟ್‌ಗೆ 206 ರನ್‌ಗಳ ಅಮೂಲ್ಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನ ಪಡೆದ ಜುರೆಲ್, ತಮ್ಮ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು. ಧ್ರುವ್ ಜುರೆಲ್ ಇದೀಗ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ 12ನೇ ವಿಕೆಟ್ ಕೀಪರ್ ಬ್ಯಾಟರ್ ಎನ್ನುವ ದಾಖಲೆಗೆ ಪಾತ್ರರಾದರು. ಜುರೆಲ್ 210 ಎಸೆತಗಳನ್ನು ಎದುರಿಸಿ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 125 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. 

ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಉಪನಾಯಕ ರವೀಂದ್ರ ಜಡೇಜಾ ಅಜೇಯ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಜಡ್ಡು 176 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 5 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಅಜೇಯ 104 ರನ್ ಬಾರಿಸಿದ್ದು, ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಮತ್ತೊಂದು ತುದಿಯಲ್ಲಿ ವಾಷಿಂಗ್ಟನ್ ಸುಂದರ್ 09 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಇದೀಗ ಮೂರನೇ ದಿನದಾಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.