ಕ್ಯಾನ್‌ಬೆರ್ರಾ(ಡಿ.04): ಕನ್ನಡಿಗ ಕೆ.ಎಲ್. ರಾಹುಲ್ ಬಾರಿಸಿದ ಸಮಯೋಚಿತ ಅರ್ಧಶತಕ  ಕೊನೆಯಲ್ಲಿ ರವೀಂದ್ರ ಜಡೇಜಾ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡು 161 ರನ್ ಬಾರಿಸಿದ್ದು, ಆತಿಥೇಯ ಅಸ್ಟ್ರೇಲಿಯಾ ತಂಡಕ್ಕೆ ಸವಾಲಿನ ಗುರಿ ನೀಡಿದೆ.

ಹೌದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಫಿಂಚ್ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್‌ ಮಾಡಿದ ಆಸೀಸ್ ವೇಗಿಗಳು ಆರಂಭದಲ್ಲೇ ಶಿಖರ್ ಧವನ್(01) ಹಾಗೂ ನಾಯಕ ವಿರಾಟ್ ಕೊಹ್ಲಿ(09)ಯನ್ನು ಒಂದಂಕಿ ಮೊತ್ತಕ್ಕೆ ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾದರು. ಆ ಬಳಿಕ ನಾಲ್ಕನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಹಾಗೂ ರಾಹುಲ್ ಜೋಡಿ 38 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡಕ್ಕೆ ಕೊಂಚ ಆಸರೆಯಾದರು. ಸಂಜು 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿ 23 ರನ್ ಬಾರಿಸಿ ಹೆನ್ರಿಕೇಸ್‌ಗೆ ವಿಕೆಟ್‌ ಒಪ್ಪಿಸಿದರು.

ಅಬ್ಬರಿಸಿದ ರಾಹುಲ್, ಜಡೇಜಾ: ಒಂದು ಕಡೆ ನಿರಂತರ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ನಿರ್ಭೀತಿಯಿಂದ ಬ್ಯಾಟ್‌ ಬೀಸಿದ ಕೆ.ಎಲ್. ರಾಹುಲ್ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್‌ ನೆರವಿನಿಂದ 51 ರನ್ ಬಾರಿಸಿ ಹೆನ್ರಿಕೇಸ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 44 ರನ್ ಬಾರಿಸಿ ಅಜೇಯರಾಗುಳಿದರು.

ಆಸ್ಟ್ರೇಲಿಯಾ ಪರ ಮೊಯಿಸ್ ಹೆನ್ರಿಕೇಸ್ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 2, ಜಂಪಾ ಹಾಗೂ ಸ್ವ್ಯಾಪ್‌ಸನ್ ತಲಾ ಒಂದೊಂದು ವಿಕೆಟ್‌ ಪಡೆದರು.