Asianet Suvarna News Asianet Suvarna News

IPL 2023: ಕುಸಿದ ಮುಂಬೈ ಇಂಡಿಯನ್ಸ್‌ಗೆ ವಧೇರಾ ಆಸರೆ, ಚೆನ್ನೈಗೆ ಸ್ಪರ್ಧಾತ್ಮಕ ಗುರಿ..!

ಮುಂಬೈ ಇಂಡಿಯನ್ಸ್ ಎದುರು ಬಿಗು ದಾಳಿ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್‌
ಚೆನ್ನೈ ಬೌಲರ್‌ಗಳೆದುರು ರನ್ ಗಳಿಸಲು ಪರದಾಡಿದ ಮುಂಬೈ ಇಂಡಿಯನ್ಸ್
ಸ್ಪರ್ಧಾತ್ಮಕ ಗುರಿ ನೀಡಿದ ಮುಂಬೈ ಇಂಡಿಯನ್ಸ್

Nehal Wadhera fifty powers Mumbai Indians set 140 runs target to Mumbai Indians kvn
Author
First Published May 6, 2023, 5:19 PM IST

ಚೆನ್ನೈ(ಮೇ.06): ದೀಪಕ್‌ ಚಹಾರ್ ಮಾರಕ ದಾಳಿಗೆ ತತ್ತರಿಸಿ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದ್ದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಮಧ್ಯಮ ಕ್ರಮಾಂಕದಲ್ಲಿ ನೆಹಾಲ್ ವಧೇರಾ ಆಕರ್ಷಕ ಅರ್ಧಶತಕ ಸಿಡಿಸಿ ಆಸರೆಯಾಗಿದ್ದಾರೆ. ನಿಗದಿತ 20 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ ಕಳೆದುಕೊಂಡು 139 ರನ್ ಬಾರಿಸಿದ್ದು, ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸ್ಪರ್ಧಾತ್ಮಕ ಗುರಿ ನೀಡಿದೆ

ಇಲ್ಲಿನ ಚೆಪಾಕ್‌ ಮೈದಾನದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ, ಮರು ಯೋಚನೆ ಮಾಡದೇ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆರಂಭದಲ್ಲೇ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳು ಯಶಸ್ವಿಯಾದರು. ಇಶಾನ್ ಕಿಶನ್‌ ಜತೆ ಇನಿಂಗ್ಸ್ ಆರಂಭಿಸಿದ ಕ್ಯಾಮರೋನ್ ಗ್ರೀನ್‌ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ್ದ ಇಶಾನ್ ಕಿಶನ್‌ ಕೂಡಾ(7) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದರು. ಮುಂಬೈ ಇಂಡಿಯನ್ಸ್ ತಂಡವು 14 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.

ನೆಹಾಲ್ ವಧೇರಾ ಆಸರೆ: 14 ರನ್‌ಗಳೊಳಗಾಗಿ ಪ್ರಮುಖ 3 ವಿಕೆಟ್‌ ಕಳೆದುಕೊಂಡು ಕಂಗಾಲಾಗಿದ್ದ ಮುಂಬೈ ಇಂಡಿಯನ್ಸ್ ತಂಡಕ್ಕೆ 4ನೇ ವಿಕೆಟ್‌ಗೆ ನೆಹಾಲ್ ವಧೇರಾ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ 55 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸೂರ್ಯಕುಮಾರ್ ಯಾದವ್ 22 ಎಸೆತಗಳನ್ನು ಎದುರಿಸಿ 26 ರನ್ ಬಾರಿಸಿ ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು. 

IPL 2023: ಮುಂಬೈ ಎದುರು ಟಾಸ್ ಗೆದ್ದ ಧೋನಿ ಬೌಲಿಂಗ್ ಆಯ್ಕೆ..!

ಇನ್ನು ಇದಾದ ಬಳಿಕ 5ನೇ ವಿಕೆಟ್‌ಗೆ ನೆಹಾಲ್ ವಧೇರಾ ಹಾಗೂ ಟ್ರಿಸ್ಟನ್ ಸ್ಟಬ್ಸ್ ಸಮಯೋಚಿತ 53 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 120ರ ಗಡಿ ದಾಟಿಸಿದರು. ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ನೆಹಾಲ್ ವಧೇರಾ 51 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 64 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಸ್ಟಬ್ಸ್‌ 21 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 20 ರನ್ ಬಾರಿಸಿ ಮತೀಶ್ ಪತಿರಣಗೆ ವಿಕೆಟ್ ಒಪ್ಪಿಸಿದರು. 

ಇನ್ನು ಕೊನೆಯ 15 ಎಸೆತಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕೇವಲ 16 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್ 2 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಆರ್ಶದ್ ಖಾನ್ ಒಂದು ರನ್ ಗಳಿಸಿ ಪೆವಿಲಿಯನ್ ಪೆರೇಡ್ ನಡೆಸಿದರು.

ಚೆನ್ನೈ ಸೂಪರ್ ಕಿಂಗ್ಸ್ ಪರ ಶಿಸ್ತುಬದ್ದ ದಾಳಿ ನಡೆಸಿದ ಮತೀಶ್ ಪತಿರಣ 4 ಓವರ್ ಬೌಲಿಂಗ್ ಮಾಡಿ ಕೇವಲ 15 ರನ್ ನೀಡಿ 3 ವಿಕೆಟ್ ಪಡೆದರೆ, ದೀಪಕ್ ಚಹರ್ ಹಾಗೂ ತುಷಾರ್ ದೇಶಪಾಂಡೆ ತಲಾ 2 ವಿಕೆಟ್ ಗಳಿಸಿದರು. ಇನ್ನು ಆಲ್ರೌಂಡರ್ ರವೀಂದ್ರ ಜಡೇಜಾ ತಮ್ಮ ಖಾತೆಗೆ ಒಂದು ವಿಕೆಟ್ ಸೇರಿಸಿಕೊಂಡರು.

Follow Us:
Download App:
  • android
  • ios