ಗೆಲ್ಲಲು 192 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಮೂರನೇ ದಿನದಾಟದಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 40 ರನ್ ಗಳಿಸಿತ್ತು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ(55) ಹಾಗೂ ಯಶಸ್ವಿ ಜೈಸ್ವಾಲ್(37) ಬರೋಬ್ಬರಿ 84 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 

ರಾಂಚಿ(ಫೆ.26): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ರಾಂಚಿ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ 3-1 ಅಂತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಕೆ ಎಲ್ ರಾಹುಲ್, ಮೊಹಮ್ಮದ್ ಶಮಿ ಅವರಂತಹ ತಾರಾ ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ ರಾಂಚಿ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. 

ಇನ್ನು ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಾದ ಅಕಾಯ್‌ನನ್ನು ಸ್ವಾಗತಿಸಿದ್ದರು. ಅನುಷ್ಕಾ ಶರ್ಮಾ ತಮ್ಮ ಮಗನಿಗೆ ಜನ್ಮ ನೀಡುವ ಹಿನ್ನೆಲೆಯಲ್ಲಿಯೇ ವಿರಾಟ್ ಕೊಹ್ಲಿ ಕೊನೆಯ ಕ್ಷಣದಲ್ಲಿ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದರು. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್ ಹಾಕುವ ಮೂಲಕ ಗಮನ ಸೆಳೆದಿದ್ದಾರೆ. ಕೊಹ್ಲಿ ಪೋಸ್ಟ್ ಮಾಡಿದ ಸೋಷಿಯಲ್ ಮೀಡಿಯಾ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತದಲ್ಲಿ ನಡಿಲಿಲ್ಲ 'ಬಾಜ್‌ಬಾಲ್‌' ತಂತ್ರ, ಇಂಗ್ಲೆಂಡ್ ಎದುರು ಟೆಸ್ಟ್ ಸರಣಿ ಗೆದ್ದ ಭಾರತ..!

"ಎಸ್‌..! ಯುವ ತಂಡದಿಂದ ಎಂತಹ ಅದ್ಭುತ ಸರಣಿ ವಿಜಯವಿದು. ನಮ್ಮ ಯುವ ಪಡೆ ಧೈರ್ಯ, ದೃಢತೆ ಹಾಗೂ ಬದ್ಧತೆಯನ್ನು ತೋರಿದೆ" ಎಂದು ವಿರಾಟ್ ಕೊಹ್ಲಿ ಸೋಷಿಯಲ್‌ ಮೀಡಿಯಾವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Scroll to load tweet…

ಗೆಲ್ಲಲು 192 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಮೂರನೇ ದಿನದಾಟದಂತ್ಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 40 ರನ್ ಗಳಿಸಿತ್ತು. ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ(55) ಹಾಗೂ ಯಶಸ್ವಿ ಜೈಸ್ವಾಲ್(37) ಬರೋಬ್ಬರಿ 84 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 

ಇದಾದ ಬಳಿಕ ರಜತ್ ಪಾಟೀದಾರ್(0), ರವೀಂದ್ರ ಜಡೇಜಾ(4) ಹಾಗೂ ಸರ್ಫರಾಜ್ ಖಾನ್(0) ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದಾಗ ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಆರನೇ ವಿಕೆಟ್‌ಗೆ ಶುಭ್‌ಮನ್ ಗಿಲ್(52) ಹಾಗೂ ಧ್ರವ್ ಜುರೆಲ್(39) ಮುರಿಯದ 72 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ 5 ವಿಕೆಟ್ ಸ್ಮರಣೀಯ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ನೆಟ್ಟ ರವಿಚಂದ್ರನ್ ಅಶ್ವಿನ್..!

ಇನ್ನು ಈ ಗೆಲುವಿನೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಸತತವಾಗಿ 17ನೇ ಟೆಸ್ಟ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೆಸ್ಟ್ ಸರಣಿ ಕೈವಶ ಮಾಡಿಕೊಂಡಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವು ಮಾರ್ಚ್ 07ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಭಾರತ ತಂಡವು 2012-13ರಲ್ಲಿ ಆಲಿಸ್ಟರ್ ಕುಕ್ ನೇತೃತ್ವದ ಇಂಗ್ಲೆಂಡ್ ತಂಡದ ಎದುರು ಕೊನೆಯ ಬಾರಿಗೆ 1-2 ಅಂತರದಲ್ಲಿ ತವರಿನಲ್ಲಿ ಟೆಸ್ಟ್ ಸರಣಿಯಲ್ಲಿ ಸೋಲು ಕಂಡಿತ್ತು. ಇದಾದ ಬಳಿಕ ಟೀಂ ಇಂಡಿಯಾ ತವರಿನಲ್ಲಿ 50 ಟೆಸ್ಟ್ ಪಂದ್ಯಗಳನ್ನಾಡಿದ್ದು ಈ ಪೈಕಿ 39 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು.