ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ರವೀಂದ್ರ ಜಡೇಜಾಗಾಯದ ಸಮಸ್ಯೆಯಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಜಡ್ಡುಜಡ್ಡು ಅಲಭ್ಯತೆ ಭಾರತ ತಂಡಕ್ಕೆ ದೊಡ್ಡ ನಷ್ಟ ಎಂದ ಮಹೆಲಾ ಜಯವರ್ಧನೆ

ನವದೆಹಲಿ(ಸೆ.17): ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಈಗಾಗಲೇ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿಯು ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಗಾಯದ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್‌, ಟೀಂ ಇಂಡಿಯಾ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ ಗಾಯದ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಚುಟುಕು ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಇದೀಗ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲಾ ಜಯವರ್ಧನೆ ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಟಿ20 ವಿಶ್ವಕಪ್ ಟೂರ್ನಿಗೆ ಜಡೇಜಾ ಅಲಭ್ಯರಾಗಿದ್ದು, ಭಾರತ ತಂಡದ ಪಾಲಿಗೆ ದೊಡ್ಡ ನಷ್ಟವೆಂದು ಅಭಿಪ್ರಾಯಪಟ್ಟಿದ್ದಾರೆ.

5ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಒಳ್ಳೆಯ ರೀತಿಯಲ್ಲಿ ಫಿಟ್ ಆಗಿದ್ದರು. ಆದರೆ ಇದೀಗ ರವೀಂದ್ರ ಜಡೇಜಾ ಇಲ್ಲದೆಯೇ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ತಂಡಕ್ಕಿದು ದೊಡ್ಡ ಸವಾಲಾಗಬಹುದು. ಅವರು ಹಾರ್ದಿಕ್ ಪಾಂಡ್ಯ ಜತೆಗೂಡಿ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದರು. ಈ ಇಬ್ಬರು ತಂಡಕ್ಕೆ ಒಳ್ಳೆಯ ಆಲ್ರೌಂಡ್ ಆಯ್ಕೆ ಎನಿಸಿಕೊಂಡಿದ್ದರು. ಹೀಗಾಗಿ ಭಾರತ ತಂಡವು ಮತ್ತಷ್ಟು ಬಲಾಢ್ಯ ಬ್ಯಾಟಿಂಗ್ ಪಡೆಯನ್ನು ಹೊಂದಲು ಅನುಕೂಲವಾಗುತ್ತಿತ್ತು ಎಂದು ಲಂಕಾ ಮಾಜಿ ನಾಯಕ ಮಹೆಲಾ ಜಯವರ್ಧನೆ ಅಭಿಪ್ರಾಯಪಟ್ಟಿದ್ದರು.

ರವೀಂದ್ರ ಜಡೇಜಾ ಅವರಂತಹ ಎಡಗೈ ಆಟಗಾರರು ತಂಡದಲ್ಲಿ ಇಲ್ಲದೇ ಇರುವುದು ಭಾರತ ತಂಡದ ಪಾಲಿಗೆ ಕೊಂಚ ಸವಾಲಾಗುವ ಸಾಧ್ಯತೆಯಿದೆ. ಹೀಗಾಗಿ ದಿನೇಶ್ ಕಾರ್ತಿಕ್ ಅವರನ್ನು ಹೊರಗಿಟ್ಟು ರಿಷಭ್ ಪಂತ್‌ಗೆ ಮಣೆ ಹಾಕುವ ಸಾಧ್ಯತೆ ಹೆಚ್ಚು. ರವೀಂದ್ರ ಜಡೇಜಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದರು. ಅವರಂತಹ ಆಟಗಾರನಿಲ್ಲದೇ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವುದು ದೊಡ್ಡ ನಷ್ಟವಾಗಿ ಪರಿಣಮಿಸಲಿದೆ ಎಂದು ಜಯವರ್ಧನೆ ಹೇಳಿದ್ದಾರೆ.

ICC T20 World Cup ಚುಟುಕು ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ಕ್ರಿಕೆಟ್ ತಂಡ ಪ್ರಕಟ

ಇನ್ನು ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ಟೀಂ ಇಂಡಿಯಾ ಪಾಲಿಗೆ ಒಳ್ಳೆಯ ಬೆಳವಣಿಗೆ ಎಂದು ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ತಾವೇನು ಮಾಡಬಲ್ಲೆನು ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಉತ್ತಮವಾಗಿ ಸಾಧಿಸಿ ತೋರಿಸಿದ್ದಾರೆ. ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಕೂಡಾ ಹೆಚ್ಚುವಂತೆ ಮಾಡಿದೆ ಎಂದು ಜಯವರ್ಧನೆ ಹೇಳಿದ್ದಾರೆ.

ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆರ್ಶ್‌ದೀಪ್‌ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಹರ್.