ಬೆಂಗಳೂರು(ಫೆ.17): ಆಧುನಿಕ ಕ್ರಿಕೆಟ್ ಕಂಡ ಸೂಪರ್ ಸ್ಟಾರ್ ಬ್ಯಾಟ್ಸ್‌ಮನ್‌, ಆರ್‌ಸಿಬಿಯ ಆಪತ್ಭಾಂಧವ, ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ಗಿಂದು(ಫೆ.17-2021) 37ನೇ ಜನ್ಮದಿನದ ಸಂಭ್ರಮ. ಎದುರಾಳಿ ತಂಡದ ಬೌಲರ್‌ಗಳನ್ನು ಕನಸಿನಲ್ಲೂ ಕಾಡುವ ವಿಸ್ಪೋಟಕ ಬ್ಯಾಟ್ಸ್‌ಮನ್‌ ಜನ್ಮದಿನಕ್ಕೆ ಅಭಿಮಾನಿಗಳು ಹಾಗೂ ಕ್ರಿಕೆಟಿಗರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಎಬಿ ಡಿವಿಲಿಯರ್ಸ್‌ 2004ರಲ್ಲಿ ತಮ್ಮ 20ನೇ ವಯಸ್ಸಿನಲ್ಲಿ ಇಂಗ್ಲೆಂಡ್ ವಿರುದ್ದ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 50+ ಬ್ಯಾಟಿಂಗ್ ಸರಾಸರಿಯಲ್ಲಿ ಎರಡು ಮಾದರಿಯಲ್ಲೂ ತಲಾ 8 ಸಾವಿರಕ್ಕೂ ಅಧಿಕ ರನ್‌ ಬಾರಿಸಿದ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿವೇಗದ ಅರ್ಧಶತಕ, ಶತಕ ಹಾಗೂ 150 ರನ್‌ ಬಾರಿಸಿದ ದಾಖಲೆ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದೆ.

ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಫಾಫ್‌ ಡುಪ್ಲೆಸಿಸ್‌..!

2011ರಿಂದೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿರುವ ಎಬಿ ಡಿವಿಲಿಯರ್ಸ್‌ಗೆ ಭಾರತದಲ್ಲೇ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಎಬಿಡಿ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.