* ವೆಸ್ಟ್ ಇಂಡೀಸ್ ಎದುರು ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ* ಮಾರ್ಟಿನ್ ಗಪ್ಟಿಲ್ ದಾಖಲೆ ಧೂಳೀಪಟ ಮಾಡಿದ ಹಿಟ್‌ಮ್ಯಾನ್* ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಕೀರ್ತಿ ರೋಹಿತ್ ಶರ್ಮಾ ಪಾಲು
ಟ್ರನಿಡ್ಯಾಡ್(ಜು.30): ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ. ರೋಹಿತ್ ಶರ್ಮಾ, ವಿಂಡೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಕೇವಲ 44 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಆಕರ್ಷಕ 64 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅದ್ಭುತ ಇನಿಂಗ್ಸ್ ನೆರವಿನಿಂದಲೇ ಟೀಂ ಇಂಡಿಯಾ, ಮೊದಲ ಟಿ20 ಪಂದ್ಯದಲ್ಲಿ 68 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಇದೇ ವೇಳೆ ನ್ಯೂಜಿಲೆಂಡ್ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಹೆಸರಿನಲ್ಲಿದ್ದ ದಾಖಲೆ ಅಳಿಸಿ ಹಾಕುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾಗಿದ್ದಾರೆ.
ಹೌದು, ನ್ಯೂಜಿಲೆಂಡ್ ಅನುಭವಿ ಬ್ಯಾಟರ್ ಮಾರ್ಟಿನ್ ಗಪ್ಟಿಲ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಆದರೆ ಇದೀಗ ಆ ದಾಖಲೆ ರೋಹಿತ್ ಶರ್ಮಾ ಪಾಲಾಗಿದೆ. ರೋಹಿತ್ ಶರ್ಮಾ ಇದುವರೆಗೂ 129 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 27 ಅರ್ಧಶತಕ ಹಾಗೂ 4 ಶತಕ ಸಹಿತ 3,443 ರನ್ ಬಾರಿಸಿದ್ದಾರೆ. ಇನ್ನೊಂದೆಡೆ ಕಿವೀಸ್ ಓಪನರ್ ಮಾರ್ಟಿನ್ ಗಪ್ಟಿಲ್ 116 ಪಂದ್ಯಗಳನ್ನಾಡಿ 20 ಅರ್ಧಶತಕ ಹಾಗೂ 3 ಶತಕ ಸಹಿತ 3,399 ರನ್ ಬಾರಿಸಿದ್ದಾರೆ. ರೋಹಿತ್ ಶರ್ಮಾ 32.48ರ ಸರಾಸರಿಯಲ್ಲಿ ರನ್ ಗಳಿಸಿದ್ದರೇ, ಮಾರ್ಟಿನ್ ಗಪ್ಟಿಲ್ 32.37ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.
ಇನ್ನು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೂ 99 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 50.12ರ ಬ್ಯಾಟಿಂಗ್ ಸರಾಸರಿಯಲ್ಲಿ 3,308 ರನ್ ಬಾರಿಸಿದ್ದಾರೆ. ಐರ್ಲೆಂಡ್‌ನ ಪೌಲ್ ಸ್ಟೆರ್ಲಿಂಗ್(2,894) ಹಾಗೂ ಆಸ್ಟ್ರೇಲಿಯಾದ ನಾಯಕ ಆರೋನ್ ಫಿಂಚ್(2,855) ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿದ್ದಾರೆ.
ನಾವು 190 ಬಾರಿಸುತ್ತೇವೆ ಅಂದುಕೊಂಡಿರಲಿಲ್ಲ: ರೋಹಿತ್ ಶರ್ಮಾ ಹೀಗಂದಿದ್ದೇಕೆ?
ಇನ್ನು ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯದ ಕುರಿತಾಗಿ ಮಾತನಾಡುವುದಾದರೇ, ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡವು ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ ಅರ್ಧಶತಕ(64) ಹಾಗೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ ಬಾರಿಸಿದ ಸ್ಪೋಟಕ 41 ರನ್‌ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 190 ರನ್ ಬಾರಿಸಿತ್ತು.
ಇನ್ನು ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು, ಆರ್ಶದೀಪ್ ಸಿಂಗ್, ರವಿಚಂದ್ರನ್ ಅಶ್ವಿನ್ ಹಾಗೂ ರವಿ ಬಿಷ್ಣೋಯಿ ಮಾರಕ ದಾಳಿಗೆ ತತ್ತರಿಸಿ 8 ವಿಕೆಟ್ ಕಳೆದುಕೊಂಡು ಕೇವಲ 122 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರತ ತಂಡವು 68 ರನ್‌ಗಳ ಅಂತರದ ಗೆಲುವು ಸಾಧಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಆರ್ಶದೀಪ್ ಸಿಂಗ್, ರವಿಚಂದ್ರನ್ ಅಶ್ವಿನ್ ಹಾಗೂ ರವಿ ಬಿಷ್ಣೋಯಿ ತಲಾ 2 ವಿಕೆಟ್ ಪಡೆದರು.
