ಡೆಲ್ಲಿ ಕ್ಯಾಪಿಟಲ್ಸ್‌ಗೆ ಬೃಹತ್ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ಆಕರ್ಷಕ ಅರ್ಧಶತಕ ಸಿಡಿಸಿದ ಕಾನ್‌ವೇ, ಗಾಯಕ್ವಾಡ್‌ಪ್ಲೇ ಆಫ್ ಹೊಸ್ತಿಲಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್
ನವದೆಹಲಿ(ಮೇ.20): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್‌ಗಳಾದ ಡೆವೊನ್ ಕಾನ್‌ವೇ ಹಾಗೂ ಋತುರಾಜ್ ಗಾಯಕ್ವಾಡ್ ಮತ್ತೊಮ್ಮೆ ಶತಕದ ಜತೆಯಾಟವಾಡುವ ಮೂಲಕ ಮಿಂಚಿದ್ದಾರೆ. ಕಾನ್‌ವೇ ಹಾಗೂ ಗಾಯಕ್ವಾಡ್ ಬಾರಿಸಿದ ಕೆಚ್ಚೆದೆಯ ಅರ್ಧಶತಕಗಳ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 223 ರನ್ ಬಾರಿಸಿದ್ದು, ಗೆಲ್ಲಲು ಡೆಲ್ಲಿ ಕ್ಯಾಪಿಟಲ್ಸ್‌ಗೆ ಕಠಿಣ ಗುರಿ ನೀಡಿದೆ.
ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡುವಲ್ಲಿ ಆರಂಭಿಕರಾದ ಡೆವೊನ್ ಕಾನ್‌ವೇ ಹಾಗೂ ಋತುರಾಜ್ ಗಾಯಕ್ವಾಡ್ ಯಶಸ್ವಿಯಾದರು.
ಆರಂಭದಿಂದಲೇ ಈ ಜೋಡಿ ಡೆಲ್ಲಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಪರಿಣಾಮ ಬ್ಯಾಟಿಂಗ್ ಪವರ್ ಪ್ಲೇನಲ್ಲಿ 52 ರನ್‌ಗಳ ಜತೆಯಾಟ ನಿಭಾಯಿಸಿದರು. ಇದಾದ ಬಳಿಕವೂ ಈ ಜೋಡಿ ಚುರುಕಿನ ರನ್ ಗಳಿಸುವತ್ತ ಗಮನ ಹರಿಸಿದರು. ಋತುರಾಜ್ ಗಾಯಕ್ವಾಡ್ 37 ಎಸೆತಗಳನ್ನು ಎದುರಿಸಿ ಈ ಆವೃತ್ತಿಯ ಮೂರನೇ ಅರ್ಧಶತಕ ಸಿಡಿಸಿದರು. ಇನ್ನು ಗಾಯಕ್ವಾಡ್‌ಗೆ ಉತ್ತಮ ಸಾಥ್ ನೀಡಿದ ಡೆವೊನ್ ಕಾನ್‌ವೇ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಮೊದಲ ವಿಕೆಟ್‌ಗೆ ಗಾಯಕ್ವಾಡ್ ಹಾಗೂ ಕಾನ್‌ವೇ ಜೋಡಿ 141 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿಕೊಟ್ಟರು. ಋತುರಾಜ್ ಗಾಯಕ್ವಾಡ್ 50 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 7 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ 79 ರನ್ ಬಾರಿಸಿ ಚೇತನ್ ಸಕಾರಿಯಾಗೆ ವಿಕೆಟ್ ಒಪ್ಪಿಸಿದರು.
ಗಾಯಕ್ವಾಡ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಶಿವಂ ದುಬೆ ಕೂಡಾ ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದರು. ಎರಡನೇ ವಿಕೆಟ್‌ಗೆ ಈ ಜೋಡಿ 54 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಶಿವಂ ದುಬೆ ಕೇವಲ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಬಾರಿಸಿ ಖಲೀಲ್ ಅಹಮ್ಮದ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಶತಕದತ್ತ ಮುನ್ನುಗ್ಗುತ್ತಿದ್ದ ಡೆವೊನ್ ಕಾನ್‌ವೇ 52 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 87 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಇನ್ನು ಕೊನೆಯಲ್ಲಿ ರವೀಂದ್ರ ಜಡೇಜಾ 7 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 20 ರನ್ ಬಾರಿಸಿದರೆ, ನಾಯಕ ಎಂ ಎಸ್ ಧೋನಿ, 4 ಎಸೆತಗಳಲ್ಲಿ 5 ರನ್ ಬಾರಿಸಿ ಅಜೇಯರಾಗುಳಿದರು.
