ಏಷ್ಯಾಕಪ್‌ನ ಒಮಾನ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಈ ಪ್ರದರ್ಶನದೊಂದಿಗೆ, ಅವರು ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ಪಟ್ಟಿಯಲ್ಲಿ ಎಂ ಎಸ್ ಧೋನಿಯನ್ನು ಹಿಂದಿಕ್ಕಿ ಹೊಸ ದಾಖಲೆ ನಿರ್ಮಿಸಿದರು.
ದುಬೈ: ಏಷ್ಯಾಕಪ್‌ನ ಗ್ರೂಪ್ ಹಂತದಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಕೇವಲ 45 ಎಸೆತಗಳನ್ನು ಎದುರಿಸಿದ ಅವರು 56 ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಸಂಜು, ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸೊಗಸಾದ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿದ್ದವು. ಸಂಜು ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಭಾರತ ಎಂಟು ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಗುರಿ ಬೆನ್ನತ್ತಿದ ಒಮಾನ್ ನಾಲ್ಕು ವಿಕೆಟ್ ನಷ್ಟಕ್ಕೆ 167 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತ 21 ರನ್‌ಗಳ ಜಯ ಸಾಧಿಸಿತು.
ಮೂರು ಪಂದ್ಯಶ್ರೇಷ್ಠ ಗೆದ್ದ ಸಂಜು
ಸಂಜು ಸ್ಯಾಮ್ಸನ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂದಿತು. ಟಿ20ಯಲ್ಲಿ ಮೂರು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಮೊದಲ ಭಾರತೀಯ ವಿಕೆಟ್ ಕೀಪರ್ ಎಂಬ ದಾಖಲೆಯನ್ನು ಸಂಜು ನಿರ್ಮಿಸಿದ್ದಾರೆ. ಇದಕ್ಕೂ ಮೊದಲು ದಿನೇಶ್ ಕಾರ್ತಿಕ್, ಇಶಾನ್ ಕಿಶನ್, ಕೆ ಎಲ್ ರಾಹುಲ್ ಹಾಗೂ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೇವಲ ಒಮ್ಮೆ ಮಾತ್ರ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ್ದಾರೆ.
ಧೋನಿ ದಾಖಲೆ ಮುರಿದ ಸಂಜು
ಇನ್ನು ಇದೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತೊಂದು ಅಪರೂಪದ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮಾಜಿ ನಾಯಕ ಎಂ ಎಸ್ ಧೋನಿಯನ್ನು ಸಂಜು ಹಿಂದಿಕ್ಕಿದರು. 307 ಪಂದ್ಯಗಳಿಂದ 353 ಸಿಕ್ಸರ್‌ಗಳೊಂದಿಗೆ ಸಂಜು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಒಟ್ಟು 405 ಪಂದ್ಯಗಳಿಂದ 350 ಸಿಕ್ಸರ್‌ಗಳನ್ನು ಗಳಿಸಿದ್ದ ಧೋನಿಯ ದಾಖಲೆಯನ್ನು ಸಂಜು ಅಳಿಸಿ ಹಾಕಿದರು. ಈ ಪಟ್ಟಿಯಲ್ಲಿ ಮಾಜಿ ನಾಯಕ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಅವರು 463 ಪಂದ್ಯಗಳಿಂದ 547 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
414 ಪಂದ್ಯಗಳಿಂದ 435 ಸಿಕ್ಸರ್‌ಗಳನ್ನು ಬಾರಿಸಿರುವ ರನ್ ಮಷೀನ್ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಈ ಪಟ್ಟಿಯಲ್ಲಿದ್ದಾರೆ. 328 ಪಂದ್ಯಗಳನ್ನು ಆಡಿರುವ ಸೂರ್ಯ 328 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಸೂರ್ಯಕುಮಾರ್ ನಂತರದ ಸ್ಥಾನದಲ್ಲಿ ಸಂಜು ಇದ್ದಾರೆ. ಅವರ ಹಿಂದೆ ಎಂ ಎಸ್ ಧೋನಿ ಇದ್ದಾರೆ.
ಏಷ್ಯಾಕಪ್ ಟೂರ್ನಿಯ ಒಮಾನ್ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್ ಅಂತರದ ಜಯಭೇರಿ ಬಾರಿಸಿತು. ಈ ಮೂಲಕ ‘ಎ’ ಗುಂಪಿನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಅಗ್ರಸ್ಥಾನಿಯಾಗಿಯೇ ಸೂಪರ್ 4 ಹಂತ ಪ್ರವೇಶಿಸಿದೆ. ಇದೀಗ ಸೂಪರ್ 4 ಹಂತದಲ್ಲಿ ಸೆಪ್ಟೆಂಬರ್ 21ರಂದು ನಡೆಯಲಿರುವ ಪಂದ್ಯದಲ್ಲಿ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
