ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 226 ರನ್ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್ ಮತ್ತು ನಮನ್ ಧೀರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಮಧ್ಯಮ ಕ್ರಮಾಂಕದಲ್ಲಿ ನಾಟಕೀಯ ಕುಸಿತ ಕಂಡರೂ, ನಮನ್ ಧೀರ್ ಅವರ ಅಜೇಯ ಆಟ ತಂಡವನ್ನು ಗೆಲುವಿನ ದಡ ಸೇರಿಸಿತು.
ಕ್ರೈಸ್ಟ್ಚರ್ಚ್: ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್ ಹಾಗೂ ಕೊನೆಯಲ್ಲಿ ನಮನ್ ಧೀರ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.
ಟೀಂ ಇಂಡಿಯಾ ಸ್ಪೋಟಕ ಆರಂಭ
ಇಲ್ಲಿನ ಹೇಗ್ಲೆ ಓವಲ್ ಮೈದಾನದಲ್ಲಿ ಗೆಲ್ಲಲು 226 ರನ್ಗಳ ಕಠಿಣ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಭಾರತ 3.3 ಓವರ್ನಲ್ಲೇ ಅರ್ಧಶತಕದ ಗಡಿ ದಾಟಿತು. ಪವರ್ಪ್ಲೇನಲ್ಲೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಈ ಜೋಡಿ 5.5 ಓವರ್ನಲ್ಲಿ 93 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟಿತು. ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 29 ರನ್ ಸಿಡಿಸಿ ಬ್ರೇಸ್ವೆಲ್ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಮಿಂಚಿನ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಸ್ಪೋಟಕ 67 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು.
ನಾಟಕೀಯ ಕುಸಿತ:
ಸಂಜು ಬ್ಯಾಟಿಂಗ್ ಮಾಡುವವರೆಗೂ ತಂಡ ಸುಲಭವಾಗಿ ಗುರಿ ತಲುಪಲಿದೆ ಎಂದುಕೊಂಡಿದ್ದರು. ಆದರೆ ಸಂಜು ವಿಕೆಟ್ ಪತನವಾಗುತ್ತಿದ್ದಂತೆಯೇ ಟೀಂ ಇಂಡಿಯಾ ನಾಟಕೀಯ ಕುಸಿತ ಕಂಡಿತು. ಕೇವಲ 7 ರನ್ ಅಂತರದಲ್ಲಿ ಭಾರತ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. ಮೂರನೇ ಕ್ರಮಾಂಕಕ್ಕೆ ಬಡ್ತಿಪಡೆದ ತಿಲಕ್ ವರ್ಮಾ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಇನ್ಫಾರ್ಮ್ ಬ್ಯಾಟರ್ ಇಶಾನ್ ಕಿಶನ್ ಬ್ಯಾಟಿಂಗ್ ಕೇವಲ 1 ರನ್ಗೆ ಸೀಮಿತವಾಯಿತು.
ಇದಾದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ನಮನ್ ಧೀರ್ ಜೋಡಿ 43 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಶ್ರೇಯಸ್ ಅಯ್ಯರ್ 28 ಎಸೆತಗಳಲ್ಲಿ 42 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರೆ, ನಮನ್ ಧೀರ್ ಕೇವಲ 15 ಎಸೆತಗಳಲ್ಲಿ 5 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ ಅಜೇಯ 42 ರನ್ ಸಿಡಿಸಿ ಇನ್ನೂ ಎರಡು ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಲಿಳಿದ ಆತಿಥೇಯ ನ್ಯೂಜಿಲೆಂಡ್ ತಂಡವು ಎಚ್ಚರಿಕೆಯ ಆರಂಭ ಪಡೆಯಿತು. ಟಿಮ್ ಸೀಫರ್ಟ್ 17 ಎಸೆತಗಳಲ್ಲಿ 24 ರನ್ ಗಳಿಸಿ ಮಯಾಂಕ್ ಯಾದವ್ಗೆ ವಿಕೆಟ್ ಒಪ್ಪಿಸಿದರು. ಆದರೆ ಮತ್ತೋರ್ವ ಆರಂಭಿಕ ಬ್ಯಾಟರ್ ಫಿನ್ ಅಲೆನ್ 24ವ ಎಸೆತಗಳಲ್ಲಿ 45 ರನ್ ಚಚ್ಚಿದರು. ಇನ್ನು ಡೇರಲ್ ಮಿಚೆಲ್ 28 ರನ್ ಗಳಿಸಿ ಅರ್ಶದೀಪ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್ ಫಿಲಿಫ್ಸ್ ಕೇವಲ 40 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 82 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಕೊನೆಯಲ್ಲಿ ಬೆವೊನ್ ಜೇಕೊಬ್ಸ್ 16 ಎಸೆತಗಳಲ್ಲಿ 31 ರನ್ ಸಿಡಿಸಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.
ಭಾರತ ಪರ ಅರ್ಶದೀಪ್ ಸಿಂಗ್, ಮಯಾಂಕ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಹಂಚಿಕೊಂಡರು. ಆದರೆ ಬರೋಬ್ಬರಿ 4 ವರ್ಷಗಳ ಬಳಿಕ ಟೀಂ ಇಂಡಿಯಾ ಪರ ಮೊದಲ ಸಲ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಯಾವುದೇ ವಿಕೆಟ್ ಕಬಳಿಸಲು ಯಶಸ್ವಿಯಾಗಲಿಲ್ಲ. ಭುವಿ 4 ಓವರ್ನಲ್ಲಿ 49 ರನ್ ಚಚ್ಚಿಸಿಕೊಂಡರು.


