ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಸಂಜು ಸ್ಯಾಮ್ಸನ್ ಅವರ ಟೀಂ ಇಂಡಿಯಾ ಸ್ಥಾನಕ್ಕೆ ಇದೀಗ ಕುತ್ತು ಎದುರಾಗಿದೆ. ಭರ್ಜರಿ ಫಾರ್ಮ್‌ನಲ್ಲಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಸುವಂತೆ ಆಗ್ರಹ ಕೇಳಿಬರುತ್ತಿದೆ.

Sanju Samson vs Vaibhav Sooryavanshi: 2nd T20I Selection: ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಭಾರತ ಟಿ20 ಕ್ರಿಕೆಟ್ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಸಂಜು ಸ್ಯಾಮ್ಸನ್ ಮಹತ್ವದ ಪಾತ್ರ ವಹಿಸಿದ್ದರು. ಇನ್ನು ಇದಾದ ಬಳಿಕ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಬಳಿಕವಂತೂ ಸಂಜು ಸ್ಯಾಮ್ಸನ್ ಅವರ ಮೇಲೆ ಒತ್ತಡ ಹೆಚ್ಚಲಾರಂಭಿಸಿದೆ.

ಐರ್ಲೆಂಡ್ ಎದುರಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ವೈಫಲ್ಯ ಅನುಭವಿಸಿದ್ದರಿಂದ, ಇಂಗ್ಲೆಂಡ್ ಎದುರಿನ ಟಿ20 ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ ನೀಡಲಾಗಿತ್ತು. ಇದಾದ ಬಳಿಕ ಜಿಂಬಾಬ್ವೆ ಎದುರಿನ ಸರಣಿಯಲ್ಲಿ ವೈಭವ್ ಸೂರ್ಯವಂಶಿ ವಿಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ಅನಾವರಣ ಮಾಡಿದ್ದರು. ಇದೀಗ ವೆಸ್ಟ್ ಇಂಡೀಸ್ ಎದುರಿನ ಸರಣಿಯಲ್ಲಿ ಇದಕ್ಕೂ ಮೊದಲು ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ವಿಫಲವಾಗಿದ್ದಾರೆ. ಹೀಗಾಗಿ ವೆಸ್ಟ್ ಇಂಡೀಸ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಸಂಜು ಬದಲಿಗೆ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕು ಎನ್ನುವ ಆಗ್ರಹ ಜೋರಾಗಿದೆ.

ಸತತ ನಾಲ್ಕು ಪಂದ್ಯಗಳಲ್ಲಿ ಸಂಜು ಫೇಲ್:

ಸಂಜು ಸ್ಯಾಮ್ಸನ್, ಆಫ್ಘಾನಿಸ್ತಾನ ಎದುರಿನ ಕೊನೆಯ ಟಿ20 ಪಂದ್ಯದಲ್ಲಿ 35 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದ್ದರು. ಇದಾದ ಬಳಿಕ ಸಂಜು ಸ್ಯಾಮ್ಸನ್ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಾ ಬಂದಿದ್ದಾರೆ. ಜಪಾನ್ ಎದುರಿನ ಐತಿಹಾಸಿಕ ಏಕೈಕ ಟಿ20 ಪಂದ್ಯದಲ್ಲಿ ಸಂಜು 7 ಎಸೆತಗಳಲ್ಲಿ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಶ್ರೀಲಂಕಾ ಎದುರಿನ ಏಷ್ಯನ್ ಗೇಮ್ಸ್‌ ಸೆಮಿಫೈನಲ್‌ನಲ್ಲಿ ಸಂಜು ಏಳು ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದಾದ ಬಳಿಕ ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಎರಡು ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಇದೀಗ ವೆಸ್ಟ್ ಇಂಡೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಹೀಗೆ 4 ಪಂದ್ಯಗಳಲ್ಲಿ ಕೇವಲ 7.25ರ ಬ್ಯಾಟಿಂಗ್ ಸರಾಸರಿಯಲ್ಲಿ ಸಂಜು 29 ರನ್ ಬಾರಿಸಿ ನಿರಾಸೆ ಮೂಡಿಸಿದ್ದಾರೆ.

ಭರ್ಜರಿ ಫಾರ್ಮ್‌ನಲ್ಲಿದ್ದಾರೆ ವೈಭವ್ ಸೂರ್ಯವಂಶಿ:

ಮತ್ತೊಂದೆಡೆ 15 ವರ್ಷದ ವೈಭವ್ ಸೂರ್ಯವಂಶಿ, ಇತ್ತೀಚಿಗಿನ ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ಗೆ ಹೋಲಿಸಿದರೆ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಕಳೆದ ನಾಲ್ಕು ಪಂದ್ಯಗಳಿಂದ ವೈಭವ್ ಸೂರ್ಯವಂಶಿ 38.5ರ ಬ್ಯಾಟಿಂಗ್ ಸರಾಸರಿಯಲ್ಲಿ ಬರೋಬ್ಬರಿ 154 ರನ್ ಸಿಡಿಸಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಇದೀಗ ಟೀಮ್‌ ಮ್ಯಾನೇಜ್‌ಮೆಂಟ್ ಮೇಲಿದೆ.

ರಾಂಚಿಯಲ್ಲಿ ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚಾನ್ಸ್?

ಇದೀಗ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಇದೀಗ ಎರಡನೇ ಟಿ20 ಪಂದ್ಯವು ಅಕ್ಟೋಬರ್ 09ರಂದು ರಾಂಚಿಯಲ್ಲಿ ನಡೆಯಲಿದೆ. ಸಂಜುಗೆ ಹೋಲಿಸಿದರೆ, ವೈಭವ್ ಸೂರ್ಯವಂಶಿ ಒಳ್ಳೆಯ ಫಾರ್ಮ್‌ನಲ್ಲಿದ್ದು, ಎರಡನೇ ಟಿ20 ಪಂದ್ಯದಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್ ವೈಭವ್ ಸೂರ್ಯವಂಶಿಗೆ ಮಣೆ ಹಾಕುತ್ತಾ ಅಥವಾ ಗೆಲುವಿನ ಕಾಂಬಿನೇಷನ್ ಮುಂದುವರೆಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.