ಆಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶ್ರೇಯಸ್ ಅಯ್ಯರ್ ನಾಯಕರಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡಕ್ಕೆ ಮರಳಿದ್ದು, 15 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಲಾಗಿದೆ. ಆದರೆ, ಫಿಟ್ನೆಸ್ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ತಂಡದಿಂದ ಹೊರಗುಳಿದಿದ್ದಾರೆ.

ಬೆಂಗಳೂರು: ಭಾರತದಲ್ಲಿಯೇ ನಡೆಯಲಿರುವ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಶ್ರೇಯಸ್ ಅಯ್ಯರ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇದೇ ಸೆಪ್ಟೆಂಬರ್ 13ರಿಂದ ಆರಂಭವಾಗಲಿರುವ ಟಿ20 ಸರಣಿಯು ಏಷ್ಯನ್‌ ಗೇಮ್ಸ್‌ಗೂ ಮುನ್ನ ಮಹತ್ವದ ಸರಣಿ ಇದಾಗಿದೆ.

ಸ್ಟಾರ್ ಕ್ರಿಕೆಟಿಗರ ಕಮ್‌ಬ್ಯಾಕ್:

ಆಫ್ಘಾನಿಸ್ತಾನ ಎದುರಿನ ಟಿ20 ಸರಣಿಯಲ್ಲಿ ಹಲವು ಸ್ಟಾರ್ ಕ್ರಿಕೆಟಿಗರು ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪೈಕಿ ಜಿಂಬಾಬ್ವೆ ಎದುರಿನ ಟಿ20 ಸರಣಿಯಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಕೊನೆಗೂ ಮತ್ತೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದಂತೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಬೌಲಿಂಗ್ ಆಲ್ರೌಂಡರ್‌ಗಳಾದ ವಾಷಿಂಗ್ಟನ್ ಸುಂದರ್ ಹಾಗೂ ಹರ್ಷಿತ್ ರಾಣಾ ಕೂಡಾ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಿಂಬಾಬ್ವೆ ಎದುರಿನ ಸರಣಿಗೂ ಮುನ್ನ ಈ ಆಟಗಾರರು ಗಾಯಕ್ಕೆ ಒಳಗಾಗಿದ್ದರು.

ವೈಭವ್ ಸೂರ್ಯವಂಶಿಗೂ ಸಿಕ್ಕಿದೆ ಸ್ಥಾನ:

ಇನ್ನು ಬಿಸಿಸಿಐ ಆಯ್ಕೆ ಸಮಿತಿಯು 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸ್ಥಾನ ನೀಡಿದ್ದಾರೆ. ಇದರ ಜತೆಗೆ ಓಪನ್ನರ್‌ಗಳ ರೂಪದಲ್ಲಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಕೂಡಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಆಫ್ಘಾನಿಸ್ತಾನ ಎದುರಿನ ಸರಣಿಯಲ್ಲಿ ಮೂವರು ಆರಂಭಿಕ ಬ್ಯಾಟರ್‌ಗಳ ಸ್ಥಾನ ಪಡೆದಿದ್ದಾರೆ.

ಆಫ್ಘಾನಿಸ್ತಾನ ಎದುರಿನ ಸರಣಿಗೆ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಕೂಡಾ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಹಾಗೂ ನಿತೀಶ್ ಕುಮಾರ್ ರೆಡ್ಡಿ, ಶ್ರೀಲಂಕಾ ಎದುರಿನ ಟಿ20 ಸರಣಿಗೂ ಮುನ್ನ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದೀಗ ಈ ಇಬ್ಬರು ಕ್ರಿಕೆಟಿಗರು ಸಂಪೂರ್ಣ ಫಿಟ್ ಆಗಿದ್ದು, ಆಫ್ಘಾನಿಸ್ತಾನ ಎದುರು ಉತ್ತಮ ಪ್ರದರ್ಶನ ತೋರಲು ತುದಿಗಾಲಿನಲ್ಲಿ ನಿಂತಿದ್ದಾರೆ.

ಮತ್ತೆ ಹಾರ್ದಿಕ್ ಪಾಂಡ್ಯಗಿಲ್ಲ ಸ್ಥಾನ:

ಭಾರತದ ನಂ.1 ಟಿ20 ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, ಮತ್ತೊಮ್ಮೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ, ಆಫ್ಘಾನ್ ಎದುರಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್ 13ರಿಂದ ಆರಂಭ:

ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯು ಇದೇ ಸೆಪ್ಟೆಂಬರ್ 13ರಿಂದ ಆರಂಭವಾಗಲಿದೆ. ಮೂರೂ ಟಿ20 ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯವು ಸೆಪ್ಟೆಂಬರ್ 15 ಹಾಗೂ ಮೂರನೇ ಟಿ20 ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಅಂದಹಾಗೆ ಈ ಪಂದ್ಯಗಳು ಭಾರತದಲ್ಲೇ ನಡೆದರೂ, ಸರಣಿಯ ಆತಿಥ್ಯವನ್ನು ಆಫ್ಘಾನಿಸ್ತಾನ ವಹಿಸಿಕೊಂಡಿದೆ.

ಆಫ್ಘಾನಿಸ್ತಾನ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ:

ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ(ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ.