Asianet Suvarna News Asianet Suvarna News

T20 World Cup 2024: ಇಂಗ್ಲೆಂಡ್ ಬಗ್ಗುಬಡಿದು ದಶಕದ ಬಳಿಕ ಫೈನಲ್ ಗೆ ಲಗ್ಗೆಯಿಟ್ಟ ಭಾರತ

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಒಂದು ದಶಕದ ಬಳಿಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಭಾರತ 68 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ

T20 World Cup 2024 India Rout England To Enter Final After 10 Years kvn
Author
First Published Jun 28, 2024, 1:38 AM IST

ಗಯಾನ: ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ದೊಡ್ಡ ಅಂತರದಲ್ಲಿ ಮಣಿಸಿ ಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸಮಯೋಚಿತ ಬ್ಯಾಟಿಂಗ್ ಹಾಗೂ ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ಚಾಣಾಕ್ಷ ಸ್ಪಿನ್ ಬೌಲಿಂಗ್ ನೆರವಿನಿಂದ ಇಂಗ್ಲೆಂಡ್ ಎದುರು ಭಾರತ 68 ರನ್ ಅಂತರದ ಗೆಲುವು ದಾಖಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಗೆಲುವಿನೊಂದಿಗೆ 2022ರ ಟಿ20 ವಿಶ್ವಕಪ್ ಸೆಮಿಫೈನಲ್‌ನ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ. ಗೆಲ್ಲಲು 172 ರನ್ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 103 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಇದೀಗ ಭಾರತ ತಂಡವು ಜೂನ್ 29ರಂದು ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ಎದುರು ಕಾದಾಡಲಿದೆ.

ಇಲ್ಲಿನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗೆಲ್ಲಲು ಸವಾಲಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಹಾಗೂ ಜಸ್ಪ್ರೀತ್ ಬುಮ್ರಾ ಶಾಕ್ ನೀಡಿದರು. ಕೇವಲ 15 ಎಸೆತಗಳಲ್ಲಿ 23 ರನ್ ಸಿಡಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದ ನಾಯಕ ಜೋಸ್ ಬಟ್ಲರ್ ಅವರನ್ನು ಬಲಿ ಪಡೆಯುವಲ್ಲಿ ಅಕ್ಷರ್ ಯಶಸ್ವಿಯಾದರು. ಇದಾಗುತ್ತಿದ್ದಂತೆಯೇ ಇಂಗ್ಲೆಂಡ್ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

ಫಿಲ್ ಸಾಲ್ಟ್ 5 ರನ್ ಗಳಿಸಿ ಬುಮ್ರಾಗೆ ವಿಕೆಟ್ ಒಪ್ಪಿಸಿದರೆ, ಮೋಯಿನ್ ಅಲಿ(8) ಹಾಗೂ ಜಾನಿ ಬೇರ್‌ಸ್ಟೋವ್ ಶೂನ್ಯ ಸುತ್ತಿ ಪೆವಿಲಿಯನ್ ಹಾದಿ ಸೇರಿದರು. ಅಕ್ಷರ್ ಪಟೇಲ್ ತಾವೆಸೆದ ಮೊದಲ ಮೂರು ಓವರ್‌ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿದ್ದು ವಿಶೇಷ ಎನಿಸಿತು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್(25), ಲಿಯಾಮ್ ಲಿವಿಂಗ್‌ಸ್ಟೋನ್(11) ಹಾಗೂ ಜೋಫ್ರಾ ಆರ್ಚರ್(21) ಕೊಂಚ ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ 16.4 ಓವರ್‌ಗಳಲ್ಲಿ 103 ರನ್ ಗಳಿಸಿ ಸರ್ವಪತನ ಕಂಡಿತು. 

T20 World Cup 2024: ಮತ್ತೆ ಗುಡುಗಿದ ರೋಹಿತ್ ಶರ್ಮಾ; ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಭಾರತ

ದಶಕದ ಬಳಿಕ ಫೈನಲ್‌ಗೆ ಲಗ್ಗೆ: ಹೌದು ಟೀಂ ಇಂಡಿಯಾ 2014ರಲ್ಲಿ ಕೊನೆಯ ಬಾರಿಗೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಶ್ರೀಲಂಕಾ ಎದುರು ಮುಗ್ಗರಿಸುವ ಮೂಲಕ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇದೀಗ ಬರೋಬ್ಬರಿ ಒಂದು ದಶಕದ ಬಳಿಕ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಟೀಂ ಇಂಡಿಯಾ ಮಾರಕ ದಾಳಿ: ಟೂರ್ನಿಯುದ್ದಕ್ಕೂ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುತ್ತಾ ಬಂದಿರುವ ಟೀಂ ಇಂಡಿಯಾ ಬೌಲರ್‌ಗಳು ಇದೀಗ ನಾಕೌಟ್ ಪಂದ್ಯದಲ್ಲೂ ಮೊನಚಾದ ದಾಳಿ ನಡೆಸುವಲ್ಲಿ ಯಶಸ್ವಿಯಾಗಿದೆ. ಭಾರತ ಪರ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ತಲಾ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ 2 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಇನ್ನು ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 40 ರನ್ ಗಳಿಸುವಷ್ಟರಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ವಿಕೆಟ್ ಕಳೆದುಕೊಂಡಿತು. ಆದರೆ ಮೂರನೇ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಮೂರನೇ ವಿಕೆಟ್‌ಗೆ 50 ಎಸೆತಗಳನ್ನು ಎದುರಿಸಿ 73 ರನ್‌ಗಳ ಜತೆಯಾಟವಾಡಿತು. ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೇವಲ 39 ಎಸತೆಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 57 ರನ್ ಬಾರಿಸಿ ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ 36 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ 13 ಎಸೆತಗಳಲ್ಲಿ 23 ರನ್ ಸಿಡಿಸಿದರೆ, ರವೀಂದ್ರ ಜಡೇಜಾ ಅಜೇಯ 17 ಹಾಗೂ ಅಕ್ಷರ್ ಪಟೇಲ್ 10 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು

Latest Videos
Follow Us:
Download App:
  • android
  • ios