T20 World Cup ಇತಿಹಾಸದಲ್ಲಿ ವಿಶ್ವದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ
ಚುಟುಕು ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸರದಾರನಾಗಿ ಹೊರಹೊಮ್ಮಿದ ಕಿಂಗ್ ಕೊಹ್ಲಿ
ಬಾಂಗ್ಲಾದೇಶ ಎದುರು ಭರ್ಜರಿ ಆರಂಭ ಪಡೆದ ಟೀಂ ಇಂಡಿಯಾ
ಅಡಿಲೇಡ್(ನ.02): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಇದೀಗ ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ಅರಂಭಿಕ ಆಘಾತದ ಹೊರತಾಗಿಯೂ ಉತ್ತಮ ಆರಂಭ ಪಡೆದಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯ ರನ್ ಮಶೀನ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಹೌದು, ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 16 ರನ್ ಬಾರಿಸುತ್ತಿದ್ದಂತೆಯೇ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನ್ನುವ ವಿಶ್ವದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದರು. ಈ ಮೊದಲು ಶ್ರೀಲಂಕಾದ ಮಾಜಿ ನಾಯಕ ಮಹೆಲಾ ಜಯವರ್ಧನೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ 1,016 ರನ್ ಬಾರಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರು. ಆದರೆ ಇದೀಗ ಜಯವರ್ಧನೆ ದಾಖಲೆ ಹಿಂದಿಕ್ಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿ ವಿರಾಜಮಾನರಾಗಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 05 ಬ್ಯಾಟರ್‌ಗಳ ವಿವರ
1017* ವಿರಾಟ್ ಕೊಹ್ಲಿ
1016 -ಮಹೆಲಾ ಜಯವರ್ಧನೆ
965 - ಕ್ರಿಸ್ ಗೇಲ್
921 - ರೋಹಿತ್ ಶರ್ಮಾ
897 - ತಿಲಕರತ್ನೆ ದಿಲ್ಷ್ಯಾನ್
ಟೀಂ ಇಂಡಿಯಾ ಭರ್ಜರಿ ಆರಂಭ:
ಭಾರತಕ್ಕೆ ಸೆಮೀಸ್ ಪ್ರವೇಶಿಸುವ ದೃಷ್ಠಿಯಿಂದ ಮಹತ್ವದ ಪಂದ್ಯ ಎನಿಸಿಕೊಂಡಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಆರಂಭ ಪಡೆದಿದೆ. ಆರಂಭದಲ್ಲೇ ರೋಹಿತ್ ಶರ್ಮಾ ಕೇವಲ 2 ರನ್ ಬಾರಿಸಿ ವಿಕೆಟ್ ಒಪ್ಪಿಸಿದರಾದರೂ, ಇದಾದ ಬಳಿಕ ಎರಡನೇ ವಿಕೆಟ್‌ಗೆ ಕೆ ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 67 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
T20 World Cup: ಟೀಂ ಇಂಡಿಯಾ ಎದುರು ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ
ಇನ್ನು ಮೊದಲ 3 ಪಂದ್ಯಗಳಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದ ಕೆ ಎಲ್ ರಾಹುಲ್, ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾದರು. ಕೆ ಎಲ್ ರಾಹುಲ್ ಕೇವಲ 32 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದೀಗ 11 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು 92 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ವಿರಾಟ್ ಕೊಹ್ಲಿ 26 ಹಾಗೂ ಸೂರ್ಯಕುಮಾರ್ ಯಾದವ್ 11 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.