ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ25 ಮಿಲಿಯನ್ ಪಾಲೋವರ್ಸ್ ಹೊಂದಿದ ಅತಿಕಿರಿಯ ಕ್ರಿಕೆಟಿಗಮುಂಬರುವ 16ನೇ ಆವೃತ್ತಿಯ ಐಪಿಎಲ್‌ಗೆ ಸಜ್ಜಾಗುತ್ತಿರುವ ಹಾರ್ದಿಕ್ ಪಾಂಡ್ಯ
ನವದೆಹಲಿ(ಮಾ.07): ಟೀಂ ಇಂಡಿಯಾ ತಾರಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಕಳೆದ ವರ್ಷ ಅದ್ಭುತ ಲಯದಲ್ಲಿದ್ದರು. ಇದೀಗ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಸಜ್ಜಾಗುತ್ತಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಭಾರತ ಟಿ20 ತಂಡದ ಪೂರ್ಣಾವಧಿ ನಾಯಕತ್ವದ ಹೊಸ್ತಿಲಲ್ಲಿರುವ ಹಾರ್ದಿಕ್ ಪಾಂಡ್ಯ, ಸೋಮವಾರ(ಮಾ.06)ವಷ್ಟೇ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ, 25 ಮಿಲಿಯನ್(ಎರಡೂವರೆ ಕೋಟಿ) ಫಾಲೋವರ್ಸ್ ಹೊಂದಿದ ಅತಿಕಿರಿಯ ಕ್ರಿಕೆಟಿಗ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ತುಂಬಾ ಅಚ್ಚರಿಯ ವಿಷಯವೆಂದರೇ, ಹಾರ್ದಿಕ್ ಪಾಂಡ್ಯ, ಜಾಗತಿಕ ಕ್ರೀಡಾತಾರೆಯರಾದ ರಾಫೆಲ್ ನಡಾಲ್, ರೋಜರ್ ಫೆಡರರ್, ಎರ್ಲಿಂಗ್ ಹಾಲಾಂಡ್ ಅವರಷ್ಟೇ ಫಾಲೋವರ್ಸ್ ಹೊಂದಿದ್ದಾರೆ.
ಹಾರ್ದಿಕ್ ಪಾಂಡ್ಯ, ಸದ್ಯ ಇನ್‌ಸ್ಟಾಗ್ರಾಂನಲ್ಲಿ 25.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇದರ ಬೆನ್ನಲ್ಲೇ ಇನ್‌ಸ್ಟಾಗ್ರಾಂನಲ್ಲೇ ತಮ್ಮ ಫಾಲೋವರ್ಸ್‌ಗೆ ವಿಡಿಯೋ ಸಂದೇಶದ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. " ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಪ್ರತಿಯೊಬ್ಬ ಅಭಿಮಾನಿಯೂ ನನ್ನ ಪಾಲಿಗೆ ತುಂಬಾ ವಿಶೇಷ. ಸಾಕಷ್ಟು ವರ್ಷಗಳಿಂದ ನನ್ನ ಮೇಲೆ ಪ್ರೀತಿ-ವಿಶ್ವಾಸವನ್ನಿಟ್ಟಿರುವ ನಿಮ್ಮೆಲ್ಲರಿಗೂ ನಾನು ಚಿರಋಣಿ" ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
2016ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ, ತಮ್ಮ ಅದ್ಭುತ ಆಲ್ರೌಂಡ್ ಆಟದ ಮೂಲಕ ದೇಶದ ಮನೆಮಾತಾಗಿದ್ದಾರೆ. 29 ವರ್ಷದ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಫಿಟ್ನೆಸ್ ಹಾಗೂ ಇನ್ನಿತರ ಕಾರಣಗಳಿಂದಾಗಿ ಹಾರ್ದಿಕ್ ಪಾಂಡ್ಯ ಸದ್ಯ ಟೆಸ್ಟ್ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಹಾರ್ದಿಕ್ ಪಾಂಡ್ಯ 2018ರಲ್ಲಿ ಕೊನೆಯ ಬಾರಿಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇನ್ನು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಹಾರ್ದಿಕ್ ಪಾಂಡ್ಯ, ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ.
WPL 2023 ಪುರುಷರ ತಂಡದ ಹಾದಿ ಹಿಡಿಯಿತಾ ಆರ್‌ಸಿಬಿ ವುಮೆನ್ಸ್? ಮತ್ತೆ ಮುಗ್ಗರಿಸಿದ ಬೆಂಗಳೂರು!
ಫಿಟ್ನೆಸ್ ಸಮಸ್ಯೆಯಿಂದಾಗಿ ಒಂದು ವರ್ಷಗಳ ಕಾಲ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿ, 2022ರ ಜೂನ್‌ನಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದರು. ಸ್ಪೋಟಕ ಬ್ಯಾಟರ್ ಆಗಿ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, ಆಸ್ಟ್ರೇಲಿಯಾದಲ್ಲಿ ಜರುಗಿದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ತವರಿನಲ್ಲಿ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ದ ನಡೆದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಹಾರ್ದಿಕ್ ಪಾಂಡ್ಯ ಭವಿಷ್ಯದ ಟಿ20 ನಾಯಕ ಎಂದೇ ಬಿಂಬಿಸಲಾಗುತ್ತಿದೆ.
ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ, ಮಾರ್ಚ್ 17ರಿಂದ ತವರಿನಲ್ಲಿ ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯಲಿದ್ದಾರೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಇನ್ನು ಕಳೆದ ವರ್ಷ ಚೊಚ್ಚಲ ಬಾರಿಗೆ ನಾಯಕನಾಗಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಮೊದಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವರ್ಷ ಹಾರ್ದಿಕ್ ಪಾಂಡ್ಯ ಕೇವಲ ನಾಯಕನಾಗಿ ಮಾತ್ರವಲ್ಲದೇ ಆಟಗಾರನಾಗಿಯೂ ಸೈ ಎನಿಸಿಕೊಂಡಿದ್ದರು. ಬ್ಯಾಟಿಂಗ್‌ನಲ್ಲಿ 4 ಅರ್ಧಶತಕ ಸಹಿತ 487 ರನ್ ಬಾರಿಸಿದರೆ, ಬೌಲಿಂಗ್‌ನಲ್ಲಿ 8 ವಿಕೆಟ್ ಕಬಳಿಸಿ ಮಿಂಚಿದ್ದರು.
