ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು, ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕರಾಗಿದ್ದು, ತಂಡದಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ದೃಷ್ಟಿಯಿಂದ ಭಾರತಕ್ಕೆ ನಿರ್ಣಾಯಕವಾಗಿದೆ.

ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಗೆ ಬಿಸಿಸಿಐ (BCCI) ಬುಧವಾರ ಭಾರತ ತಂಡವನ್ನು ಘೋಷಿಸಿದೆ. ಯುವ ಬ್ಯಾಟರ್ ಶುಭಮನ್ ಗಿಲ್ ಅವರಿಗೆ ತಂಡದ ಸಾರಥ್ಯ ವಹಿಸಲಾಗಿದ್ದು, ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಗಿಲ್ ಸಾರಥ್ಯದಲ್ಲಿ ಯುವ ಪಡೆ

ತಂಡದಲ್ಲಿ ರಿಷಭ್ ಪಂತ್ ಮತ್ತು ಧ್ರುವ್ ಜುರೆಲ್ ವಿಕೆಟ್ ಕೀಪರ್‌ಗಳಾಗಿ ಸ್ಥಾನ ಪಡೆದಿದ್ದಾರೆ. ದೇವದತ್ ಪಡಿಕ್ಕಲ್ ಮತ್ತು ಪ್ರಸಿದ್ಧ ಕೃಷ್ಣ ಅವರನ್ನೊಳಗೊಂಡ ಕನ್ನಡಿಗರ ದಂಡು ತಂಡದಲ್ಲಿದೆ. ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಯುವ ಆಟಗಾರ ಸಾಯಿ ಸುದರ್ಶನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆಯಾದರೂ, ಇವರ ಆಟವು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (COE) ನೀಡುವ ಫಿಟ್‌ನೆಸ್ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿದೆ. ಇನ್ನು ಆಲ್-ರೌಂಡರ್ ವಾಷಿಂಗ್ಟನ್ ಸುಂದರ್ ವೈಯಕ್ತಿಕ ಕಾರಣಗಳಿಂದಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.

ಭಾರತ ಟೆಸ್ಟ್ ತಂಡ ಹೀಗಿದೆ

ಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸಾರಂಶ್ ಜೈನ್.

ಸರಣಿಯ ವೇಳಾಪಟ್ಟಿ

ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಗಸ್ಟ್ 7 ರಿಂದ ಕೊಲಂಬೊದಲ್ಲಿ ನಾಲ್ಕು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೊದಲ ಟೆಸ್ಟ್ ಆಗಸ್ಟ್ 15 ರಿಂದ 19 (ಗಾಲೆ ಇಂಟರ್ನ್ಯಾಷನಲ್ ಸ್ಟೇಡಿಯಂ) ನಡೆದ್ರೆ, ಎರಡನೇ ಟೆಸ್ಟ್ ಆಗಸ್ಟ್ 23 ರಿಂದ 27 (ಎಸ್.ಎಸ್.ಸಿ ಮೈದಾನ, ಕೊಲಂಬೊ) ರಿಂದ ಆರಂಭವಾಗಲಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ದೃಷ್ಟಿಯಿಂದ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಯುವ ನಾಯಕ ಗಿಲ್ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.