ದುಬೈ(ಜೂ.10): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ನೂತನವಾಗಿ ಪ್ರಕಟಿಸಿದ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಜಂಟಿ 6ನೇ ಸ್ಥಾನ ಹಂಚಿಕೊಂಡಿದ್ದಾರೆ.

ಇನ್ನು ಲಾರ್ಡ್ಸ್‌ ಮೈದಾನದಲ್ಲಿ ನಡೆದ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ ಆಕರ್ಷಕ ದ್ವಿಶತಕ ಬಾರಿಸಿದ್ದ ಡೆವೊನ್‌ ಕಾನ್‌ವೇ ಟೆಸ್ಟ್‌ಗೆ ಶ್ರೇಯಾಂಕಕ್ಕೆ ಸೇರ್ಪಡೆಗೊಂಡಿದ್ದು, 77ನೇ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾನ್‌ವೇ 347 ಎಸೆತಗಳಲ್ಲಿ 200 ರನ್‌ ಬಾರಿಸಿದ್ದರು. ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸ್‌ ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ಜೂನ್‌ 18ರಿಂದ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿರುವ ವಿರಾಟ್ ಕೊಹ್ಲಿ ಪ್ರಸ್ತುತ 814 ರೇಟಿಂಗ್ ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ. ಇನ್ನು ಇಂಗ್ಲೆಂಡ್ ಟೆಸ್ಟ್‌ ತಂಡದ ನಾಯಕ ಜೋ ರೂಟ್ 836 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಹಾಗೂ ರೋಹಿತ್ ಶರ್ಮಾ ತಲಾ 747 ರೇಟಿಂಗ್ ಅಂಕಗಳನ್ನು ಹೊಂದಿದ್ದು ಜಂಟಿ 6ನೇ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್‌ ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾ ಆಟಗಾರರಿಗೆ 20 ದಿನ ರಜೆ

ಇನ್ನು ಟೆಸ್ಟ್‌ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ 850 ರೇಟಿಂಗ್ ಅಂಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್‌ 908 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ

ಆಲ್ರೌಂಡರ್‌ಗಳ ವಿಭಾಗದಲ್ಲಿ ಜೇಸನ್ ಹೋಲ್ಡರ್‌ ನಂ.1 ಸ್ಥಾನ ಉಳಿಸಿಕೊಂಡಿದ್ದು, ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಎರಡನೇ ಸ್ಥಾನಕ್ಕೇರಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಅಶ್ವಿನ್‌ 4ನೇ ಸ್ಥಾನ ಪಡೆದಿದ್ದಾರೆ.