* ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಕುರಿತಂತೆ ಸೌರವ್-ಕೊಹ್ಲಿ ಮಾತುಕತೆ* 2013ರ ಬಳಿಕ ಟೀಂ ಇಂಡಿಯಾ ಐಸಿಸಿ ಟ್ರೋಫಿಯನ್ನೇ ಜಯಿಸಿಲ್ಲ* ತಂಡದ ಕಾಂಬಿನೇಷನ್‌ ಕುರಿತಂತೆ ದಾದಾ-ಕೊಹ್ಲಿ ಚರ್ಚೆ

ನವದೆಹಲಿ(ಆ.21): ಐಸಿಸಿ ಟಿ20 ವಿಶ್ವಕಪ್‌ಗೆ ಇನ್ನೆರಡು ತಿಂಗಳು ಮಾತ್ರ ಬಾಕಿ ಇದ್ದು, ತಂಡದ ಸಿದ್ಧತೆ, ಆಟಗಾರರ ಆಯ್ಕೆ ಸಂಬಂಧ, ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ 2ನೇ ಟೆಸ್ಟ್‌ ವೇಳೆ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಜೊತೆ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಕಾರ‍್ಯದರ್ಶಿ ಜಯ್‌ ಶಾ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಅನೌಪಚಾರಿಕ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

2013ರ ಬಳಿಕ ಭಾರತ ಐಸಿಸಿ ಟ್ರೋಫಿ ಗೆದ್ದಿಲ್ಲ. ಹೀಗಾಗಿ ಕೊಹ್ಲಿ ಮೇಲೆ ಹೆಚ್ಚಿನ ಒತ್ತಡವಿದೆ. ಅಲ್ಲದೇ ಈ ವರ್ಷ ತಂಡ ಹೆಚ್ಚಾಗಿ ಟಿ20 ಪಂದ್ಯಗಳನ್ನು ಆಡಿಲ್ಲ. ಐಪಿಎಲ್‌ ಪ್ರದರ್ಶನವನ್ನು ಪರಿಗಣಿಸಬೇಕೆ?, ಆಟಗಾರರ ಕೆಲಸದ ಒತ್ತಡವನ್ನು ನಿಭಾಯಿಸುವುದು ಹೇಗೆ?, ಯಾವ ಆಟಗಾರರನ್ನು ಆಯ್ಕೆ ಮಾಡಿದರೆ ಸೂಕ್ತ? ಎನ್ನುವ ಕೆಲ ಪ್ರಮುಖ ಪ್ರಶ್ನೆಗಳನ್ನು ಕೊಹ್ಲಿಗೆ ಗಂಗೂಲಿ, ಶಾ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಕ್ಟೋಬರ್ 17ರಿಂದ ಆರಂಭವಾಗಲಿದೆ

ಆಸ್ಟ್ರೇಲಿಯಾದ ಈ ಇಬ್ಬರು ಆರ್‌ಸಿಬಿ ಕ್ರಿಕೆಟಿಗರು ಐಪಿಎಲ್ ಭಾಗ-2 ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ..!

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ 2013ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಟೀಂ ಇಂಡಿಯಾಗೆ ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2017ರಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿತ್ತಾದರೂ ಪಾಕಿಸ್ತಾನ ವಿರುದ್ದ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು. ಇನ್ನು 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ಎದುರು ಸೆಮಿಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ಮುಖಭಂಗ ಅನುಭವಿಸಿತ್ತು.