ಕೋವಿಡ್ ಲಸಿಕೆ ಪಡೆದ ಟೀಂ ಇಂಡಿಯಾ ಕ್ರಿಕೆಟಿಗ ಅಜಿಂಕ್ಯ ರಹಾನೆ
ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮುಂಬೈ(ಮೇ.08): ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಮುಂಬೈನಲ್ಲಿಂದು(ಮೇ.08) ಕೋವಿಡ್ ಲಸಿಕೆ ಪಡೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಸ್ಟಾರ್ ಬ್ಯಾಟ್ಸ್‌ಮನ್ ರಹಾನೆ ತಾವು ಮೊದಲ ಡೋಸ್ ಲಸಿಕೆ ಪಡೆದಿರುವುದಾಗಿ ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ.
35 ವರ್ಷದ ಅಜಿಂಕ್ಯ ರಹಾನೆ ತಾವು ಲಸಿಕೆ ಪಡೆಯುತ್ತಿರುವ ಫೋಟೋದೊಂದಿಗೆ ನಾನಿಂದು ಮೊದಲ ಡೋಸ್ ಲಸಿಕೆ ಪಡೆದುಕೊಂಡೆ. ಯಾರೆಲ್ಲಾ ಅರ್ಹರೋ, ಅವರೆಲ್ಲರೂ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಿರಿ ಎಂದು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಈ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಸಹಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು.
ಅಜಿಂಕ್ಯ ರಹಾನೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಾಣಿಸಿಕೊಂಡಿದ್ದರು. ಡೆಲ್ಲಿ ತಂಡದ ಅನುಭವಿ ಸ್ಪಿನ್ನರ್ ಅಮಿತ್ ಮಿಶ್ರಾಗೆ ಕೋವಿಡ್ ದೃಢಪಟ್ಟಿತ್ತು. ಬಯೋ ಬಬಲ್‌ನೊಳಗೆ ಕೋವಿಡ್ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಬಿಸಿಸಿಐ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಐಪಿಎಲ್ 2021: ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಅಂಟಿದ ಕೋವಿಡ್ ಸೋಂಕು..!
ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ತಮ್ಮ ಅಮೋಘ ಪ್ರದರ್ಶನ ಮುಂದುವರೆಸಿತ್ತು. ಆಡಿದ 8 ಪಂದ್ಯಗಳ ಪೈಕಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತ್ತು.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 8 ಪಂದ್ಯವನ್ನಾಡಿದ್ದರೂ, ಅಜಿಂಕ್ಯ ರಹಾನೆ ಕೇವಲ 2 ಪಂದ್ಯಗಳಲ್ಲಷ್ಟೇ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದರು. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ರಹಾನೆಗೆ ಅವಕಾಶ ಸಿಕ್ಕಿರಲಿಲ್ಲ. ಇನ್ನು ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ರಹಾನೆ 8 ಎಸೆತಗಳಲ್ಲಿ 8 ರನ್‌ಗಳನ್ನಷ್ಟೇ ಬಾರಿಸಿದ್ದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona