* ದಕ್ಷಿಣ ಆಫ್ರಿಕಾ ಎದುರಿನ 3 ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ* ತಂಡ ಕೂಡಿಕೊಂಡ ಶ್ರೇಯಸ್ ಅಯ್ಯರ್, ಶಾಬಾಜ್‌ ಅಹಮ್ಮದ್* ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ

ಮುಂಬೈ(ಸೆ.28): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಗೆ ಪರಿಷ್ಕೃತ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದ್ದು, ಮಾರಕ ವೇಗಿ ಉಮೇಶ್ ಯಾದವ್, ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಹಾಗೂ ಆಲ್ರೌಂಡರ್ ಶಾಬಾಜ್ ಅಹಮ್ಮದ್ ತಂಡ ಕೂಡಿಕೊಂಡಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 3 ಪಂದ್ಯಗಳ ಟಿ20 ಸರಣಿಯು ಸೆಪ್ಟೆಂಬರ್ 28ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯಕ್ಕೆ ತಿರುವನಂತಪುರಂ ಸಾಕ್ಷಿಯಾಗಲಿದೆ.

ಇನ್ನು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದೀಪಕ್ ಹೂಡಾ, ದಕ್ಷಿಣ ಆಫ್ರಿಕಾ ಎದುರಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಆಲ್ರೌಂಡರ್ ದೀಪಕ್ ಹೂಡಾ, ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಮತ್ತೋರ್ವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ವೇಗಿ ಭುವನೇಶ್ವರ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಈ ಇಬ್ಬರು ಕೂಡಾ ಎನ್‌ಸಿಎನಲ್ಲಿ ವರದಿ ಮಾಡಿಕೊಳ್ಳಲು ಬಿಸಿಸಿಐ ಸೂಚಿಸಿದೆ. ಇದೀಗ ಆರ್ಶದೀಪ್ ಸಿಂಗ್, ತಿರುವನಂತಪುರಂನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿ, ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿರುವ ಮೊಹಮ್ಮದ್ ಶಮಿ ಅವರನ್ನು ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಗೂ ಆಯ್ಕೆ ಮಾಡಲಾಗಿತ್ತು. ಆಸೀಸ್‌ ಎದುರಿನ ಸರಣಿಗೂ ಮುನ್ನ ಶಮಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದರು. ಇದೀಗ ಮೊಹಮ್ಮದ್ ಶಮಿ ಅವರ ಸ್ಥಾನಕ್ಕೆ ಮತ್ತೋರ್ವ ಅನುಭವಿ ವೇಗಿ ಉಮೇಶ್ ಯಾದವ್‌ಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ಮಣೆ ಹಾಕಿದೆ. ಇನ್ನುಳಿದಂತೆ ದೀಪಕ್ ಹೂಡಾ ಬದಲಿಗೆ ಶ್ರೇಯಸ್‌ ಅಯ್ಯರ್ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಂಡಿದ್ದಾರೆ. ಇದರ ಜತೆಗೆ ಶಾಬಾಜ್ ಅಹಮ್ಮದ್ ಕೂಡಾ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Ind vs SA ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗಿಂದು ಭಾರತ ತಂಡ ಆಯ್ಕೆ

ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಹೊರತುಪಡಿಸಿ, ಬಹುತೇಕ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರೆಲ್ಲರೂ ದಕ್ಷಿಣ ಆಫ್ರಿಕಾ ಎದುರಿನ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ, ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಕೊನೆಯ ಟಿ20 ಸರಣಿಯನ್ನೂ ಗೆದ್ದು ಪೂರ್ಣ ಆತ್ಮವಿಶ್ವಾಸದೊಂದಿಗೆ ಆಸ್ಟ್ರೇಲಿಯಾಗೆ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಎದುರು ನೋಡುತ್ತಿದೆ.

ದಕ್ಷಿಣ ಆಫ್ರಿಕಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:

ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್‌(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಆರ್ಶದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಾಬಾಜ್ ಅಹಮ್ಮದ್.