ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್‌ನಲ್ಲಿ ವಿದರ್ಭ ವಿರುದ್ಧ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿತು. ನಾಯಕ ಮಯಾಂಕ್ ಮತ್ತು ಪಡಿಕ್ಕಲ್ ವಿಫಲವಾದರೂ, ಕರುಣ್ ನಾಯರ್ (76) ಮತ್ತು ಕೃಷ್ಣನ್ ಶ್ರೀಜಿತ್ (51*) ಅವರ ಜವಾಬ್ದಾರಿಯುತ ಆಟದಿಂದ ತಂಡ ಚೇತರಿಸಿಕೊಂಡು ಬೃಹತ್ ಮೊತ್ತದತ್ತ ಸಾಗಿತು.
ಬೆಂಗಳೂರು: 2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಿದ್ದು, ಕರ್ನಾಟಕ ತಂಡವು ಆರಂಭಿಕ ಆಘಾತದ ಬಳಿಕ ಚೇತರಿಸಿಕೊಂಡಿದೆ. ಭರ್ಜರಿ ಫಾರ್ಮ್‌ನಲ್ಲಿದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್‌ವಾಲ್ ಹಾಗೂ ದೇವದತ್ ಪಡಿಕ್ಕಲ್ ಮಹತ್ವದ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರೆ, ಅನುಭವಿ ಆಟಗಾರ ಕರುಣ್ ನಾಯರ್ ಅತ್ಯಂತ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ.
ನಿರ್ಣಾಯಕ ಪಂದ್ಯದಲ್ಲಿ ಕೈಕೊಟ್ಟ ಆರಂಭಿಕರು:
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕರ್ನಾಟಕ ತಂಡವು ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಿತು. ಅದರಲ್ಲೂ ರೆಡ್ ಹಾಟ್ ಫಾರ್ಮ್‌ನಲ್ಲಿದ್ದ ದೇವದತ್ ಪಡಿಕ್ಕಲ್ ಹಾಗೂ ಮಯಾಂಕ್ ಅಗರ್‌ವಾಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ನಾಯಕ ಮಯಾಂಕ್ ಅಗರ್‌ವಾಲ್ 9 ರನ್ ಗಳಿಸಿ ನಚಿಕೇತ್ ಬವುತೆ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಇನ್ನು ಮತ್ತೊಂದು ತುದಿಯಲ್ಲಿ ಯಶ್ ಠಾಕೂರ್ ಬೌಲಿಂಗ್‌ನಲ್ಲಿ ರನ್ ಗಳಿಸಲು ತಿಣುಕಾಡಿದ ದೇವದತ್ ಪಡಿಕ್ಕಲ್ ಬರೋಬ್ಬರಿ 19 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಗಳಿಸಿ 4 ರನ್‌ಗೆ ಯಶ್ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. 20 ರನ್ ಗಳಿಸುವಷ್ಟರಲ್ಲಿ ಕರ್ನಾಟಕದ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು.
ಆಸರೆಯಾದ ಅನುಭವಿ ಬ್ಯಾಟರ್ ಕರುಣ್ ನಾಯರ್:
ಇನ್ನು ಆರಂಭದಲ್ಲೇ ಎರಡು ಪ್ರಮುಖ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಕರ್ನಾಟಕ ತಂಡಕ್ಕೆ ಮೂರನೇ ವಿಕೆಟ್‌ಗೆ ಅನುಭವಿ ಬ್ಯಾಟರ್ ಕರುಣ್ ನಾಯರ್ ಹಾಗೂ ಧ್ರುವ್ ಪ್ರಭಾಕರ್ 54 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಪ್ರಭಾಕರ್ 33 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 28 ರನ್ ಬಾರಿಸಿ ದರ್ಶನ್ ನಾಲ್ಕಂಡೆಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಕರುಣ್ ನಾಯರ್‌ಗೆ ವಿಕೆಟ್ ಕೀಪರ್ ಬ್ಯಾಟರ್ ಕೃಷ್ಣನ್ ಶ್ರೀಜಿತ್ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮೂರನೇ ವಿಕೆಟ್‌ಗೆ ಈ ಜೋಡಿ 97 ಎಸೆತಗಳನ್ನು ಎದುರಿಸಿ 113 ರನ್‌ಗಳ ಅಮೂಲ್ಯ ಜತೆಯಾಟವಾಡಿದೆ.
ಕರ್ನಾಟಕ ತಂಡವು ಸದ್ಯ 33.1 ಓವರ್ ಅಂತ್ಯದ ವೇಳೆಗೆ ನಾಲ್ಕು ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿದ್ದು, ಇದೀಗ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಕರುಣ್ ನಾಯರ್ 90 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 76 ರನ್ ಬಾರಿಸಿ ದರ್ಶನ್ ನಾಲ್ಕಂಡೆಗೆ ಎರಡನೇ ಬಲಿಯಾಗಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ಶ್ರೀಜಿತ್ 47 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 51 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.


