ಚಿನ್ನಸ್ವಾಮಿಯಲ್ಲಿ ಘರ್ಜಿಸಿದ ಕಿಂಗ್ ಕೊಹ್ಲಿ; ಕೆಕೆಆರ್‌ಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್ ವಿಕೆಟ್ ಕಳೆದುಕೊಂಡಿತು. ಫಾಫ್ ಕೇವಲ 8 ರನ್ ಬಾರಿಸಿ ಹರ್ಷಿತ್ ರಾಣಗೆ ವಿಕೆಟ್ ಒಪ್ಪಿಸಿದರು.
ಬೆಂಗಳೂರು(ಮಾ.28): ವಿರಾಟ್ ಕೊಹ್ಲಿ ಬಾರಿಸಿದ ಅಕರ್ಷಕ ಅರ್ಧಶತಕ ಹಾಗೂ ಕ್ಯಾಮರೋನ್ ಗ್ರೀನ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಬಾರಿಸಿದ್ದು, ಕೆಕೆಆರ್‌ಗೆ ಗೆಲ್ಲಲು ಸವಾಲಿನ ಗುರಿ ನೀಡಿದೆ.
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್ ವಿಕೆಟ್ ಕಳೆದುಕೊಂಡಿತು. ಫಾಫ್ ಕೇವಲ 8 ರನ್ ಬಾರಿಸಿ ಹರ್ಷಿತ್ ರಾಣಗೆ ವಿಕೆಟ್ ಒಪ್ಪಿಸಿದರು.
ಕೊಹ್ಲಿ-ಗ್ರೀನ್ ಜುಗಲ್ಬಂದಿ: ಕೇವಲ 17 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ ಎರಡನೇ ವಿಕೆಟ್‌ಗೆ ಕ್ಯಾಮರೋನ್ ಗ್ರೀನ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 65 ರನ್‌ಗಳ ಜತೆಯಾಟವಾಡಿತು. ಕ್ಯಾಮರೋನ್ ಗ್ರೀನ್ ಕೇವಲ 21 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 33 ರನ್ ಬಾರಿಸಿ ಆಂಡ್ರೆ ರಸೆಲ್‌ಗೆ ವಿಕೆಟ್ ಒಪ್ಪಿಸಿದರು.
ಕೊಹ್ಲಿ ಭರ್ಜರಿ ಬ್ಯಾಟಿಂಗ್: ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ, ಮತ್ತೊಮ್ಮೆ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕೊಹ್ಲಿ ಕೇವಲ 36 ಎಸೆತಗಳನ್ನು ಎದುರಿಸಿ ಆಕರ್ಷಕ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಆರ್‌ಸಿಬಿ ದಿಢೀರ್ ವಿಕೆಟ್ ಕಳೆದುಕೊಂಡ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಅಂತಿಮವಾಗಿ ವಿರಾಟ್ ಕೊಹ್ಲಿ 59 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಸಿಡಿಸಿದರು.
ಕೈಕೊಟ್ಟ ಮಧ್ಯಮ ಕ್ರಮಾಂಕ: ಗ್ರೀನ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಫಾರ್ಮ್ ಕಂಡುಕೊಳ್ಳುವ ಯತ್ನ ನಡೆಸಿದರಾದರೂ ದೊಡ್ಡ ಮೊತ್ತ ಕಲೆಹಾಕಲು ಯಶಸ್ವಿಯಾಗಲಿಲ್ಲ. ಮ್ಯಾಕ್ಸಿ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 28 ರನ್ ಬಾರಿಸಿ ನರೈನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟೀದಾರ್ ಹಾಗೂ ಅನೂಜ್ ರಾವತ್ ತಲಾ 3 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು
ಇನ್ನು ಕೊನೆಯಲ್ಲಿ ದಿನೇಶ್ ಕಾರ್ತಿಕ್ ಮತ್ತೊಮ್ಮೆ ಸ್ಪೋಟಕ ಬ್ಯಾಟಿಂಗ್ ನಡೆಸಿ ಆಸರೆಯಾದರು. ಡಿಕೆ 8 ಎಸೆತಗಳಲ್ಲಿ 3 ಬೌಂಡರಿ ಸಹಿತ 20 ರನ್ ಬಾರಿಸಿ ಕೊನೆಯ ಎಸೆತದಲ್ಲಿ ರನೌಟ್ ಆದರು.