Virat Kohli: 2019ರ ಬಳಿಕ ಮೊದಲ ಏಕದಿನ ಶತಕ ಸಿಡಿಸಿದ ಕಿಂಗ್ ಕೊಹ್ಲಿ..!
ಮೂರು ವರ್ಷಗಳ ಬಳಿಕ ಮೊದಲ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ವೃತ್ತಿಜೀವನದ 72ನೇ ಶತಕ ಸಿಡಿಸಿದ ಕಿಂಗ್ ಕೊಹ್ಲಿ
ಬೃಹತ್ ಮೊತ್ತದತ್ತ ಟೀಂ ಇಂಡಿಯಾ ದಾಪುಗಾಲು
ಛಟ್ಟೋಗ್ರಾಮ(ಡಿ.10): ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಬರೋಬ್ಬರಿ ಮೂರು ವರ್ಷಗಳ ಬಳಿಕ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂಗ್ಲಾದೇಶ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ರಂಜಿಸಿದ್ದಾರೆ.
ಹೌದು, ವಿರಾಟ್ ಕೊಹ್ಲಿ 2019ರ ಆಗಸ್ಟ್ 14ರಂದು ವೆಸ್ಟ್ ಇಂಡೀಸ್ ವಿರುದ್ದ ಅಜೇಯ 114 ರನ್ ಸಿಡಿಸಿದ್ದರು. ಇದಾದ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಶತಕದ ಬರ ಅನುಭವಿಸಿದ್ದರು. ಇದೀಗ ಬಾಂಗ್ಲಾದೇಶ ಎದುರಿನ ಮೂರನೇ ಪಂದ್ಯದಲ್ಲಿ ಕೇವಲ 85 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 44ನೇ ಶತಕ ಸಿಡಿಸಿ ಸಂಭ್ರಮಿಸಿದರು.
ಜೀವದಾನ ಬಳಸಿಕೊಂಡ ವಿರಾಟ್ ಕೊಹ್ಲಿ: ಮಾಜಿ ನಾಯಕ ವಿರಾಟ್ ಕೊಹ್ಲಿ ಒಂದಂಕಿ ಮೊತ್ತ ದಾಖಲಿಸಿದ್ದಾಗಲೇ ವಿಕೆಟ್ ಒಪ್ಪಿಸುತ್ತಿದ್ದರು. ಆದರೆ ಮೆಹದಿ ಹಸನ್ ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ನಾಯಕ ಲಿಟನ್ ದಾಸ್ ಸುಲಭ ಕ್ಯಾಚ್ ಕೈಚೆಲ್ಲಿದರು. ಇದರ ಸಂಪೂರ್ಣ ಲಾಭವನ್ನು ಬಳಸಿಕೊಳ್ಳುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾದರು. ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಆಫ್ಘಾನಿಸ್ತಾನ ಎದುರು ಕೊನೆಯ ಬಾರಿಗೆ ಶತಕವನ್ನು ಸಿಕ್ಸರ್ ಮೂಲಕ ಪೂರೈಸಿದಿದ್ದ ವಿರಾಟ್ ಕೊಹ್ಲಿ, ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಸಿಕ್ಸರ್‌ನೊಂದಿಗೆ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು.
Ishan Kishan ದಾಖಲೆಯ ದ್ವಿಶತಕ ಸಿಡಿಸಿ ಅಬ್ಬರಿಸಿದ ಇಶಾನ್ ಕಿಶನ್..! ಬಾಂಗ್ಲಾದೇಶ ಕಂಗಾಲು
ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ: ಹೌದು, ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ 72ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಎರಡನೇ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದೆ. ಸಚಿನ್ ತೆಂಡುಲ್ಕರ್ 100 ಅಂತಾರಾಷ್ಟ್ರೀಯ ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 72* ಹಾಗೂ ರಿಕಿ ಪಾಂಟಿಂಗ್ 71 ಶತಕಗಳೊಂದಿಗೆ ಮೊದಲ 3 ಸ್ಥಾನಗಳಲ್ಲಿದ್ದಾರೆ.